

ಚಿತ್ರದುರ್ಗ: ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದಕ್ಕಾಗಿ ಸರ್ಕಾರ ಅನೇಕ ಮಹಾತ್ವಾಕಾಂಕ್ಷಿ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ ಎಂದು ಜಿಪಂ ಮಾಜಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್ ಹೇಳಿದರು.
ದಂಡಿನ ಕುರುಬರಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಆಯೋಜಿಸಿದ್ದ ವಾರ್ಷಿಕೋತ್ಸವದಲ್ಲಿ ಮಾತನಾಡಿದರು.
ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶೈಕ್ಷಣಿಕ ವ್ಯವಸ್ಥೆ ಇದ್ದು, ಇಂಗ್ಲಿಷ್ ಮಾಧ್ಯಮದ ಮೋಹ ತೊರೆದು ಪಾಲಕರು ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಬೇಕು ಎಂದು ತಿಳಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಸಿದ್ದಪ್ಪ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ನುರಿತ ಶಿಕ್ಷಕರು ಇರುತ್ತಾರೆ. ನಿಮ್ಮ ಮಕ್ಕಳ ಮುಂದಿನ ಭವಿಷ್ಯಕ್ಕಾಗಿ ಅವರನ್ನು ಕಡ್ಡಾಯವಾಗಿ ಸರ್ಕಾರಿ ಶಾಲೆಗಳಿಗೆ ಸೇರಿಸಬೇಕು ಎಂದು ಪಾಲಕರಲ್ಲಿ ಮನವಿ ಮಾಡಿದರು.
ಎಸ್‌ಡಿಎಂಸಿಗಳ ರಾಜ್ಯಉಪಾಧ್ಯಕ್ಷ ಗಂಗಾಧರ್, ಪ್ರಹ್ಲಾದ್ ಮಾತನಾಡಿದರು. ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಕಡ್ಲೆಗುದ್ದು ಆಂಜನೇಯಸ್ವಾಮಿ ಪ್ರೌಢಶಾಲೆ ಮುಖ್ಯಶಿಕ್ಷಕ ಮಹೇಶ್ ಅವರನ್ನು ಗೌರವಿಸಲಾಯಿತು. ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಶಿಕ್ಷಕರಾದ ಚಂದ್ರಪ್ಪ, ಪ್ರತಿಮಾ, ರಾಘವೇಂದ್ರ, ಗೆಳೆಯರ ಬಳಗದ ಸದಸ್ಯರು, ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಶಾಲಾಭಿವೃದ್ಧಿ ಹಾಗೂ ಗ್ರಾಮ ಪ್ರಮುಖರು ಇದ್ದರು.