ಗ್ಯಾರಂಟಿಗಳಿಂದ ಬಡವರಿಗೆ ಅನುಕೂಲ

h11-Abbayya 2
Published on

ಗ್ಯಾರಂಟಿಗಳಿಂದ ಬಡವರಿಗೆ ಅನುಕೂಲ

ಹುಬ್ಬಳ್ಳಿ: ಜಿಎಸ್​ಟಿ, ಪೆಟ್ರೋಲ್-ಡೀಸೆಲ್ ಹಾಗೂ ಅಡುಗೆ ಅನಿಲ ಬೆಲೆ ಏರಿಕೆಯಿಂದ ಕೇಂದ್ರದ ಬಿಜೆಪಿ ಸರ್ಕಾರ ಬಡವರ ಹಾಗೂ ಜನ ಸಾಮಾನ್ಯರ ಜೀವ ಹಿಂಡಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಬಡವರಿಗೆ ಅನುಕೂಲಕರವಾಗಿದೆ ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.

ಹುಬ್ಬಳ್ಳಿ ಸಿಬಿಟಿಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆಗೆ ಭಾನುವಾರ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ 5 ಗ್ಯಾರಂಟಿ ಯೋಜನೆಗಳಿಂದ ಪ್ರತಿ ಬಡ ಕುಟುಂಬಕ್ಕೆ ತಿಂಗಳಿಗೆ 6ರಿಂದ 8 ಸಾವಿರ ರೂ. ಉಳಿತಾಯವಾಗಲಿದೆ ಎಂದರು.

ಪ್ರಜಾಪ್ರಭುತ್ವದಲ್ಲಿ ಟೀಕೆಗಳನ್ನು ಮಾಡಲು ಅವಕಾಶವಿದೆ. ಆದರೆ, ಆರೋಪ ಮಾಡಬಾರದು. ವಿದ್ಯುತ್ ದರ ಏರಿಕೆ ವಿಷಯದಲ್ಲಿ ಬಿಜೆಪಿಯವರು ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಬಡವರ ಪರ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರುತ್ತಿದೆ. ಕೇಂದ್ರದ ಬಿಜೆಪಿ ಸರ್ಕಾರ ಶ್ರೀಮಂತರ ಪರವಾಗಿ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.

ಸಿಬಿಟಿಯಿಂದ ಸಿದ್ಧಾರೂಢ ಮಠಕ್ಕೆ ತೆರಳುವ ನಗರ ಸಾರಿಗೆ ಬಸ್​ನಲ್ಲಿ ಮಹಿಳಾ ಪ್ರಯಾಣಿಕರಿಗೆ ಶಾಸಕ ಅಬ್ಬಯ್ಯ ಟಿಕೆಟ್ ವಿತರಿಸಿದರು. ಶ್ರೀದೇವಿ ಕೆ. ಬಸ್​ನ ಚಾಲಕಿಯಾಗಿದ್ದರು. ಬಸ್​ಗೆ ಬಲೂನ್​ಗಳನ್ನು ಕಟ್ಟಿ ವಿಶೇಷವಾಗಿ ಶೃಂಗರಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net