ಗ್ಯಾರಂಟಿ ಯೋಜನೆಗಳ ಅನುಷ್ಟಾನದಲ್ಲಿ ಪ್ರಗತಿ ಸಾಧಿಸಿ

17rajesh7
Published on

ಚಾಮರಾಜನಗರ: ಗ್ಯಾರಂಟಿ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸಿ ಯೋಜನೆಗಳ ಅನುಷ್ಠಾನದಲ್ಲಿ ಇನ್ನೂ ಹೆಚ್ಚಿನ ಪ್ರಗತಿ ಸಾಧಿಸಲು ಮುಂದಾಗಬೇಕು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಚಾಮರಾಜನಗರ ತಾಲೂಕು ಅಧ್ಯಕ್ಷ ಸೋಮೇಶ್ವರ ತಿಳಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಹಳೇ ಕೆ.ಡಿ.ಪಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸರ್ಕಾರವು ಗ್ಯಾರಂಟಿ ಯೋಜನೆಗಳನ್ನು ರೂಪಿಸಿ ಯಶಸ್ವಿಯಾಗಿ ಅನುಷ್ಠಾನಗೊಳಿಸಿದೆ. ಜಿಲ್ಲೆಯು ಗೃಹಲಕ್ಷ್ಮೀ ಹಾಗೂ ಶಕ್ತಿ ಯೋಜನೆಗಳ ಅನುಷ್ಠಾನದಲ್ಲಿ ಇತರೆ ಜಿಲ್ಲೆಗಳಿಗಿಂತ ಮುಂಚೂಣಿಯಲ್ಲಿದೆ. ಹಾಗೇಯೇ ಅನ್ನಭಾಗ್ಯ, ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳಲ್ಲಿ ಹೆಚ್ಚಿನ ಪ್ರಗತಿ ಸಾಧಿಸಬೇಕು ಎಂದರು.

ಗೃಹಲಕ್ಷ್ಮೀ ಯೋಜನೆ ಅನುಷ್ಟಾನದಲ್ಲಿ ಚಾಮರಾಜನಗರ ಜಿಲ್ಲೆ ರಾಜ್ಯದಲ್ಲಿಯೇ ಮೊದಲ ಸ್ಥಾನದಲ್ಲಿದೆ. ಯೋಜನೆ ಎಲ್ಲಾ ಮಹಿಳಾ ಫಲಾನುಭವಿಗಳನ್ನು ತಲುಪಬೇಕು. ಫಲಾನುಭವಿಗಳ ನೊಂದಣಿ ಸಂದರ್ಭದಲ್ಲಿ ಯಾವುದೇ ತಾಂತ್ರಿಕ ಸಮಸ್ಯೆ ಎದುರಾದರು ಅದನ್ನು ಪರಿಹರಿಸಿಕೊಂಡು ಸಂಪೂರ್ಣ ಪ್ರಗತಿ ಸಾಧಿಸಲು ಅಧಿಕಾರಿಗಳು ಕ್ರಮ ವಹಿಸಬೇಕು. ಅನುದಾನಕ್ಕೆ ಕೊರತೆ ಕಂಡುಬಂದರೆ ಕೂಡಲೆ ಸರ್ಕಾರದೊಂದಿಗೆ ಪತ್ರವ್ಯವಹಾರ ಮಾಡುವಂತೆ ತಿಳಿಸಿದರು.

ಯುವನಿಧಿ ಯೋಜನೆಯಡಿ ನೊಂದಣಿಯಾಗಿರುವ ಫಲಾನುಭವಿಗಳು ಪ್ರತಿ ತಿಂಗಳು ಕಡ್ಡಾಯವಾಗಿ ಸೆಲ್ಪ್ ಡಿಕ್ಷರೇಷನ್ ನೀಡಬೇಕು. ಶಕ್ತಿ ಯೋಜನೆಯಡಿ ಮಹಿಳಾ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಯಳಂದೂರು ತಾಲೂಕಿನ ಕೃಷ್ಣಾಪುರ ಸರ್ಕಲ್‌ನಲ್ಲಿ ಬಸ್ ನಿಲುಗಡೆ ಮಾಡಬೇಕು. ದೊಡ್ಡಮೋಳೆ, ಬ್ಯಾಡಮೂಡ್ಲು ಹಾಗೂ ಚಂದುಕಟ್ಟೆ ಮೋಳೆ ಮಾರ್ಗದಲ್ಲಿ ಶಾಲಾಮಕ್ಕಳು ಹಾಗೂ ಕೂಲಿ ಕಾರ್ಮಿಕರು ಪ್ರಯಾಣಿಸಲು ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಯೋಜನಾ ಅಂದಾಜು ಮತ್ತು ಮೌಲ್ಯಮಾಪನ ಅಧಿಕಾರಿ ವಿ. ದೀಪಾ, ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿಯ ಗುಂಡ್ಲುಪೇಟೆ ತಾಲೂಕು ಅಧ್ಯಕ್ಷ ಉಮಾಪತಿ, ಉಪಾಧ್ಯಕ್ಷ ರಾಜಶೇಖರ್, ಸದಸ್ಯ ಪ್ರದೀಪ್, ಕೊಳ್ಳೇಗಾಲ ತಾಲೂಕು ಉಪಾಧ್ಯಕ್ಷ ರವಿ ಬಸ್ತೀಪುರ, ಚಾಮರಾಜನಗರ ತಾಲೂಕು ಸಮಿತಿ ಸದಸ್ಯರಾದ ಹೊಂಗನೂರು ಜಯರಾಜು, ಭಾಗ್ಯ ಉಮ್ಮತ್ತೂರು, ಯಳಂದೂರು ತಾಲೂಕು ಸಮಿತಿ ಸದಸ್ಯ ದೇವರಾಜು ಕೃಷ್ಣಾಪುರ, ಜಿಲ್ಲಾಮಟ್ಟದ ಅಧಿಕಾರಿಗಳು, ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net