ಗ್ರಾಮೀಣ ಕ್ರೀಡೆಗಳನ್ನು ಬೆಳೆಸಲು ಉತ್ತೇಜನ

2blrp2
Published on

ಬೇಲೂರು: ಗ್ರಾಮೀಣ ಕ್ರೀಡೆಗಳನ್ನು ಉಳಿಸಿ, ಬೆಳೆಸಲು ಮತ್ತಷ್ಟು ಉತ್ತೇಜನ ನೀಡುವ ನಿಟ್ಟಿನಲ್ಲಿ ಸರ್ಕಾರ ಉತ್ತಮ ಹೆಜ್ಜೆ ಇರಿಸಿದೆ ಎಂದು ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಸುನಿತಾ ಹೇಳಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಹೆಬ್ಬಾಳು ಗ್ರಾಮ ಪಂಚಾಯತಿ ಆಶ್ರಯದಲ್ಲಿ ಹೆಬ್ಬಾಳು ಗ್ರಾಮದಲ್ಲಿ ಶುಕ್ರವಾರ ಆಯೋಜಿಸಿದ್ದ ಗ್ರಾಮೀಣ ಕ್ರೀಡಾ ಕೂಟವನ್ನು ಉದ್ಘಾಟಿಸಿ ಮಾತನಾಡಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮುಂದಿನ ದಿನಗಳಲ್ಲಿ ಪಂಚಾಯತ್ ರಾಜ್ ಇಲಾಖೆ ಜತೆಗೂಡಿ ಗ್ರಾಮ ಪಂಚಾಯತಿ, ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಕ್ರೀಡಾಕೂಟಗಳನ್ನು ನಡೆಸಲಿದೆ. ಅಲ್ಲದೆ ಇದೇ ಪ್ರಥಮ ಭಾರಿಗೆ ಗ್ರಾಮೀಣ ಕ್ರೀಡಾಕೂಟ ಹಮ್ಮಿಕೊಂಡಿದ್ದು, ಗ್ರಾಮದ ಯುವಕ, ಯುವತಿಯರಲ್ಲಿ ಅಡಗಿರುವ ಕ್ರೀಡಾ ಪ್ರತಿಭೆಯ ಅನಾವರಣಕ್ಕೆ ಉತ್ತಮ ವೇದಿಕೆಯಾಗಲಿದೆ. ಇಲ್ಲಿ ವಿಜೇತರಾದವರನ್ನು ಹೋಬಳಿ, ತಾಲೂಕು ಮತ್ತು ಜಿಲ್ಲಾ ಮಟ್ಟಕ್ಕೆ ಕರೆದೊಯ್ಯಲಾಗುತ್ತದೆ ಮತ್ತು ವಿಜೇತರಿಗೆ ವಿಶೇಷ ಪ್ರಶಸ್ತಿ ನೀಡಲಾಗುತ್ತದೆ ಎಂದರು.

ಹೆಬ್ಬಾಳು ಗ್ರಾಮ ಪಂಚಾಯತಿ ಅಧ್ಯಕ್ಷ ಹಾಲೇಗೌಡ ಮಾತನಾಡಿ, ಪಂಚಾಯಿತಿ ಮಟ್ಟದ ಕ್ರೀಡಾಕೂಟದಲ್ಲಿ ಯುವಕರಿಗೆ ಕಬಡ್ಡಿ, ಖೋ ಖೋ, ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಕಬಡ್ಡಿ, 100 ಮತ್ತು 200 ಮೀಟರ್ ಓಟದ ಸ್ಪರ್ಧೆ, ಪ್ರಾಥಮಿಕ ವಿಭಾಗಕ್ಕೆ 100 ಮತ್ತು 200 ಮೀಟರ್ ಓಟದ ಸ್ಪರ್ಧೆ, ಕಿರಿಯ ಪ್ರಾಥಮಿಕ ಶಾಲಾ ವಿಭಾಗಕ್ಕೆ ಹಲವಾರು ಆಟೋಟಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಎಲ್ಲರೂ ಕ್ರೀಡಾ ಮನೋಭಾವದಿಂದ ಸ್ಪರ್ಧಿಸಬೇಕು. ಕ್ರೀಡೆಯಿಂದ ಮನುಷ್ಯನ ಮಾನಸಿಕ ಹಾಗೂ ದೈಹಿಕ ಸಾಮರ್ಥ್ಯ ಕಾಪಾಡಿಕೊಳ್ಳಬಹುದಾಗಿದೆ. ಆದ್ದರಿಂದ ಪ್ರತಿಯೊಬ್ಬರು ಒಂದಿಲ್ಲೊಂದು ಕ್ರೀಡೆಯಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು.

ಹೆಬ್ಬಾಳು ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಗೀತಾ ಚಂದ್ರಶೇಖರಯ್ಯ, ಸದಸ್ಯರಾದ ನಾಗರಾಜು, ಗೋಪಾಲ್, ದೇವೇಂದ್ರ, ಅಭಿವೃದ್ಧಿ ಅಧಿಕಾರಿ ಅವಿನಾಶ್, ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ಧರ್ಮೇಶ್, ಶಾರದ ಕಾನ್ವೆಂಟ್ ಮುಖ್ಯ ಶಿಕ್ಷಕ ಶಿವಶಂಕರ್, ಪ್ರಾಥಮಿಕ ಶಾಲಾ ಸಹ ಶಿಕ್ಷಕಿ ಜಯಶ್ರೀ, ಶಿಕ್ಷಣ ಸಂಪನ್ಮೂಲ ಅಧಿಕಾರಿ ಬಸವರಾಜು ಹಾಗೂ ದೈಹಿಕ ಶಿಕ್ಷಕರು ಸೇರಿದಂತೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net