ಗ್ರಾಮೀಣ, ನಗರ ಪ್ರಗತಿಗೆ ಸಮಾನ ಆದ್ಯತೆ

GBD
Published on

ಗೌರಿಬಿದನೂರು: ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಯಾಗದ ಹೊರತು ಸಮಗ್ರ ಅಭಿವೃದ್ಧಿ ಸಾಧ್ಯವಿಲ್ಲ. ಆದ್ದರಿಂದ ಕ್ಷೇತ್ರದಲ್ಲಿ ನಗರ ಹಾಗೂ ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಸಮಾನ ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕ ಎನ್.ಎಚ್.ಶಿವಶಂಕರ ರೆಡ್ಡಿ ಹೇಳಿದರು.

ತಾಲೂಕಿನ ಗೆದರೆ ಗ್ರಾಪಂ ವ್ಯಾಪ್ತಿಯಲ್ಲಿ 63 ಫಲಾನುಭವಿಗಳಿಗೆ ಶುಕ್ರವಾರ ಹಕ್ಕು ಪತ್ರಗಳನ್ನು ವಿತರಿಸಿ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ರಸ್ತೆ, ಸಾರಿಗೆ ವ್ಯವಸ್ಥೆ ಸುಧಾರಿಸಿದಾಗ ಅಭಿವೃದ್ಧಿಗೆ ತೆರೆದುಕೊಳ್ಳುತ್ತವೆ ಎಂದು ಅಭಿಪ್ರಾಯಪಟ್ಟರು.

ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಹೆಚ್ಚು ವಸತಿ ಶಾಲೆಗಳನ್ನು ಸ್ಥಾಪಿಸಲಾಗಿದೆ. ನಿರುದ್ಯೋಗ ಸಮಸ್ಯೆ ನಿವಾರಣೆಗೆ ಕುಡುಮಲಕುಂಟೆ ಕೈಗಾರಿಕಾ ಪ್ರದೇಶವನ್ನು ಹಂತ ಹಂತವಾಗಿ ಅಭಿವೃದ್ಧಿಪಡಿಸಲಾಗುತ್ತಿದೆ ಎಂದರು.

ಶಾಸಕರು ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳಿಂದ ಮನೆ ಮಾತಾಗಿದ್ದಾರೆ. ಇದೇ ಕಾರಣಕ್ಕೆ ಕ್ಷೇತ್ರದ ಜನ ಸತತವಾಗಿ ಅವರನ್ನು ಆಯ್ಕೆ ಮಾಡಿದ್ದಾರೆ ತಾಪಂ ಅಧ್ಯಕ್ಷ ಆರ್.ಲೋಕೇಶ್ ಬಣ್ಣಿಸಿದರು.ತಾಪಂ ಸದಸ್ಯ ನಾಗೇಶ್, ಇಒ ಎನ್.ಮುನಿರಾಜು, ಎಪಿಎಂಸಿ ಮಾಜಿ ಅಧ್ಯಕ್ಷ ಜಿ. ಬೊಮ್ಮಣ್ಣ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸತ್ಯಪ್ರಸಾದ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net