ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಸದೃಢತೆ

06rajesh12
Published on

ಚಾಮರಾಜನಗರ: ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಂದ ಪ್ರತಿತಿಂಗಳು ಪ್ರತಿ ಕುಟುಂಬಕ್ಕೆ ತಲಾ 5 ಸಾವಿರ ರೂ. ದೊರೆಯುತ್ತಿರುವುದರಿಂದ ಬಡಕುಟುಂಬಗಳು ಆರ್ಥಿಕವಾಗಿ ಸದೃಢಗೊಳ್ಳಲಿವೆ ಎಂದು ಎಂಎಸ್‌ಐಎಲ್ ಅಧ್ಯಕ್ಷ ಹಾಗೂ ಶಾಸಕ ಸಿ.ಪುಟ್ಟರಂಗಶೆಟ್ಟಿ ತಿಳಿಸಿದರು.

ತಾಲೂಕಿನ ಬಂಡಿಗೆರೆ ಗ್ರಾಮದ ಉಪ್ಪಾರ ಸಮುದಾಯ ಭವನದಲ್ಲಿ ಶನಿವಾರ ಆಯೋಜಿಸಲಾಗಿದ್ದ ಹರದನಹಳ್ಳಿ ಹೋಬಳಿಮಟ್ಟದ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ ಹಾಗೂ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ದೇಶ ಸ್ವಾತಂತ್ರ್ಯಗೊಂಡು 78 ವರ್ಷಗಳೇ ಕಳೆದಿದ್ದರೂ ಸಾಮಾಜಿಕವಾಗಿ ಬಡವರ ಪರವಾಗಿ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದು ಕಡಿಮೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರವು ಬಡವರು, ಮಹಿಳೆಯರು, ಶೋಷಿತರು, ಹಿಂದುಳಿದವರ ಅಭಿವೃದ್ಧಿಗಾಗಿ ಸಾಕಷ್ಟು ಜನಪರ ಯೋಜನೆಗಳನ್ನು ಅನುಷ್ಟಾನಗೊಳಿಸಿದೆ. ಪ್ರಸ್ತುತ ಸರ್ಕಾರವು ಅನುಷ್ಟಾನ ಮಾಡಿರುವ ಗೃಹಲಕ್ಷ್ಮೀ, ಗೃಹಜ್ಯೋತಿ, ಅನ್ನಭಾಗ್ಯ, ಶಕ್ತಿ ಹಾಗೂ ಯುವನಿಧಿ ಎಂಬ ಪಂಚ ಗ್ಯಾರಂಟಿ ಯೋಜನೆಗಳಿಂದ ಪ್ರತಿ ಕುಟುಂಬಗಳು ಸದೃಢವಾಗಲಿವೆ ಎಂದು ತಿಳಿಸಿದರು.

ಡಿ. ದೇವರಾಜ ಅರಸು ಅವರನ್ನು ಹೊರತುಪಡಿಸಿದರೆ ಸಾಮಾಜಿಕ ಕಳಕಳಿ ಇರುವ ಮುಖ್ಯಮಂತ್ರಿ ಎಂದರೇ ಅದು ಸಿದ್ದರಾಮಯ್ಯ ಅವರು ಮಾತ್ರ. ಪಂಚ ಗ್ಯಾರಂಟಿ ಯೋಜನೆಗಳಿಗೆ ಸರ್ಕಾರವು ಪ್ರತಿ ವರ್ಷಕ್ಕೆ 53 ಸಾವಿರ ಕೋಟಿ ರೂ. ಮೀಸಲಿರಿಸಿದೆ. ಶಕ್ತಿ ಯೋಜನೆಯಡಿ ಮಹಿಳೆಯರು ರಾಜ್ಯದ ಪ್ರಸಿದ್ದ ಧಾರ್ಮಿಕ ಕ್ಷೇತ್ರಗಳಿಗೆ ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ಗೃಹಲಕ್ಷ್ಮೀ ಯೋಜನೆಯಿಂದ ಆರ್ಥಿಕ ಸ್ವಾವಲಂಬನೆ, ಅನ್ನಭಾಗ್ಯದಡಿ ಬಡ ಕುಟುಂಬಗಳು ನೆಮ್ಮದಿ ಕಾಣುತ್ತಿವೆ. ಯುವನಿಧಿಯಿಂದ ವಿದ್ಯಾರ್ಥಿಗಳಿಗೆ ಸಹಾಯವಾಗುತ್ತಿದೆ. ಗೃಹಜ್ಯೋತಿಯಡಿ ವಿದ್ಯುತ್ ಹಣ ಉಳಿತಾಯವಾಗುತ್ತಿದೆ. ಒಟ್ಟಿನಲ್ಲಿ ಸರ್ಕಾರ ಬಡವರ ಪರವಾಗಿದೆ ಎಂದರು.‘

