ಗ್ರಾಮೀಣ ಕ್ಷೇತ್ರದಲ್ಲಿ ಹೈವೋಲ್ಟೇಜ್ ಫೈಟ್!

Laxmi sanju
Published on

ಬೆಳಗಾವಿ: ಇಡೀ ರಾಜ್ಯದಲ್ಲಿಯೇ ಬೆಂಗಳೂರು ನಂತರ ಅತಿಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ‘ಸಕ್ಕರೆ ಜಿಲ್ಲೆ’ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಕಾಂಗ್ರೆಸ್-ಬಿಜೆಪಿ ಮಧ್ಯೆ ನೇರ ಹಣಾಹಣಿ ನಡೆಯುವುದು ಬಹುತೇಕ ಖಚಿತವಾಗಿದೆ.
ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿಯಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಹೇಗಾದರೂ ಮಾಡಿ ಸೋಲಿಸಬೇಕು ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಕ್ಷೇತ್ರದಾದ್ಯಂತ ಬಿಜೆಪಿ ಪರವಾಗಿ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ.
ಮತ್ತೊಂದೆಡೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಅವರ ಸಹೋದರ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ತಮ್ಮ ಸಹೋದರಿಯನ್ನು ಗೆಲ್ಲಿಸುವುದಕ್ಕಾಗಿ ಶತಾಯಗತಾಯ ಪ್ರಯತ್ನದಲ್ಲಿ ತೊಡಗಿದ್ದು, ಈಗಾಗಲೇ ರಾಜಹಂಸಗಢದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಶ್ರೇಯಸ್ಸು ಪಡೆಯುವುದಕ್ಕಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ಮಧ್ಯೆ ಗುದ್ದಾಟ ಶುರುವಾಗಿದೆ.

ಸರ್ಕಾರದ ಮೇಲೆ ಪ್ರಭಾವ ಬೀರಿ ಕೆಲಸ ಮಾಡಿಸಿದ್ದೇವೆ ಎಂದು ಬಿಜೆಪಿ ನಾಯಕರು ಹೇಳಿಕೊಂಡಿದ್ದರೆ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಪ್ರಭಾವ ಬೀರಿ ಸರ್ಕಾರದಿಂದ ಅನುದಾನ ತಂದು ಅಭಿವೃದ್ಧಿ ಕಾರ್ಯ ಕೈಗೊಂಡಿರುವುದಾಗಿ ಹೇಳಿಕೊಳ್ಳುತ್ತಿದ್ದಾರೆ. ಆದರೆ, ಗ್ರಾಮೀಣ ಕ್ಷೇತ್ರದಲ್ಲಿ ಮರಾಠಿ ಮತಗಳೇ ಅಭ್ಯರ್ಥಿಯ ಸೋಲು-ಗೆಲುವಿನಲ್ಲಿ ನಿರ್ಣಾಯಕವಾಗಲಿವೆ. ಕ್ಷೇತ್ರದಲ್ಲಿ ಜೆಡಿಎಸ್ ಅಂತೂ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಿದೆ. ಎಂಇಎಸ್ ಅಭ್ಯರ್ಥಿಗಳು ಕೂಡ ಪ್ರಬಲ ಎದುರಾಳಿಯಾಗುವ ಸಾಧ್ಯತೆಯಿದೆ.

ಮಿಕ್ಸರ್ ಕಿಟ್ ವಿತರಿಸಿದ ಶಾಸಕಿ

ಈಗ ನೀತಿ ಸಂಹಿತೆ ಇಲ್ಲ. ನೀತಿ ಸಂಹಿತೆ ಜಾರಿಯಾಗುವ ಮುಂಚೆಯೇ ತಮ್ಮದೆಯಾದ ಮತಬ್ಯಾಂಕ್ ಹೊಂದಿರುವ ‘ಲಕ್ಷ್ಮೀ’ ಅವರು, ತಮ್ಮದೇ ವರ್ಚಸ್ಸು ಬೀರುವುದಕ್ಕಾಗಿ ಮಿಕ್ಸರ್ ಕಿಟ್ ಹೊಂದಿರುವ ಬಾಕ್ಸ್ ವಿತರಣೆ ಜೋರಾಗಿಯೇ ನಡೆಯುತ್ತಿದೆ. ಮತ್ತೊಂಡೆ ಅವರಿಗಿಂತ ಮುಂದೆ ಹೋಗಿರುವ ರಮೇಶ ಜಾರಕಿಹೊಳಿ ಅವರು, ಈ ಬಾರಿ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಸೋಲಿಸಿಯೇ ಬಿಡುವೆ ಎಂದು ಪಣತೊಟ್ಟಿದ್ದಾರೆ. ಒಟ್ಟಿನಲ್ಲಿ ಬೆಳಗಾವಿ ಗ್ರಾಮೀಣ ವಿಧಾನಸಭೆ ಕ್ಷೇತ್ರವು ರಾಜ್ಯದ ಗಮನ ಸೆಳೆಯುತ್ತಿದೆ.

ಭಾಜಪದಲ್ಲಿ ಪೈಪೋಟಿ

ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸುವುದಕ್ಕಾಗಿ ಮಾಜಿ ಶಾಸಕ ಸಂಜಯ ಪಾಟೀಲ, ಬಿಜೆಪಿ ಕಾರ್ಯಕರ್ತ ಹಾಗೂ ಬಿ.ಎಲ್. ಸಂತೋಷ ಅವರ ಪರಮಾಪ್ತ ಧನಂಜಯ ಜಾಧವ ಹಾಗೂ ದೀಪಾ ಕುಡಚಿ ಸೇರಿದಂತೆ ಇನ್ನೂ ಅನೇಕರು ಆಕಾಂಕ್ಷಿಗಳ ಪಟ್ಟಿಯಲ್ಲಿದ್ದಾರೆ.

| ರಾಯಣ್ಣ ಆರ್.ಸಿ. ಬೆಳಗಾವಿ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net