

ಚಾಮರಾಜನಗರ: ತಾಲೂಕಿನ ವ್ಯಾಪ್ತಿಯಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ 391 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋನಾರೋತ್ ಮಾಹಿತಿ ನೀಡಿದರು.
ತಾಲೂಕಿನ ವಿವಿಧ ಗ್ರಾಮಗಳಿಗೆ ಸೋಮವಾರ ಭೇಟಿ ನೀಡಿ, ಜಲಜೀವನ್ ಮಿಷನ್ ಹಾಗೂ ನರೇಗಾ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳನ್ನು ಪರಿಶೀಲಿಸಿ ಮಾತನಾಡಿದರು.
ಚಾಮರಾಜನಗರ ತಾಲೂಕಿನಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ 483 ಕಾಮಗಾರಿಗಳನ್ನು ತೆಗೆದುಕೊಂಡಿದ್ದು, ಈವರೆಗೆ 391 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. 101 ಕಾಮಗಾರಿಗಳನ್ನು ಗ್ರಾಮ ಪಂಚಾಯತಿಗಳಿಗೆ ಹಸ್ತಾಂತರಿಸಲಾಗಿದೆ. ಉಳಿದ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಈ ಪೈಕಿ 5 ಕಾಮಗಾರಿಗಳನ್ನು ಆಯ್ಕೆ ಮಾಡಿಕೊಂಡು ಪರಿಶೀಲನೆ ನಡೆಸಲಾಯಿತು ಎಂದು ಮಾಹಿತಿ ನೀಡಿದರು.
ಬಳಿಕ ಜೆಜೆಎಂ ಯೋಜನೆಯಡಿ ಅಳವಡಿಸಿರುವ ಕಾರ್ಯಾತ್ಮಕ ಗೃಹನಳ ಸಂಪರ್ಕದ ಗುಣಮಟ್ಟ, ಮೀಟರ್ ಅಳವಡಿಕೆ, ಕುಡಿಯುವ ನೀರಿನ ಪೂರೈಕೆ, ರಸ್ತೆ ಪುನಶ್ಚೇತನ, ನೀರಿನ ಗುಣಮಟ್ಟ, ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆ ಮತ್ತು ಕಾರ್ಯಾಚರಣೆ ಮತ್ತು ನಿರ್ವಹಣೆ ನೀತಿ ಅಳವಡಿಕೆ ಮತ್ತು 24*7 ನೀರು ಸರಬರಾಜು ಗ್ರಾಮ ಘೋಷಣೆ ಕುರಿತು ವರದಿಗಳನ್ನು ಪರಿಶೀಲಿಸಿ, ಗ್ರಾಮ ಪಂಚಾಯತಿ ಸಿಬ್ಬಂದಿ ಹಾಗೂ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ವಿಭಾಗದ ಪ್ರಭಾರ ಕಾರ್ಯಪಾಲಕ ಎಂಜಿನಿಯರ್ ಎಸ್.ಜಗದೀಶ್, ಸಹಾಯಕ ಎಂಜಿನಿಯರ್ ಪುರುಷೋತ್ತಮ್, ಜೆಜೆಎಂ ಯೋಜನೆಯ ಜಿಲ್ಲಾ ಯೋಜನಾ ವ್ಯವಸ್ಥಾಪಕಿ ಸಿ.ಎಂ.ಆಶಾ, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ಹಾಜರಿದ್ದರು.
ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ:
ಜಿಲ್ಲಾ ಪಂಚಾಯಿತಿ ಸಿಇಓ ಮೋನಾರೋತ್ ಅವರು ಚಾಮರಾಜನಗರ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಜಲಜೀವನ್ ಮಿಷನ್ ಹಾಗೂ ನರೇಗಾ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳನ್ನು ಪರಿಶೀಲಿಸಿದರು. ತಾಲೂಕಿನ ಸಂತೇಮರಹಳ್ಳಿ, ಬಸವಟ್ಟಿ ಮತ್ತು ಬಾಣಹಳ್ಳಿ ಗ್ರಾಮಗಳಿಗೆ ಭೇಟಿ ನೀಡಿ ಜಲ ಜೀವನ್ ಮಿಷನ್ ಹಾಗೂ ನರೇಗಾ ಯೋಜನೆಯ ಕಾಮಗಾರಿಗಳನ್ನು ವೀಕ್ಷಣೆ ಮಾಡಿ, ಅಧಿಕಾರಿಗಳಿಗೆ ಸಲಹೆ ಸೂಚನೆಗಳನ್ನು ನೀಡಿದರು. ಈ ವೇಳೆ ಸಾರ್ವಜನಿಕರನ್ನು ಮಾತನಾಡಿಸಿ ಕಾಮಗಾರಿಗಳ ಕುರಿತು ಅಭಿಪ್ರಾಯಗಳನ್ನು ಸಂಗ್ರಹಿಸಿದರು. ಬಳಿಕ ಬಾಣಹಳ್ಳಿ ಗ್ರಾಮದಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ನರೇಗಾ ಯೋಜನೆಯಡಿ ತೆಗೆದುಕೊಂಡಿರುವ ಶಾಲಾ ಸುತ್ತುಗೋಡೆ, ಶೌಚಾಲಯ ಕಾಮಗಾರಿಯನ್ನು ಪರಿಶೀಲಿಸಿ, ಶಾಲಾ ಮಕ್ಕಳ ಕುಂದು ಕೊರತೆಗಳನ್ನು ಆಲಿಸಿದರು.
ಜಲ ಜೀವನ್ ಮಿಷನ್ ಯೋಜನೆಯಡಿ ಪೂರ್ಣಗೊಂಡ ಕಾಮಗಾರಿಗಳನ್ನು ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯಿತಿ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು ವೀಡಿಯೋ ಸಂವಾದದಲ್ಲಿ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿಯೊಂದು ತಾಲೂಕಿನ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ.
-ಮೋನಾರೋತ್, ಸಿಇಓ, ಜಿಲ್ಲಾ ಪಂಚಾಯಿತಿ, ಚಾಮರಾಜನಗರ