ಚಾಮರಾಜನಗರ: ವಿಶ್ವಗಾಣಿಗರ ಚಾರಿಟಬಲ್ ಟ್ರಸ್ಟ್ ವತಿಯಿಂದ ಬೆಂಗಳೂರಿನಲ್ಲಿ ಶ್ರೀಪೂರ್ಣಾನಂದಪುರಿ ಮಹಾಸ್ವಾಮಿಗಳ ಪೀಠಾರೋಹಣದ ದ್ವಿತೀಯ ವಾರ್ಷಿಕೋತ್ಸವ, ಪ್ರವಚನಾಲಯ, ಶಾಲಾ ಕಟ್ಟಡ ಮತ್ತು ಪ್ರಸಾದ ಮನೆಯ ಕಟ್ಟಡಗಳ ಉದ್ಘಾಟನೆ ಸಮಾರಂಭ ಹಾಗೂ ಗಾಣಿಗರ ಹಬ್ಬವು ಜ.11 ರಂದು ನಡೆಯಲಿದೆ ಎಂದು ಗಾಣಿಗರ ಸಂಘದ ಜಿಲ್ಲಾಧ್ಯಕ್ಷ ಜಿ.ಅಂಕಪ್ಪ ಹೇಳಿದರು.
ಶ್ರೀಕ್ಷೇತ್ರ ತೈಲೇಶ್ವರ ಗಾಣಿಗರ ಮಹಾಸಂಸ್ಥಾನ ಮಠದ ಸಂಸ್ಥಾಪಕ ಮತ್ತು ಪೀಠಾಧಿಪತಿ ಶ್ರೀಪೂರ್ಣಾನಂದಪುರಿಸ್ವಾಮೀಜಿ ದಿವ್ಯಸಾನಿಧ್ಯ ವಹಿಸಲಿದ್ದಾರೆ. ಶ್ರೀಶೈಲಾಸ ಆಶ್ರಮ ಮಹಾಸಂಸ್ಥಾನದ ಪೀಠಾಧಿಪತಿ ಶ್ರೀಜಯೇಂದ್ರಪುರಿಸ್ವಾಮಿ ಮತ್ತು ಇನ್ನಿತರ ಶ್ರೀಗಳ ನೇತೃತ್ವದಲ್ಲಿ ಶ್ರೀಪೂರ್ಣಾನಂದಪುರಿ ಸ್ವಾಮಿಗಳಿಗೆ ದ್ವಿತೀಯ ಪೀಠಾರೋಹಣ ನೆರವೇರಲಿದೆ. ಸಭಾ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಸಾದ ಮನೆ ಕಟ್ಟಡ ಉದ್ಘಾಟನೆ ಮಾಡಲಿದ್ದಾರೆ. ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪಮೊಯ್ಲಿ ಗಾಣಿಗ ಸೂರ್ಯಗ್ರಂಥ ಬಿಡುಗಡೆ ಮಾಡಲಿದ್ದಾರೆ. ಸ್ವಾಗತ ಸಮಿತಿ ಅಧ್ಯಕ್ಷ ಜಿ.ಎನ್.ವೇಣುಗೋಪಾಲ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಬುಧವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಸ್ಮರಣ ಸಂಚಿಕೆ ಬಿಡುಗಡೆ ಮಾಡುವರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಸಾಮಾಜಿಕ ಜಾಲತಾಣಗಳ ಉದ್ಘಾಟನೆ ಮಾಡಲಿದ್ದಾರೆ. ರಾಜ್ಯ ಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್ ಗ್ರಂಥಾಲಯ ಕಟ್ಟಡ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಹಿಂದುಳಿದ ವರ್ಗ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಸರ್ಕಾರದ ಗ್ಯಾರಂಟಿ ಯೋಜನೆ ಅಧ್ಯಕ್ಷ ಎಚ್.ಎಂ.ರೇವಣ್ಣ, ಸಮುದಾಯದ ಪ್ರಥಮ ಐಎಎಸ್ ಅಧಿಕಾರಿ ಡಾ.ಬಿ.ವಿ.ವಾಸಂತಿ ಅಮರ್ ಇತರ ಗಣ್ಯರು ಭಾಗವಹಿಸಲಿದ್ದಾರೆ ಎಂದರು.
ಸಮಾರಂಭದಲ್ಲಿ ಗಾಣಿಗ ಸಮುದಾಯವನ್ನು 2ಎನಲ್ಲಿ ಮುಂದುವರಿಸಬೇಕು. ಮುಂದಿನ ಬಜೆಟ್‌ನಲ್ಲಿ ಗಾಣಿಗ ಅಭಿವೃದಿ ನಿಗಮಕ್ಕೆ 25 ಕೋಟಿ ರೂ, ಅನುದಾನ ಮೀಸಲಿಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗುತ್ತದೆ. ಸಮುದಾಯ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಮಠದಲ್ಲಿ ವಿದ್ಯಾರ್ಥಿ ನಿಲಯ, ಶಾಲೆಯಲ್ಲಿ ಅವಕಾಶ ಕಲ್ಪಿಸಲಾಗಿದೆ ಸದುಪಯೋಗಪಡಿಸಿಕೊಳ್ಳಬೇಕು. ಈ ಸಮಾರಂಭಕ್ಕೆ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಮುದಾಯದವರು ಭಾಗವಹಿಸಿ ಯಶ್ವಸಿಗೊಳಿಸಿಕೊಡಬೇಕು ಎಂದು ಮನವಿ ಮಾಡಿದರು.
ಗೋಷ್ಠಿಯಲ್ಲಿ ಜಿಲ್ಲಾ ಗಾಣಿಗರ ಸಂಘದ ಪ್ರಧಾನ ಕಾರ್ಯದರ್ಶಿ ಜಯರಾಂಶೆಟ್ಟಿ, ಗೌರವಾಧ್ಯಕ್ಷ ಎಸ್.ಮಹದೇವಪ್ಪ, ಕಾರ್ಯಾಧ್ಯಕ್ಷ ಜಿ.ಶಿವಕುಮಾರ್, ಉಪಾಧ್ಯಕ್ಷ ಆರ್.ಸಿದ್ದರಾಜು, ವೆಂಕಟಚಲ ಯಳಂದೂರು, ಖಜಾಂಚಿ ಮಹದೇವು, ದೀಪಕ್ ಹಾಜರಿದ್ದರು.