ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ವರ್ಗಾವಣೆಗೆ ಆಗ್ರಹ

Nagalambika
Published on

ಚಾಮರಾಜನಗರ: ಗೋವಿಂದವಾಡಿ ಗ್ರಾಮ ಪಂಚಾಯಿತಿ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ, ಅವಾಚ್ಯ ಶಬ್ಧಗಳನ್ನು ಬಳಸುತ್ತಿರುವ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಪಿ.ಗಿರೀಶ್ ಅವರನ್ನು ವರ್ಗಾವಣೆ ಮಾಡಬೇಕು ಎಂದು ಪಂಚಾಯಿತಿ ಅಧ್ಯಕ್ಷೆ ಬಿ.ನಾಗಲಾಂಭಿಕಾ ಒತ್ತಾಯಿಸಿದರು.

ಅಭಿವೃದ್ಧಿ ಅಧಿಕಾರಿ ಸಾರ್ವಜನಿಕ ಕೆಲಸಗಳನ್ನು ಮಾಡದೇ ಪಂಚಾಯಿತಿಯಲ್ಲಿ ಗೊಂದಲ ಸೃಷ್ಟಿಮಾಡುತ್ತಿದ್ದಾರೆ. ಸರ್ಕಾರದಿಂದ ನೀಡಿರುವ ಮನೆಗಳಿಗೆ ಜಿಪಿಎಸ್ ಮಾಡಲು ಲಂಚ ಕೇಳುತ್ತಾರೆ. ನರೇಗಾ ಯೋಜನೆಯಡಿ ಬಡ ಕೂಲಿಕಾರ್ಮಿಕರಿಗೆ ಕೆಲಸ ಕೊಡುತ್ತಿಲ್ಲ. ಕರ್ತವ್ಯಕ್ಕೆ ಸರಿಯಾದ ಸಮಯಕ್ಕೆ ಬರುತ್ತಿಲ್ಲ. ಪಿಡಿಓ ಒಳಗೊಂಡಂತೆ ಪಂಚಾಯಿತಿ ಕಾರ್ಯದರ್ಶಿ, ಬಿಲ್ ಕಲೆಕ್ಟರ್ ಹಾಗೂ ಇನ್ನಿತರೆ ಸಿಬ್ಬಂದಿಗಳು ಕೂಡ ಸೂಕ್ತ ರೀತಿಯಲ್ಲಿ ಸಾರ್ವಜನಿಕರಿಗೆ ಸ್ಪಂದಿಸದೇ ಯಾವುದೇ ಅಭಿವೃದ್ಧಿ ಪರವಾದ ಕೆಲಸಗಳು ಆಗುತ್ತಿಲ್ಲ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

ಕುಯುವ ನೀರಿನ ಪೈಪ್‌ಲೈನ್ ಕಾಮಗಾರಿಯನ್ನು ನಡೆಸದೇ, ಸಾರ್ವಜನಿಕರು ಸಂಕಷ್ಟ ಅನುಭವಿಸುವಂತಾಗಿದೆ. ಪಂಚಾಯಿತಿ ವ್ಯಾಪ್ತಿಯ ಸೋಲಾರ್ ್ಲಾಂಟ್ ತೆರಿಗೆ ಹಣವನ್ನು ದುರುಪಯೋಗಪಡಿಸಿಕೊಂಡಿದ್ದು, ಆ ಕುರಿತು ಮಾಹಿತಿ ಕೇಳಿದರೆ ಕೊಡುತ್ತಿಲ್ಲ. ಈಗಾಗಲೇ ಹಲವಾರು ಬಾರಿ ಮೇಲಾಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಕ್ರಮವಹಿಸಿಲ್ಲ ಎಂದು ಹೇಳಿದರು.

ಗೋಷ್ಠಿಯಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ನೀಲಮ್ಮ, ಸದಸ್ಯರಾದ ನಾಗಮಣಿ, ಪಿ.ಬಸವಣ್ಣ, ಎಸ್.ಉಮೇಶ್, ಎ.ಮಂಜುನಾಥ್ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net