ಗ್ಯಾರಂಟಿ ಯೋಜನೆಗಳಿಗೆ ಎಸ್‌ಸಿಪಿ, ಟಿಎಸ್‌ಪಿ ಅನುದಾನ ಬಳಕೆಗೆ ವಿರೋಧಿಸಿ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ

18
Published on

ಮೈಸೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ ಮೀಸಲಿಟ್ಟಿರುವ ಎಸ್‌ಸಿಎಸ್‌ಪಿ, ಟಿಎಸ್‌ಪಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುತ್ತಿರುವುದನ್ನು ವಿರೋಧಿಸಿ ದಲಿತ ಸಂಘರ್ಷ ಸಮಿತಿಯಿಂದ ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಯಿತು.
ಪುರಭವನ ಮುಂಭಾಗದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಬಳಿ ಧರಣಿ ನಡೆಸಿದ ಪ್ರತಿಭಟಕಾರರು, ಯಾವುದೇ ಕಾರಣಕ್ಕೂ ದಲಿತರ ಏಳಿಗೆಗಾಗಿ ಮೀಸಲಿಟ್ಟಿರುವ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಳ್ಳಬಾರದು ಎಂದು ಮುಖ್ಯಮಂತ್ರಿ ಅವರನ್ನು ಒತ್ತಾಯಿಸಿದರು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡವನ್ನು ಸಮಾಜದ ಮುಖ್ಯವಾಹಿನಿಗೆ ತರಲು, ಅವರ ಶಿಕ್ಷಣ, ಮೂಲಸೌಕರ್ಯಗಳು ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಎಸ್‌ಸಿಎಸ್‌ಪಿ, ಟಿಎಸ್‌ಪಿ ಉಪಯೋಜನೆ ಜಾರಿಗೊಳಿಸಬೇಕು. ಅದಕ್ಕಾಗಿ ಜನಸಂಖ್ಯೆಗೆ ಅನುಗುಣವಾಗಿ ಅನುದಾನ ಮೀಸಲಿಡಲಾಗಿದೆ. ಆದರೆ, ಈ ಹಣವನ್ನು ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಳ್ಳುತ್ತಿರುವುದು ಸರಿಯಲ್ಲ ಎಂದು ಟೀಕಿಸಿದರು.
ಪರಿಶಿಷ್ಟರಲ್ಲದವರು ಫಲಾನುಭವಿಗಳಾಗುವ ಯಾವುದೇ ಯೋಜನೆಗಳಿಗೆ ಎಸ್‌ಸಿಎಸ್‌ಪಿ, ಟಿಎಸ್‌ಪಿ ಹಣ ಬಳಸಬಾರದು. ಕಾಯ್ದೆಗೆ ವಿರುದ್ಧವಾಗಿ ಮೀಸಲು ಹಣ ದುರುಪಯೋಗಪಡಿಸಿಕೊಳ್ಳುವ ಅಧಿಕಾರಿಗಳನ್ನು ನೇರ ಹೊಣೆಗಾರರನ್ನಾಗಿ ಮಾಡಿ ಕಠಿಣ ಶಿಕ್ಷೆ ವಿಧಿಸಬೇಕು. ಮೀಸಲು ಹಣ ದುರುಪಯೋಗಪಡಿಸಿಕೊಳ್ಳಲು ಶಿಫಾರಸು ಮಾಡುವ ಜನಪ್ರತಿನಿಧಿಗಳ ಸದಸ್ಯತ್ವ ರದ್ದುಗೊಳಿಸಬೇಕು. ಬ್ಯಾಕ್‌ಲಾಗ್ ಹುದ್ದೆಗಳನ್ನು ತುಂಬಲು ತ್ವರಿತವಾಗಿ ಕ್ರಮ ವಹಿಸಬೇಕು. ಎಸ್‌ಸಿ, ಎಸ್‌ಟಿ ಪಟ್ಟಿಗೆ ಬೇರೆ ಸಮುದಾಯಗಳನ್ನು ಸೇರ್ಪಡೆ ಮಾಡಬಾರದು. ಈಗ ಇರುವ ಆದಾಯ ಮಿತಿಯನ್ನು 10 ಲಕ್ಷ ರೂ.ಗೆ ಏರಿಸಬೇಕು. ಕಲ್ಯಾಣ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಖಾಸಗೀಕರಣ, ಹೊರಗುತ್ತಿಗೆಯಂತಹ ಪದ್ಧತಿ ರದ್ದುಪಡಿಸಬೇಕು. ಸಾರ್ವಜನಿಕ ಉದ್ದಿಮೆಗಳನ್ನು ಸ್ಥಾಪಿಸುವ ಮೂಲಕ ಪರಿಶಿಷ್ಟರಿಗೆ ಉದ್ಯೋಗ ಒದಗಿಸಬೇಕೆಂದು ಒತ್ತಾಯಿಸಿದರು.
ದಸಂಸ ಸಂಚಾಲಕ ಚೋರನಹಳ್ಳಿ ಶಿವಣ್ಣ, ಮುಖಂಡರಾದ ಕೆ.ವಿ.ದೇವೇಂದ್ರ, ಕಿರಂಗೂರು ಸ್ವಾಮಿ, ಹಾರೋಹಳ್ಳಿ ನಟರಾಜ್, ಶಿವಮೂರ್ತಿ ಶಂಕರಪುರ, ಸಣ್ಣಯ್ಯ ಲಕ್ಕೂರು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net