

ಮದ್ದೂರು: ಗ್ರಾಮಾಂತರದಲ್ಲಿನ ಸಮಸ್ಯೆಗಳನ್ನು ಹತ್ತಿರದಿಂದ ಬಲ್ಲವನಾಗಿದ್ದು, ಇವುಗಳಿಗೆ ಶೀಘ್ರ ಪರಿಹಾರ ದೊರಕಿಸಿಕೊಡುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ಭರವಸೆ ನೀಡಿದರು.
ತಾಲೂಕಿನ ಮಾಲಗಾರನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಬುಧವಾರ ಆಯೋಜಿಸಿದ್ದ ಜನಸಂಪರ್ಕ ಸಭೆಯಲ್ಲಿ ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿ ಮಾತನಾಡಿದರು. ಗ್ರಾಮೀಣ ಜನರಿಗೆ ಸರ್ಕಾರದ ಯೋಜನೆಗಳು ಸಮರ್ಪಕವಾಗಿ ತಲುಪಿಸುವಂತೆ ಗ್ರಾಮಸ್ಥರು ಜನಸಂಪರ್ಕ ಸಭೆಯಲ್ಲಿ ಮನವಿ ಮಾಡಿದ್ದು, ಇದಕ್ಕೆ ಪರಿಹಾರ ಕಂಡುಕೊಳ್ಳಲಾಗುವುದು ಎಂದರು.
ಮಾಲಗಾರನಹಳ್ಳಿಯಲ್ಲಿ ಬಸ್ ನಿಲ್ದಾಣದ ಅವಶ್ಯಕತೆ ಇರುವುದರಿಂದ ಶೀಘ್ರ ಕಾಮಗಾರಿಗೆ ಚಾಲನೆ ನೀಡಲಾಗುವುದು. ಅಲ್ಲದೆ ಕೆಮ್ಮಣ್ಣು ನಾಲೆಯನ್ನು ಸ್ವಚ್ಛ ಮಾಡಲು ಯಂತ್ರಗಳನ್ನು ಕೊಡಿಸುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದ್ದು, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈ ಸಂಬಂಧ ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ. ಮುಂದಿನ ದಿನಗಳಲ್ಲಿ ನಾಲೆಗಳಲ್ಲಿ ಹೂಳು, ಗಿಡಗಂಟಿಗಳನ್ನು ತೆರವುಗೊಳಿಸಲು ಯಂತ್ರಗಳ ಸಮಸ್ಯೆ ಆಗಲಾರದು ಎಂದರು.
ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಂಠಿ ಸುರೇಶ್, ಗ್ರಾಪಂ ಅಧ್ಯಕ್ಷೆ ಉಮಾ, ಸದಸ್ಯರಾದ ಕಿರಣ್, ಸುರೇಶ್, ಮುಖಂಡರಾದ ಪ್ರಸನ್ನಕುಮಾರ್, ಮಹೇಶ್, ರಾಜಣ್ಣ , ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.