

ಮುದ್ದೇಬಿಹಾಳ: ರಾಜ್ಯ ಸರ್ಕಾರದ ಮಹಾತ್ವಕಾಂಕ್ಷಿ ಗೃಹಲಕ್ಷ್ಮಿ ಯೋಜನೆಗೆ ಆ. 30ರಂದು ಮೈಸೂರಿನಲ್ಲಿ ಚಾಲನೆ ನೀಡಲಾಗುತ್ತಿದ್ದು, ಈ ಕಾರ್ಯಕ್ರಮವನ್ನು ಗ್ರಾಪಂ ಮಟ್ಟದಲ್ಲಿ ನೇರಪ್ರಸಾರ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ತಾಪಂ ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿ ಯುವರಾಜ ಹನಗಂಡಿ ಪಿಡಿಒಗಳಿಗೆ ಸೂಚಿಸಿದರು.
ತಾಪಂ ಸಭಾಭವನದಲ್ಲಿ ಬುಧವಾರ ನಡೆದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗೃಹಲಕ್ಷ್ಮಿ ಯೋಜನೆಗೆ ಸರ್ಕಾರ ಸಕಲ ಸಿದ್ಧತೆ ಕೈಗೊಂಡಿದೆ. ಮೈಸೂರಿನಲ್ಲಿ ಯೋಜನೆಗೆ ವಿದ್ಯುಕ್ತವಾಗಿ ಚಾಲನೆ ದೊರೆಯಲಿದೆ. ಗ್ರಾಮೀಣ ಪ್ರದೇಶದ ಫಲಾನುಭವಿಗಳು ಈ ಕಾರ್ಯಕ್ರಮದ ನೇರಪ್ರಸಾರವನ್ನು ನೋಡಲು ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಲಾಗಿದ್ದು, ಅದರಂತೆ ಪ್ರತಿ ಗ್ರಾಮ ಪಂಚಾಯಿತಿಯ ಕೇಂದ್ರ ಸ್ಥಳದಲ್ಲಿ ನೇರ ಪ್ರಸಾರ ವೀಕ್ಷಿಸಲು ಸೂಕ್ತ ಸ್ಥಳ ಗುರುತಿಸಿ ಪ್ರಾಜೆಕ್ಟರ್‌ಗಳನ್ನು ಆಳವಡಿಸುವಂತೆ ತಿಳಿಸಿದರು.
ಮುಖ್ಯಮಂತ್ರಿಗಳೊಂದಿಗೆ ಸಂವಾದಿಸಲು ತಾಲೂಕಿನ 5 ಗ್ರಾಮ ಪಂಚಾಯಿತಿಗಳ ಫಲಾನುಭವಿಗಳನ್ನು ಗುರುತಿಸಲು ಸೂಚಿಸಲಾಗಿದೆ. ಈ ಫಲಾನುಭವಿಗಳು ನೇರ ಪ್ರಸಾರ ಕಾರ್ಯಕ್ರಮದಲ್ಲಿ ದೂರವಾಣಿ ಮುಖಾಂತರ ತಮ್ಮ ಅಭಿಪ್ರಾಯ ಹಂಚಿಕೊಳ್ಳಲಿದ್ದಾರೆ. ನೇರ ಪ್ರಸಾರ ಕಾರ್ಯಕ್ರಮಕ್ಕೆ ಬೇಕಾದ ಸಂವಹನ ವ್ಯವಸ್ಥೆ, ಅಗತ್ಯ ವಿದ್ಯುತ್ ಪರಿಕರಗಳನ್ನು ಆಳವಡಿಸಿ ಯಾವುದೇ ತೊಂದರೆಯಾಗದಂತೆ ಯಶಸ್ವಿಗೊಳಿಸಿ ಎಂದು ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.
ನರೇಗಾ ಯೋಜನೆಯ ಪ್ರಗತಿ ಬಗ್ಗೆ ಚರ್ಚಿಸಿದ ಅವರು, ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಕನಿಷ್ಠ 200 ಜನ ಕೂಲಿಕಾರರ ಎಂಗೇಜ್ ಮಾಡುವುದು. ಬೇಡಿಕೆ ಸಲ್ಲಿಸಿದ ಅರ್ಜಿಗಳನ್ನು ಪರಿಶೀಲಿಸಿ ನಿರ್ದಿಷ್ಟ ಅವಧಿಯಲ್ಲಿ ಕೆಲಸ ನೀಡುವುದು. ಅವಧಿ ಮುಗಿದ ಎನ್‌ಎಂಆರ್‌ಗಳನ್ನು ಜೀರೋ ಮಾಡದೆ ಸಕಾಲದಲ್ಲಿ ಎಂಐಎಸ್ ಮಾಡಿ ಕೂಲಿ ಪಾವತಿ ಮಾಡುವುದು. ಮಹಿಳೆಯರ, ಅಂಗವಿಕಲರ ಭಾಗವಹಿಸುವಿಕೆ ಪ್ರಮಾಣ ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಪಂಚಾಯತ್ ರಾಜ್ ವಿಷಯಗಳಿಗೆ ಸಂಬಂಧಿಸಿದಂತೆ ಪ್ರಗತಿ ಸಾಧಿಸಬೇಕು ಎಂದು ಸೂಚಿಸಿದರು.
ನರೇಗಾ ಯೋಜನೆ ಪ್ರಭಾರ ಸಹಾಯಕ ನಿರ್ದೇಶಕ ಖುಬಾಸಿಂಗ್ ಜಾಧವ, ಪಂಚಾಯತ್ ರಾಜ್ ಪ್ರಭಾರ ಸಹಾಯಕ ನಿರ್ದೇಶಕ ಪಿ.ಎಸ್. ಕಸನಕ್ಕಿ, ತಾಲೂಕು ಪಂಚಾಯಿತಿ ವ್ಯವಸ್ಥಾಪಕಿ ನಿರ್ಮಲಾ ತೋಟದ, ಸಹಾಯಕ ಲೆಕ್ಕಧಿಕಾರಿ ವೀರೇಶ ಹೂಗಾರ ಹಾಗೂ ತಾಲೂಕು ಪಂಚಾಯಿತಿ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಕರವಸೂಲಿಕಾರರು ಹಾಜರಿದ್ದರು.