

ಮೈಸೂರು: ಕೂಲಿ ಹೆಚ್ಚಳಕ್ಕೆ ಒತ್ತಾಯಿಸಿ ಜಿಲ್ಲೆಯಲ್ಲಿ ಅನ್ಯಭಾಗ್ಯ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರು ಜ.2 ರಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ನಿರ್ಧರಿಸಿದ್ದಾರೆ.
ಕೂಲಿಯನ್ನು ಕಡೆಯದಾಗಿ 2018ರಲ್ಲಿ ಹೆಚ್ಚಳ ಮಾಡಲಾಗಿತ್ತು. ಅದಾಗಿ ನಾಲ್ಕು ವರ್ಷಗಳು ಕಳೆದರೂ ಕೂಲಿ ಹೆಚ್ಚಳ ಮಾಡಲು ಸರ್ಕಾರ ಆಸಕ್ತಿ ತೋರುತ್ತಿಲ್ಲ. 2018ರಲ್ಲಿ ನಡೆಸಿದ ಹೋರಾಟದ ಫಲವಾಗಿ ಲೋಡಿಂಗ್ ಹಾಗೂ ಅನ್‌ಲೋಡಿಂಗ್ ದರವನ್ನು ತಲಾ 6 ರೂ.ನಿಂದ 8 ರೂ.ಗೆ ಹೆಚ್ಚಳ ಮಾಡಲಾಗಿತ್ತು. ಇದೀಗ ಲೋಡಿಂಗ್ ಹಾಗೂ ಅನ್‌ಲೋಡಿಂಗ್‌ಗೆ ತಲಾ 12.50 ರೂ. ನಂತೆ 25 ರೂ.ಗೆ ಏರಿಕೆ ಮಾಡಬೇಕು ಎಂದು ಜಿಲ್ಲಾ ಲೋಡಿಂಗ್ ಮತ್ತು ಅನ್‌ಲೋಡಿಂಗ್ ಕಾರ್ಮಿಕರ ಒಕ್ಕೂಟದ ಅಧ್ಯಕ್ಷ ಕರಿನಾಯಕ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.
ನಾಲ್ಕು ವರ್ಷಗಳ ಅವಧಿಯಲ್ಲಿ ಎಲ್ಲ ಅಗತ್ಯ ವಸ್ತುಗಳ ದರ ಏರಿಕೆ ಕಂಡಿದ್ದು, ಸರ್ಕಾರ ನಿಗದಿ ಪಡಿಸಿರುವ ಕೂಲಿಯಿಂದ ಜೀವನ ನಿರ್ವಹಣೆ ಮಾಡಲು ಸಾಧ್ಯವಾಗುತ್ತಿಲ್ಲ. ಕೋವಿಡ್ ಸಂದರ್ಭ ನಾವು ಜೀವದ ಹಂಗು ತೊರೆದು ಅನ್ನಭಾಗ್ಯ ಯೋಜನೆಯ ಲೋಡಿಂಗ್ ಹಾಗೂ ಅನ್‌ಲೋಡಿಂಗ್ ಕಾರ್ಯವನ್ನು ನಿರ್ವಹಿಸಿದೆವು. ಆದರೆ, ಸರ್ಕಾರ ನಮ್ಮನ್ನು ಕೋವಿಡ್ ವಾರಿಯರ್‌ಗಳಾಗಿ ಪರಿಗಣಿಸಲಿಲ್ಲ. ಕೋವಿಡ್‌ನಂತಹ ಸಂದರ್ಭದಲ್ಲೂ ನಾವು ಉತ್ತಮವಾಗಿ ಕಾರ್ಯನಿರ್ವಹಿಸಿದ್ದೇವೆ. ಹೀಗಿದ್ದರೂ ಸರ್ಕಾರ ನಮ್ಮನ್ನು ಕಡೆಗಣಿಸುತ್ತಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಒಕ್ಕೂಟದ ಪದಾಧಿಕಾರಿಗಳಾದ ನರಸಿಂಹಮೂರ್ತಿ, ಗೋವಿಂದರಾಜು, ಚೆಲುವರಾಜು, ಮಹದೇವು, ಎನ್.ಸಿ. ಕುಮಾರ್ ಇದ್ದರು.