ಜಿಲ್ಲೆಯ ಅಭಿವೃದ್ಧಿಗೂ ಸರ್ಕಾರ ಹೆಚ್ಚಿನ ಒತ್ತು ನೀಡಿದ್ದು, ಚಾಮರಾಜನಗರ ವಿಧಾನಸಭಾ ಕ್ಷೇತ್ರವ್ಯಾಪ್ತಿಯಲ್ಲಿ ಸಮುದಾಯ ಭವನಗಳು, ರಸ್ತೆಗಳ ಪ್ರಗತಿಗಾಗಿ 100 ಕೋಟಿ 62 ಲಕ್ಷ ರೂ. ವೆಚ್ಚದಲ್ಲಿ ಗುದ್ದಲಿಪೂಜೆ ನೆರವೇರಿಸಲಾಗಿದೆ. ಕುಡಿಯುವ ನೀರನ್ನು ಸಮರ್ಪಕವಾಗಿ ಒದಗಿಸಲು ತಾಲೂಕಿನ ಎಲ್ಲಾ ಕೆರೆಗಳನ್ನು ತುಂಬಿಸಲಾಗುತ್ತಿದೆ. ರೈತರಿಗೂ ಇದರಿಂದ ಅನುಕೂಲವಾಗಿದೆ. ಕೆಲ್ಲಂಬಳ್ಳಿಯ ಕೈಗಾರಿಕಾ ಪ್ರದೇಶದಲ್ಲಿ 20ರಿಂದ 30 ಸಾವಿರ ಜನರಿಗೆ ಕೆಲಸ ದೊರೆತಿದೆ. ಜಿಲ್ಲೆಯ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ವೈದ್ಯಕೀಯ, ಇಂಜಿನಿಯರಿಂಗ್, ಕಾನೂನು ಕಾಲೇಜುಗಳನ್ನು ತೆರೆಯಲಾಗಿದೆ. ತಾಲೂಕಿನ ಜನತೆ ಬಾಲ್ಯವಿವಾಹಕ್ಕೆ ಆದ್ಯತೆ ನೀಡದೇ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಿ. ಸರ್ಕಾರದ ಸೌಲಭ್ಯಗಳನ್ನು ಸದ್ಭಳಕೆ ಮಾಡಿಕೊಳ್ಳುವಂತೆ ಸಲಹೆ ಮಾಡಿದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಚ್.ವಿ.ಚಂದ್ರು ಮಾತನಾಡಿ, ಇಡೀ ದೇಶದಲ್ಲಿಯೇ ಮೊದಲಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಂಚ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿ ಇತರೆ ರಾಜ್ಯಗಳಿಗೆ ಮಾದರಿಯಾಗಿದ್ದಾರೆ. ಗ್ಯಾರಂಟಿ ಯೋಜನೆಗಳು ಬಡವರಿಗೆ ಆರ್ಥಿಕ ಭದ್ರತೆ ನೀಡಲಿವೆ ಎಂದರು.

ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ನಲ್ಲೂರು ಸೋಮೇಶ್ವರ್, ಹರದನಹಳ್ಳಿ ಗ್ರಾ.ಪಂ ಅಧ್ಯಕ್ಷ ಮಂಜುನಾಥ್, ಉಪಾಧ್ಯಕ್ಷೆ ಯಶೋಧಮ್ಮ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಗಿರಿಧರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾದ ಮಾದಾಪುರ ಕುಮಾರ್, ಮೂಡಹಳ್ಳಿ ರಾಜೇಶ್, ಗಣೇಶ್ ಕುಮಾರ್, ಮಂಜುಳ, ಮರಿಯಾಲದಹುಂಡಿ ಕುಮಾರ್, ರಾಜು, ರಮೇಶ್, ಮಲ್ಲಿಕಾರ್ಜುನ, ಚಿನ್ನಸ್ವಾಮಿ, ಜಡೆಯಪ್ಪ ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net