

ಕಲಬುರಗಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಸೆ.25 ರಂದು ಬೆಳಿಗ್ಗೆ ೯-೩೦ ಗಂಟೆಯಿಂದ ಸಂಜೆ ೫.೩೦ ಗಂಟೆವರೆಗೆ ಜಿಲ್ಲೆಯ ಚಿಂಚೋಳಿ ಪಟ್ಟಣದ ತಾಲೂಕಾ ಕ್ರೀಡಾಂಗಣದಲ್ಲಿ ಸಾರ್ವಜನಿಕರ ಕುಂದುಕೊರತೆ ಆಲಿಸುವ ಜನತಾ ದರ್ಶನ ಕಾರ್ಯಕ್ರಮ ಕೈಗೊಂಡಿದ್ಧಾರೆ.
ಚಿಂಚೋಳಿ ತಾಲೂಕಿನ ಜನರ ಸಮಸ್ಯೆ ಆಲಿಸಲು ಜಿಲ್ಲಾ ಉಸ್ತುವಾರಿ ಸಚಿವ ಅಧ್ಯಕ್ಷತೆಯಲ್ಲಿ ಜರುಗುವ ಜನತಾ ದರ್ಶನ ಲಾಭವನ್ನು ಸಾರ್ವಜನಿಕರು ಪಡೆಯಬೇಕು ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.
ಸಾರ್ವಜನಿಕರು ತಮ್ಮ ಸಮಸ್ಯೆ, ಕುಂದು-ಕೊರತೆಗಳಿಗೆ ಬೆಂಗಳೂರಿಗೆ ಹೋಗಿ ಸಚಿವರು, ಮುಖ್ಯಮಂತ್ರಿಗಳನ್ನು ಕಾಣುವುದನ್ನು ತಪ್ಪಿಸಲು ಜಿಲ್ಲಾ ಮಟ್ಟದಲ್ಲಿಯೇ ಅವರ ಸಮಸ್ಯೆ ಆಲಿಸಿ ಸೂಕ್ತ ಪರಿಹಾರ ಒದಗಿಸುವ ಉದ್ದೇಶದಿಂದ ಈ ಜನತಾ ದರ್ಶನ ಆಯೋಜಿಸಿದೆ. ಸ್ಥಳೀಯ ಜನಪ್ರತಿನಿಧಿಗಳು ಸಹ ಇದರಲ್ಲಿ ಭಾಗವಹಿಸಿಲಿದ್ದಾರೆ ಎಂದು ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳು, ಜಿಪಂ ಸಿಇಒ, ಎಸ್ಪಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದು ಜನರ ದೂರುಗಳನ್ನು ಪರಿಹರಿಸುವರು. ಈ ಸಂದರ್ಭದಲ್ಲಿ ವಿವಿಧ ಇಲಾಖೆಯಿಂದ ಮಳಿಗೆ ಹಾಕಿ ಸಾರ್ವಜನಿಕರಿಗೆ ಸರ್ಕಾರಿ ಯೋಜನೆಗಳ ಮಾಹಿತಿ ನೀಡಲಾಗುತ್ತದೆ. ಅಲ್ಲದೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಕುಂದು-ಕೊರತೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.