

ಬಳ್ಳಾರಿ : ಜಿಲ್ಲೆಯ ಎಲ್ಲ ಗ್ರಾಪಂಗಳ ಮೂಲಕ ಪ್ರತಿ ಗ್ರಾಮಗಳಲ್ಲಿ ಆರೋಗ್ಯ ತಪಾಸಣಾ ಶಿಬಿರಗಳನ್ನು ಕ್ರಮಬದ್ಧವಾಗಿ ಆಯೋಜಿಸಿ ಸುಸ್ಥಿರ ಆರೋಗ್ಯ ಸುಧಾರಣೆಗೆ ಆದ್ಯತೆ ನೀಡೋಣ ಎಂದು ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ ತಿಳಿಸಿದರು.
ನಗರದ ಜಿಪಂ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ ರಾಜ್ ಇಲಾಖೆಯಡಿ ಮೈಸೂರಿನ ಅಬ್ದುಲ್ ನಜೀರಸಾಬ್ ರಾಜ್ಯ ಗ್ರಾಮೀಣಾಭಿವೃದ್ದಿ ಸಂಸ್ಥೆ ಸಂಯೋಗದೊಂದಿಗೆ ನಡೆದ ಗ್ರಾಮ ಆರೋಗ್ಯ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಅಸಾಂಕ್ರಾಮಿಕ ರೋಗಗಳಾದ ರಕ್ತದೊತ್ತಡ, ಸಕ್ಕರೆ ಕಾಯಿಲೆ, ಕ್ಷಯರೋಗ, ಮಾನಸಿಕ ಆರೋಗ್ಯ, ಅಪೌಷ್ಟಿಕತೆ, ರಕ್ತಹೀನತೆ ಹಾಗೂ ಮುಟ್ಟಿನ ನೈರ್ಮಲ್ಯ ಮತ್ತು ಬಾಲ್ಯವಿವಾಹ ತಡೆಗಟ್ಟುವಿಕೆ ಮುಂತಾದ ಮಹತ್ವಪೂರ್ಣ ಅಂಶಗಳನ್ನು ಒಳಗೊಡಿದ್ದು, ರಾಜ್ಯ ಸರ್ಕಾರದ ಆಶಯದಂತೆ ಸೂಕ್ತ ಆರೈಕೆ, ಚಿಕಿತ್ಸೆ ಅಗತ್ಯವಿರುವವರಿಗೆ ಮೇಲ್ಮಟ್ಟದ ಆಸ್ಪತ್ರೆಗೆ ಕಳುಹಿಸುವ ಮೂಲಕ ಆರೋಗ್ಯಯುತ ಸಮಾಜ ನಿರ್ಮಿಸಲು ಪ್ರತಿಯೊಬ್ಬರೂ ಕೈಜೋಡಿಸೋಣ ಎಂದು ಹೇಳಿದರು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ನಾಗರಾಜ, ಮಂಜುನಾಥ ತರಬೇತಿ ನೀಡಿದರು.