ಚಿತ್ರದುರ್ಗದಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನ ಜ.18, 19ಕ್ಕೆ

ctd--00006
Published on

ಚಿತ್ರದುರ್ಗ: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್‌ನಿಂದ ನಗರದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಅನುಭವ ಮಂಟಪದಲ್ಲಿ ಜನವರಿ 18 ಮತ್ತು 19 ರಂದು ಅಖಿಲ ಭಾರತ 13ನೇ ಶರಣ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ಪರಿಷತ್ ಅಧ್ಯಕ್ಷ ಡಾ. ಸಿ. ಸೋಮಶೇಖರ ತಿಳಿಸಿದರು.

ಪರಿಷತ್ ಗೌರವಾಧ್ಯಕ್ಷರಾದ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಗದಗಿನ ಡಾ. ತೋಂಟದ ಸಿದ್ದರಾಮ ಶ್ರೀಗಳ ಮಾರ್ಗದರ್ಶನದಲ್ಲಿ ಎರಡು ದಿನಗಳ ಕಾಲ ನಡೆಯುವ ಸಮ್ಮೇಳನದಲ್ಲಿ ಶರಣರ ವಿಚಾರಧಾರೆಗಳ ಕುರಿತು ಚಿಂತನಾಗೋಷ್ಠಿಗಳು ನಡೆಯಲಿವೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಚಿತ್ರದುರ್ಗ ಬೃಹನ್ಮಠದ ಮೊದಲ ಬಸವ ಶ್ರೀ ಪ್ರಶಸ್ತಿ ಪುರಸ್ಕೃತರು ಹಾಗೂ ಶರಣ ಸಾಹಿತ್ಯದಲ್ಲಿ ಅಪಾರ ಕೃಷಿ ಮಾಡಿರುವ ಬೀದರ್ ಜಿಲ್ಲೆ ಔರಾದ್ ತಾಲೂಕಿನ ಡಾ. ಸಿದ್ದರಾಮ ಬೆಲ್ದಾಳ ಶರಣರು ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದರು.

ಜ.18 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮೇಳನ ಉದ್ಘಾಟಿಸುವರು. ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಗದಗಿನ ಡಾ. ತೋಂಟದ ಸಿದ್ದರಾಮ ಸ್ವಾಮೀಜಿ, ಮಾದಾರ ಚನ್ನಯ್ಯ ಸ್ವಾಮೀಜಿ, ಬಸವಕುಮಾರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಸಚಿವರಾದ ಎಂ.ಬಿ. ಪಾಟೀಲ್, ಡಿ. ಸುಧಾಕರ್, ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ, ಸಂಸದ ಗೋವಿಂದ ಕಾರಜೋಳ ಸೇರಿ ಜಿಲ್ಲೆಯ ಶಾಸಕರು, ಜನಪ್ರತಿನಿಧಿಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಆನಂತರ ಸಾಂಸ್ಕೃತಿಕ ನಾಯಕ ಬಸವಣ್ಣ, ಶರಣ ಸಾಹಿತ್ಯದಲ್ಲಿ ಮಹಿಳಾ ಸಂವೇದನೆ, ಶರಣ ಸಾಹಿತ್ಯದತ್ತ ಯುವ ಜನಾಂಗ ಕುರಿತು ಚಿಂತನಾಗೋಷ್ಠಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ತಿಳಿಸಿದರು.

ಜ.19 ರಂದು ಶ್ರೀ ಜಯದೇವ ಜಗದ್ಗುರು, ಶ್ರೀ ಸಿದ್ದೇಶ್ವರ ಸ್ವಾಮೀಜಿ ಹಾಗೂ ನಾಯಕನಹಟ್ಟಿ ಶ್ರೀ ತಿಪ್ಪೇರುದ್ರಸ್ವಾಮಿ ಅವರ ಕುರಿತು ನಮ್ಮ ಪ್ರಾತಃ ಸ್ಮರಣೀಯರು, ಶರಣರು ಪ್ರಸ್ತಾಪಿಸಿದ ವೈಚಾರಿಕ ಪರಂಪರೆ ಹಾಗೂ ಸಾಹಿತ್ಯದ ಕುರಿತು ಗೋಷ್ಠಿಗಳು, ಬಹಿರಂಗ ಅಧಿವೇಶನ, ಸಂವಾದ ಮತ್ತು ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ನೆರವೇರಲಿದೆ ಎಂದರು.

ಸಂಜೆ ನಡೆಯುವ ಸಮಾರೋಪ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ, ಪ್ರಭಾಕರ ಕೋರೆ ಮತ್ತಿತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಭಾಲ್ಕಿ ಶ್ರೀಗಳು ಸೇರಿ ಅನೇಕ ಮಠಾಧೀಶರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಕರ್ನಾಟಕ ಮಾತ್ರವಲ್ಲದೆ ಮಹಾರಾಷ್ಟ್ರ, ಆಂಧ್ರಪ್ರದೇಶ, ತಮಿಳುನಾಡು ಸೇರಿ ವಿವಿಧ ರಾಜ್ಯಗಳ ಸಾವಿರಾರು ಪ್ರತಿನಿಧಿಗಳು ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಎಲ್ಲರಿಗೂ ಪ್ರಸಾದ ಹಾಗೂ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದರು.

ಡಾ. ಬಸವಕುಮಾರ ಸ್ವಾಮೀಜಿ ಮಾತನಾಡಿ, ಐತಿಹಾಸಿಕ ಚಿತ್ರದುರ್ಗ ನಗರದಲ್ಲಿ ಅತ್ಯಂತ ಅದ್ದೂರಿ ಹಾಗೂ ಅರ್ಥಪೂರ್ಣವಾಗಿ ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಅನೇಕ ಮಠಾಧೀಶರು, ಸಾಹಿತಿಗಳು ಪಾಲ್ಗೊಳ್ಳಲಿದ್ದಾರೆ. ಪ್ರತಿದಿನ ಸುಮಾರು 25 ಸಾವಿರ ಜನ ಭಾಗವಹಿಸುವ ನಿರೀಕ್ಷೆಯಿದೆ ಎಂದರು.

ಗುರುಮಿಟ್ಕಲ್‌ನ ಶಾಂತವೀರ ಗುರು ಮುರುಘರಾಜೇಂದ್ರ ಸ್ವಾಮೀಜಿ, ಜಿಲ್ಲಾ ಶಸಾಪ ಅಧ್ಯಕ್ಷ ಕೆ.ಎಂ. ವೀರೇಶ್, ಚಿಕ್ಕಪ್ಪನಹಳ್ಳಿ ಹಂಪಯ್ಯ ಸಾರಂಗಮಠ, ಷಣ್ಮುಖಪ್ಪ, ಡಾ. ಹೊನ್ನಲಿಂಗಯ್ಯ, ಅಪ್ಪಾರಾವ್ ಅಪ್ಪೋಣಿ, ಷಡಾಕ್ಷರಿ, ರುದ್ರಮೂರ್ತಿ ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net