ಚುನಾವಣೆಯಲ್ಲಿ ಸರ್ವೋದಯ ಸ್ಪರ್ಧೆ

7 vikram 1
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಭ್ರಷ್ಟಾಚಾರದಲ್ಲಿ ಮುಳುಗಿರುವ ರಾಜ್ಯ ಸರ್ಕಾರ ಎಲ್ಲ ಕ್ಷೇತ್ರದಲ್ಲೂ ವಿಫಲವಾಗಿದೆ. ಇದೇ ಕಾರಣಕ್ಕೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸರ್ವೋದಯ ಪಕ್ಷವು 52 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಪಕ್ಷದ ಅಧ್ಯಕ್ಷ ಚಾಮರಸ ಮಾಲಿಪಾಟೀಲ ತಿಳಿಸಿದರು.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಕೀಯ ಭ್ರಷ್ಟಾಚಾರ ನಿರ್ಮೂಲನೆ ಮಾಡುವುದೇ ನಮ್ಮ ಧೋರಣೆ. ರಾಜ್ಯದ ಮೇಲುಕೋಟೆ, ವಿರಾಜಪೇಟೆ, ಮಂಡ್ಯ, ಬೀಳಗಿ ಸೇರಿ 5 ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಪ್ರಕಟಿಸಿದ್ದೇವೆ. ರೈತರ, ಜನಸಾಮಾನ್ಯರ ಹಿತಕಾಯಲು ಪಕ್ಷ ಬದ್ಧವಾಗಿದೆ ಎಂದರು.
ರೈತ ವಿರೋಧಿಯಾಗಿರುವ ಕೇಂದ್ರ ಸರ್ಕಾರ ವಾಣಿಜ್ಯೋದ್ಯಮದ ಶ್ರೀಮಂತ ವ್ಯಕ್ತಿಗಳ ಸಾಲ ಮನ್ನಾ ಮಾಡಿದೆ. ಆದರೆ ರೈತರ ಸಾಲ ಮನ್ನಾಕ್ಕೆ ಮೀನಮೇಷ ಎಣಿಸುತ್ತಿರುವುದು ಖಂಡನೀಯ. ಈ ಎಲ್ಲ ಸಮಸ್ಯೆಗಳನ್ನು ಪರಿಹರಿಸಿ ಉತ್ತಮ ಆಡಳಿತ ತರುವ ನಿಟ್ಟಿನಲ್ಲಿ ಪ್ರಯತ್ನ ನಡೆಸಿದ್ದೇವೆ ಎಂದರು.
ರಾಜ್ಯ ರೈತ ಸಂಘದ ಮುಖಂಡ ರವಿಕಿರಣ ಪೂಣಚ್ಚ ಮಾತನಾಡಿ, ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಫೆ. 16ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ಬಳಿ ಬೃಹತ್ ಪ್ರತಿಭಟನಾ ಸಮಾವೇಶ ಏರ್ಪಡಿಸಲಾಗಿದೆ. ಎಪಿಎಂಸಿ ಕಾಯಿದೆ, ವಿದ್ಯುತ್ ಖಾಸಗೀಕರಣ, ಕಾರ್ಮಿಕ ವಿರೋಧಿ ನೀತಿ ಸೇರಿ ಜ್ವಲಂತ ಸಮಸ್ಯೆಗಳ ಕುರಿತು ಧ್ವನಿ ಎತ್ತಲಾಗುವುದು. ರಾಜ್ಯದ ಲಕ್ಷಾಂತರ ರೈತರು, ದಲಿತರು, ಕಾರ್ಮಿಕರು ಸೇರಿ ಅನೇಕ ಹೋರಾಟಗಾರರು ಪಾಲ್ಗೊಳ್ಳಲಿದ್ದಾರೆ ಎಂದರು.
ಮುಖಂಡ ನಾಗಪ್ಪ ಉಂಡಿ, ಇತರರು ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net