ಗ್ಯಾರಂಟಿ ಯೋಜನೆಗಳಿಂದ ನೆಮ್ಮದಿಯ ಜೀವನ

ಚಿತ್ರ 30ಎಸ್ ಡಿ ಪಿ 01
Published on

ಸಿದ್ದಾಪುರ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಪ್ರತಿ ಫಲಾನುಭವಿಗೂ ತಲುಪಿಸಲು ಕಾರ್ಯಕರ್ತರು ಮುಂದಾಗಬೇಕು ಎಂದು ಕೊಡಗು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ ಹೇಳಿದರು.

ಕೊಡಗು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದಿಂದ ಸಿದ್ದಾಪುರ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಯೋಜನೆಯ ಕೆಲವು ಸಮಸ್ಯೆಗಳಿಗೆ ಪರಿಹಾರ ಕಲ್ಪಸುವ ಸಂಬಂಧ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿ, ಗ್ಯಾರಂಟಿ ಯೋಜನೆಗಳಿಂದಲೇ ಜನರು ನೆಮ್ಮದಿಯ ಜೀವನ ನಡೆಸುತ್ತಿದ್ದು, ಆರ್ಥಿಕವಾಗಿ ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ. ಗ್ರಾಮೀಣ ಭಾಗದ ಜನರಿಗೂ ಎಲ್ಲ ಯೋಜನೆಗಳು ತಲುಪುವಂತಾಗಲು ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ತಾಂತ್ರಿಕ ಸಮಸ್ಯೆಗಳಿಂದ ಕೆಲವು ಫಲಾನುಭವಿಗಳಿಗೆ ಸಿಗುತ್ತಿಲ್ಲ ಎಂಬ ದೂರಿನ ಹಿನ್ನೆಲೆಯಲ್ಲಿ ಅಧಿಕಾರಿಗಳು ಫಲಾನುಭವಿಗಳ ದಾಖಲಾತಿ ಸಮಸ್ಯೆಗಳನ್ನು ಬಗೆಹರಿಸಿ ಅನುಕೂಲ ಕಲ್ಪಿಸಿಕೊಡುತ್ತಿದ್ದಾರೆ ಎಂದು ಹೇಳಿದರು.

ವಿರಾಜಪೇಟೆ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಪಿ.ವಿ.ಜಾನ್ಸನ್ ಮಾತನಾಡಿ, ರಾಜ್ಯದಲ್ಲೇ ಮೊದಲ ಬಾರಿಗೆ ಗ್ರಾಮೀಣ ಭಾಗದ ಜನರಿಗೂ ಸರ್ಕಾರದ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಲು ಜಾಗೃತಿ ಆಂದೋಲನ ಹಮ್ಮಿಕೊಳ್ಳಲಾಗಿದೆ. ತಾಲೂಕಿನಾದ್ಯಂತ ಜಾಗೃತಿ ಕಾರ್ಯಕ್ರಮ ಮುಂದುವರಿಯಲಿದೆ. ಅಧಿಕಾರಿಗಳ ಸಮ್ಮುಖದಲ್ಲೇ ಸಮಸ್ಯೆಗಳಿಗೆ ಪರಿಹಾರ ಕಂಡು ಎಲ್ಲ ಫಲಾನುಭವಿಗಳಿಗೂ ಯೋಜನೆ ತಲುಪಿಸಲು ಮುಂದಾಗಿರುವುದಾಗಿ ತಿಳಿಸಿದರು.

ಸಭೆಯಲ್ಲಿ ಕೆಲ ಫಲಾನುಭವಿಗಳು, ಅಗತ್ಯ ದಾಖಲಾತಿ ಮಾಡಿಕೊಳ್ಳಲು ಕಚೇರಿಗಳಿಗೆ ಅಲೆಯುವಂತಾಗಿದೆ ಎಂದು ದೂರಿದರು. ಸರ್ಕಾರದ ಯೋಜನೆಗಳನ್ನು ಪಡೆದುಕೊಳ್ಳಲು ಅಗತ್ಯ ದಾಖಲೆಗಳನ್ನು ಸರಿಪಡಿಸಿ ಫಲಾನುಭವಿಗಳು ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಿ ಎಂದು ಅನುಷ್ಠಾನ ಸಮಿತಿಯ ಅಧ್ಯಕ್ಷರು ನಿರ್ದೇಶನ ನೀಡಿದರು.

ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಗಿರಿ ಸತೀಶ್, ಸಿದ್ದಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರೇಮ್ ಗೋಪಾಲ್, ಉಪಾಧ್ಯಕ್ಷ ಪಳನಿ ಸ್ವಾಮಿ, ವಲಯ ಕಾಂಗ್ರೆಸ್ ಅಧ್ಯಕ್ಷ ಪ್ರತಿಶ, ಅನುಷ್ಠಾನ ಸಮಿತಿ ಸದಸ್ಯರಾದ ಕಾವೇರಮ್ಮ, ಯಮುನಾ, ಹರೀಶ್, ವಿ.ಕೆ.ಬಶೀರ್, ಗಣೇಶ್, ಸುಕೂರ್ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net