

ಮೈಸೂರು: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಿಸಬೇಕು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷ ಗುರುಸ್ವಾಮಿ ತಿಳಿಸಿದರು.
ತಾಲೂಕು ಪಂಚಾಯಿತಿಯಲ್ಲಿ ಸೋಮವಾರ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ತಾಲೂಕು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಕ್ಷೇತ್ರವಾಗಿದ್ದು, ಅಧಿಕಾರಿಗಳು ಬದ್ಧತೆಯಿಂದ ಕೆಲಸ ಮಾಡಬೇಕು.
ಸರ್ಕಾರವು ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಯಶಸ್ಸು ಕಂಡಿದೆ. ಇಲಾಖೆ ಅಧಿಕಾರಿಗಳು ಹಾಗೂ ಸಮಿತಿ ಪರಸ್ಪರ ಸಮನ್ವಯದಿಂದ ಕೆಲಸ ಮಾಡಬೇಕಿದೆ ಎಂದು ನುಡಿದರು.
ಅನ್ನಭಾಗ್ಯ ಯೋಜನೆಯಡಿ ತಾಲೂಕಿನಲ್ಲಿ 98,873 ಪಡಿತರ ಚೀಟಿಗಳ ಕುಟುಂಬದ ಸದಸ್ಯರು ಸೌಲಭ್ಯ ಪಡೆಯುತ್ತಿದ್ದಾರೆ. ಸರ್ಕಾರದ ಮಾರ್ಗಸೂಚಿ ಅನ್ವಯ ಆಹಾರ ಧಾನ್ಯಗಳನ್ನು ನಿಗದಿತ ಸಮಯಕ್ಕೆ ವಿತರಿಸಬೇಕು. ವಿಳಂಬ ಧೋರಣೆ ಅನುಸರಿಸುವ ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ನೋಟಿಸ್ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಗೃಹಲಕ್ಷ್ಮಿ ಸೌಲಭ್ಯ ಪಡೆಯಲು ತಾಂತ್ರಿಕ ಸಮಸ್ಯೆ ಕಂಡುಬಂದರೆ ತಕ್ಷಣ ಸ್ಪಂದಿಸಬೇಕು. ಯುವ ನಿಧಿ ಯೋಜನೆಯಲ್ಲಿ 4,297 ಫಲಾನುಭವಿಗಳಿದ್ದು, ಇನ್ನೂ ಹೆಚ್ಚಿನ ಅಭ್ಯರ್ಥಿಗಳನ್ನು ನೋಂದಣಿ ಮಾಡಿಸಬೇಕು. ಗೃಹಜ್ಯೋತಿಯಲ್ಲಿ ಸೌಲಭ್ಯ ಒದಗಿಸುವಲ್ಲಿ ಯಾವುದೇ ದೂರುಗಳ ಬರದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
ಶಕ್ತಿ ಯೋಜನೆಯು ಮಹಿಳೆಯರ ಸ್ವಾವಲಂಬಿ ಬದುಕಿಗೆ ನೆರವಾಗಿದೆ. ಈ ನಡುವೆ ಬಸ್‌ಗಳನ್ನು ಬೇಜವಾಜ್ದಾರಿಯಿಂದ ಚಾಲನೆ ಮಾಡುವ ಬಗ್ಗೆ ದೂರುಗಳು ಬರುತ್ತಿವೆ ಎಂದು ಸಭೆಯಲ್ಲಿ ಸದಸ್ಯರು ಪ್ರಸ್ತಾಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಗುರುಸ್ವಾಮಿ, ಅಂತಹ ಚಾಲಕರಿಗೆ ಮನವರಿಕೆ ಮಾಡಿ. ಮುಂದುವರಿಸಿದರೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗೆ ಹೇಳಿದರು.
ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸಿ.ಕೃಷ್ಣ ಮಾತನಾಡಿ, ನಾವೆಲ್ಲರೂ ಸರ್ಕಾರದ ಸೂಚನೆಯಂತೆ ಕರ್ತವ್ಯ ನಿರ್ವಹಿಸಬೇಕು. ಕಟ್ಟಕಡೆಯ ಅರ್ಹ ಫಲಾನುಭವಿಗಳಿಗೂ ಈ ಐದು ಗ್ಯಾರಂಟಿ ಯೋಜನೆ ತಲುಪಿಸಲು ಶ್ರಮವಹಿಸಬೇಕು. ಈ ಯೋಜನೆಗಳಿಗೆ ಸಂಬಂಧಿಸಿದಂತೆ ತಾಂತ್ರಿಕ ಸಮಸ್ಯೆ ಎದುರಾದರೆ ಕೂಡಲೇ ಪರಿಹರಿಸುವ ಕೆಲಸವನ್ನು ಅಧಿಕಾರಿ ಮಾಡಬೇಕು ಎಂದು ಸೂಚಿಸಿದರು.
ತಾಲೂಕು ಆಡಳಿತ ಕಚೇರಿಯ 2ನೇ ಮಹಡಿಯಲ್ಲಿ ನಿರ್ಮಿಸಿರುವ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ನೂತನ ಕಚೇರಿಯನ್ನು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ಅರುಣ್ ಕುಮಾರ್ ಉದ್ಘಾಟಿಸಿದರು.
ಉಪಾಧ್ಯಕ್ಷರಾದ ಶಿವಕುಮಾರ್, ಲತಾ ರಾಜಶೇಖರ್, ತಾಲೂಕು ಅಧ್ಯಕ್ಷ ಗುರುಸ್ವಾಮಿ, ಮುಡಾ ಮಾಜಿ ಅಧ್ಯಕ್ಷ ಸಿ.ಮರಿಗೌಡ, ಸದಸ್ಯರು ಇದ್ದರು. ಈ ಸಂದರ್ಭದಲ್ಲಿ ಯುವನಿಧಿ ನೋಂದಣಿ ಅಭಿಯಾನದ ಭಿತ್ತಿಪತ್ರ ಬಿಡುಗಡೆ ಮಾಡಲಾಯಿತು.
---------