ಚಾ.ನಗರ ವಿವಿ ವಿಲೀನ ವಿರೋಧಿಸಿ ಪ್ರತಿಭಟನೆ

17rajesh8
Published on

ಚಾಮರಾಜನಗರ: ರಾಜ್ಯದಲ್ಲಿ ನೂತನವಾಗಿ ಸ್ಥಾಪಿಸಿದ್ದ 9 ವಿಶ್ವವಿದ್ಯಾನಿಲಯಗಳನ್ನು ವಿಲೀನಗೊಳಿಸಲು ಮುಂದಾಗಿರುವ, ರಾಜ್ಯ ಸರ್ಕಾರದ ನಿರ್ಧಾರವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ನಗರದ ಶ್ರೀಚಾಮರಾಜೇಶ್ವರಸ್ವಾಮಿ ದೇವಸ್ಥಾನದ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು, ಅಲ್ಲಿಂದ ಮೆರವಣಿಗೆ ಹೊರಟು ಶ್ರೀಭುವನೇಶ್ವರಿ ವೃತ್ತದಲ್ಲಿ ಕೆಲಕಾಲ ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಸೇನಾ ಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ರಾಜ್ಯ ಸರ್ಕಾರ ಚಾ.ನಗರ ವಿಶ್ವ ವಿದ್ಯಾಲಯ ಸೇರಿದಂತೆ ರಾಜ್ಯದ 9 ವಿವಿಗಳನ್ನು ವಿಲೀನಗೊಳಿಸಲು ಮುಂದಾಗಿರುವುದು ಖಂಡನೀಯ. ಚಾ.ನಗರ ವಿವಿ ವ್ಯಾಪ್ತಿಯಲ್ಲಿ ಗ್ರಾಮೀಣ ಪ್ರದೇಶದ ಎಸ್ಸಿ, ಎಸ್ಟಿ ಹಾಗೂ ಹಿಂದುಳಿದ ಸಮುದಾಯಗಳ ಸುಮಾರು 5000 ಸಾವಿರಕ್ಕಿಂತಲೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿವಿ ವಿಲೀನಗೊಳಿಸುವುದರಿಂದ ಈ ವಿದ್ಯಾರ್ಥಿಗಳು ಉನ್ನತ ಶಿಕ್ಷಣದಿಂದ ವಂಚಿತರಾಗುತ್ತಾರೆ ಎಂದು ದೂರಿದರು.

ಜಿಲ್ಲೆಯ ಕಾಡಂಚಿನ ಗ್ರಾಮಗಳಲ್ಲಿ ಹಾಗೂ ಬಡ ಕುಟುಂಬಗಳಿಂದ ಉನ್ನತ ಶಿಕ್ಷಣದ ಕನಸುಕಟ್ಟಿಕೊಂಡು ಬರುತ್ತಿರುವ ವಿದ್ಯಾರ್ಥಿಗಳಿಗೆ ಇದು ಸಹಕಾರಿಯಾಗಿದೆ. ರಾಜ್ಯ ಸರ್ಕಾರ ಈ ವಿಚಾರದಲ್ಲಿ ಯಾವುದೇ ರಾಜಕೀಯ ಮಾಡದೇ ವಿವಿಯನ್ನು ಉಳಿಸಬೇಕು. ಯಾವುದೇ ಕಾರಣಕ್ಕೂ ಚಾಮರಾಜನಗರ ವಿವಿಯನ್ನು ವಿಲೀನಗೊಳಿಸಬಾರದು. ವಿಶ್ವ ವಿದ್ಯಾಲಯವನ್ನು ಮುಚ್ಚುವ ಪ್ರಯತ್ನ ಮಾಡಿದರೇ, ನಿರಂತರ ಹೋರಾಟ ರೂಪಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಹೋರಾಟಗಾರ ಚಾ.ಸಿ.ಸೋಮನಾಯಕ, ಆಟೋ ಲಿಂಗರಾಜು, ಆಟೋ ಸುರೇಶ್, ರಾಜಪ್ಪ, ಚಾ.ಸಿ.ಸಿದ್ದರಾಜು, ನಂಜುಂಡ ಶೆಟ್ಟಿ, ವೀರಭದ್ರ, ಪ್ರಕಾಶ್, ಚಂದ್ರು ಹಾಗೂ ಇತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net