

ಚಾಮರಾಜನಗರ: ಜಿಲ್ಲೆಯಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಗ್ರಾಮ ಪಂಚಾಯಿತಿಗಳ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ನಡೆಸುವ ಸಂಬಂಧ ಜಿಲ್ಲಾಧಿಕಾರಿ ಶಿಲ್ಪಾನಾಗ್ ಗುರುವಾರ ಅಧಿಸೂಚನೆ ಹೊರಡಿಸಿದ್ದಾರೆ.
ಚಾಮರಾಜನಗರ ತಾಲೂಕಿನ ಕೆಂಪನಪುರ ಗ್ರಾಮ ಪಂಚಾಯಿತಿಯ ಸಿಂಗನಪುರ ಕ್ಷೇತ್ರ (ಸಾಮಾನ್ಯ), ಗುಂಡ್ಲುಪೇಟೆ ತಾಲೂಕಿನ ಸೋಮಹಳ್ಳಿ ಗ್ರಾಮ ಪಂಚಾಯಿತಿಯ ಕೊಡಗಾಪುರ ಕ್ಷೇತ್ರ (ಹಿಂದುಳಿದ ಬಿ ವರ್ಗ), ಯಳಂದೂರು ತಾಲೂಕಿನ ಗೌಡಹಳ್ಳಿ ಗ್ರಾಮ ಪಂಚಾಯಿತಿಯ ಟಿ. ಹೊಸೂರು ಕ್ಷೇತ್ರ (ಸಾಮಾನ್ಯ), ಹನೂರು ತಾಲೂಕಿನ ಪಿ.ಜಿ. ಪಾಳ್ಯ ಗ್ರಾಮ ಪಂಚಾಯಿತಿಯ ಅತ್ತಿಖಾನೆ ಕ್ಷೇತ್ರ (ಅನುಸೂಚಿತ ಪಂಗಡ ಮಹಿಳೆ), ಮಲೆ ಮಹದೇಶ್ವರಬೆಟ್ಟ ಗ್ರಾಮ ಪಂಚಾಯಿತಿಯ ಗೊರಸಾಣೆ ಕ್ಷೇತ್ರ (ಅನುಸೂಚಿತ ಪಂಗಡ)ಗಳ ತಲಾ ಒಂದು ಸದಸ್ಯ ಸ್ಥಾನ ಸೇರಿದಂತೆ ಒಟ್ಟು 5 ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ನಿಗದಿಯಾಗಿದೆ.
ನಾಮಪತ್ರ ಸಲ್ಲಿಸಲು ಮೇ 14 ಕೊನೆಯ ದಿನವಾಗಿದೆ. ನಾಮಪತ್ರಗಳ ಪರಿಶೀಲನಾ ಕಾರ್ಯ ಮೇ 15ರಂದು ನಡೆಯಲಿದೆ. ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಮೇ 17 ಕಡೆಯ ದಿನವಾಗಿದೆ. ಮತದಾನ ಅವಶ್ಯವಿದ್ದರೆ ಮೇ 25 ರಂದು ಬೆಳಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಸಲಾಗುತ್ತದೆ. ಮರು ಮತದಾನ ಅವಶ್ಯವಿದ್ದರೆ ಮೇ 27ರಂದು ಬೆಳಗ್ಗೆ 7 ರಿಂದ ಸಂಜೆ 5 ಗಂಟೆಯವೆರೆಗೆ ಮತದಾನ ನಡೆಸಲಾಗುತ್ತದೆ. ಮೇ 28ರಂದು ಬೆಳಗ್ಗೆ 8 ಗಂಟೆಗೆ ತಾಲೂಕು ಕೇಂದ್ರಗಳಲ್ಲಿ ಮತ ಎಣಿಕೆ ಕಾರ್ಯ ಆರಂಭವಾಗಲಿದೆ. ಮೇ 28ರಂದೇ ಚುನಾವಣಾ ಪ್ರಕ್ರಿಯೆ ಮುಕ್ತಾಯವಾಗಲಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.