

ಮೈಸೂರು: ಚಾಮುಂಡಿಬೆಟ್ಟದಲ್ಲಿ ಶನಿವಾರ ಚಾಲಕನ ನಿಯಂತ್ರಣ ತಪ್ಪಿ ಕಾರು ಉರುಳಿಬಿದ್ದು ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಂಗಳೂರಿನ ನಾಲ್ವರು ಕುಟುಂಬ ಸಹಿತ ನಗರಕ್ಕೆ ಆಗಮಿಸಿದ್ದರು. ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಚಾಲಕ, ಹಿಂದಿನ ಸೀಟಿನಲ್ಲಿ ಕುಳಿತಿದ್ದ ಮಗುವನ್ನು ಮಾತನಾಡಿಸಲು ತಿರುಗಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಚಾಲಕ ಚಾಲನೆಯಲ್ಲಿ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದು ಕಾರು ಉರುಳಿದೆ. ಅದರಲ್ಲಿದ್ದ ಮಗು ಸೇರಿದಂತೆ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸಿದ್ಧಾರ್ಥನಗರ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಕಾರನ್ನು ತೆರವು ಮಾಡಿ ವಾಹನಗಳ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು. ಗಾಯಗೊಂಡವರ ಮಾಹಿತಿ ತಿಳಿದು ಬಂದಿಲ್ಲ.