

ಹಾಸನ: ಗ್ರಾಹಕರು ತಾವು ಖರೀದಿಸುವ ಸರಕು ಅಥವಾ ಪಡೆಯುವ ಸೇವೆ ಬಗ್ಗೆ ಜವಾಬ್ದಾರಿ ವಹಿಸಿ, ನ್ಯೂನ್ಯತೆ ಕಂಡುಬಂದರೆ ಎಚ್ಚರ ವಹಿಸಿ ಪ್ರಕರಣ ದಾಖಲಿಸಿ ಪರಿಹಾರ ಪಡೆಯುವಂತೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಸಿ.ಎಂ.ಚಂಚಲಾ ಅವರು ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ, ಕಾನೂನು ಮಾಪನ ಶಾಸ್ತ್ರ ಇಲಾಖೆ, ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರ ಹಾಗೂ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್ ಸಹಯೋಗದಲ್ಲಿ ಮಂಗಳವಾರ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಸಭಾಂಗಣದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಹಕರ ಹಕ್ಕುಗಳ ಸಂರಕ್ಷಣೆಗಾಗಿ ಗ್ರಾಹಕರ ವ್ಯಾಜ್ಯಗಳ ಆಯೋಗ ಕರ್ತವ್ಯ ನಿರ್ವಹಿಸುತ್ತಿದೆ. ಮೋಸಕ್ಕೆ ಒಳಗಾದವರು ಎಚ್ಚರವಹಿಸಿ ಪ್ರಕರಣ ದಾಖಲಿಸದೆ ಇರುವುದು ವಿಪರ್ಯಾಸ ಎಂದು ಬೇಸರ ವ್ಯಕ್ತಪಡಿಸಿದರು.
ಕಾನೂನು ಬಳಕೆ ಬಗ್ಗೆ ಜ್ಞಾನ ಇರಬೇಕು. ಸರಕು ಮತ್ತು ಸೇವೆಯಲ್ಲಿ ಲೋಪದೋಷವಾಗಿದ್ದರೆ 2 ವರ್ಷದೊಳಗೆ ಪ್ರಕರಣ ದಾಖಲಿಸಬಹುದಾಗಿದೆ. ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ 50 ಲಕ್ಷ ರೂ.ವರೆಗೆ ಹಾಗೂ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ 50 ಲಕ್ಷ ರೂ.ನಿಂದ 2 ಕೋಟಿ ರೂ.ವರೆಗೆ, ರಾಷ್ಟ್ರೀಯ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ 2 ಕೋಟಿ ರೂ. ಮೇಲ್ಪಟ್ಟ ಪ್ರಕರಣಗಳನ್ನು ದಾಖಲಿಸಿ ಪರಿಹಾರ ಪಡೆಯಬಹುದಾಗಿದೆ ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಹಾಯಕ ರಮೇಶ್ ಮಾತನಾಡಿ ಗ್ರಾಹಕರು ಮೋಸ ಹೋಗದಂತೆ ಎಚ್ಚರ ವಹಿಸಬೇಕು. ಒಂದು ವೇಳೆ ಮೋಸ ಹೋದರೆ ಗ್ರಾಹಕ ವ್ಯಾಜ್ಯಗಳ ಆಯೋಗದಲ್ಲಿ ಪ್ರಕರಣ ದಾಖಲಿಸಿ ಸೂಕ್ತ ಪರಿಹಾರ ಪಡೆಯಬಹುದು. ಆದ್ದರಿಂದ ಪ್ರತಿಯೊಬ್ಬರೂ ಗ್ರಾಹಕರ ಹಕ್ಕುಗಳ ಬಗ್ಗೆ ತಿಳಿವಳಿಕೆ ಪಡೆದುಕೊಂಡು ಸದುಪಯೋಗ ಪಡಿಸಿಕೊಳ್ಳ ಬೇಕು ಎಂದು ಸಲಹೆ ನೀಡಿದರು.
ಎಂ.ಕೃಷ್ಣ ಕಾನೂನು ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ.ಹೇಮಂತ್ ಕುಮಾರ್ ಕಾರ್ಯಕ್ರಮ ಕುರಿತು ಉಪನ್ಯಾಸ ನೀಡಿದರು.
ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯರಾದ ಆರ್. ಅನುಪಮಾ, ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಿ.ಪಿ. ಗಿರೀಶ್, ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರದ ಕಾರ್ಯಾಧ್ಯಕ್ಷ ವೈ.ಎಸ್.ಸಿದ್ದಯ್ಯ, ಬೋರೇಗೌಡ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕ ಅರುಣ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.