

ಬಾಗೇಪಲ್ಲಿ : ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ತಿಳಿಸಿದರು.
ತಾಲೂಕಿನ ಶಂಖಂವಾರಪಲ್ಲಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಮತ್ತು ಶಾಲಾ ಕಟ್ಟಡ ನಿರ್ಮಾಣ ಕಾಮಗಾರಿಗೆ ಬುಧವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ಈ ಹಿಂದೆ ಗ್ರಾಮಕ್ಕೆ ಬಂದಾಗ ಹಲವು ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ಗಮನಕ್ಕೆ ತಂದಿದ್ದರು. ಈ ಹಿನ್ನೆಲೆಯಲ್ಲಿ ಚರಂಡಿ ನಿರ್ಮಾಣ, ರಸ್ತೆ ಪಕ್ಕದಲ್ಲಿನ ಗಿಡಗಂಟಿ ತೆರವು, ಶಾಲಾ ಕಟ್ಟಡ ನಿರ್ಮಾಣ ಮಾಡುವ ಮೂಲಕ ಗ್ರಾಮಾಭಿವೃದ್ಧಿ ಮಾಡಲಾಗುವುದು ಎಂದರು.
ರಾಜಕೀಯವನ್ನು ಚುನಾವಣೆಗೆ ಮಾತ್ರ ಮೀಸಲಿಟ್ಟು, ಅಭಿವೃದ್ಧಿ ವಿಚಾರಕ್ಕೆ ಎಲ್ಲರೂ ಒಂದಾಗಬೇಕಿದೆ. ಗ್ರಾಮೀಣ ಜನರ ಅನುಕೂಲಕ್ಕಾಗಿ ಮುಂದಿನ ದಿನಗಳಲ್ಲಿ ರಾಜಸ್ವ ಇಲಾಖೆಯಿಂದ ಪಡೆಯಬಹುದಾದ ಎಲ್ಲ ದಾಖಲೆಪತ್ರಗಳನ್ನು ಒದಗಿಸುವ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು. ಜಿಪಂ ಸದಸ್ಯ ಬೂರಗುಮಡುಗು ನರಸಿಂಹಪ್ಪ, ಮುಖಂಡರಾದ ಯರ‌್ರಕೃಷ್ಣಪ್ಪ, ನಾರಾಯಣಸ್ವಾಮಿ ಮತ್ತಿತರರು ಇದ್ದರು.