ಜ.೨೧ ರಿಂದ ವಿಜಯ ಸಂಕಲ್ಪ ಅಭಿಯಾನ

bkt-19-8
ಬಾಗಲಕೋಟೆ ನಗರದ ಪ್ರೆಸ್‌ಕ್ಲಬ್‌ನಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಮುಖಂಡರಾದ ಬಸವರಾಜ ಯಂಕಂಚಿ, ರಾಜು ನಾಯ್ಕರ, ಸತ್ಯನಾರಾಯಣ ಹೇಮಾದ್ರಿ, ಸುರೇಶ ಕೊಣ್ಣೂರ ಇತರರು ಇದ್ದರು.
Published on

ಬಾಗಲಕೋಟೆ: ಭಾರತೀಯ ಜನತಾ ಪಕ್ಷದಿಂದ ಜ.೨೧ರಿಂದ ೨೯ ವರೆಗೆ ವಿಜಯ ಸಂಕಲ್ಪ ಅಭಿಯಾನ ಹಮ್ಮಿಕೊಂಡಿದ್ದು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಸಾಧನೆಗಳನ್ನು ಮನೆ ಮನೆಗೆ ತಲುಪಿಸುವ ಕೆಲಸವನ್ನು ಕಾರ್ಯಕರ್ತರು, ಮುಖಂಡರು ಈ ಅಭಿಯಾನದಲ್ಲಿ ಮಾಡಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ ಹೇಳಿದರು.
ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ವಿಜಯ ಸಂಕಲ್ಪ ಅಭಿಯಾನಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾರವರು ಜ.೨೧ರಂದು ಚಾಲನೆ ನೀಡಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲ ಭಾಗವಹಿಸಲಿದ್ದಾರೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ವಿಜಯ ಸಂಕಲ್ಪ ಅಭಿಯಾನ ಸರ್ವಸ್ಪರ್ಶಿ ಕಾರ್ಯಕ್ರಮವಾಗಿದೆ. ಬಿಜೆಪಿಯನ್ನು ಗೆಲುವಿನ ಉತ್ತುಂಗಕ್ಕೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರವಹಿಸಲಿದೆ. ಜಿಲ್ಲೆಯಲ್ಲಿ ೧೫,೧೭,೭೫೬ ಮತದಾರರು ಇದ್ದು ೧೦ ರಿಂದ ೧೨ ಲಕ್ಷ ಮತದಾರರನ್ನು ಈ ವಿಜಯ ಸಂಕಲ್ಪ ಅಭಿಯಾನದ ಮೂಲಕ ನಮ್ಮ ಪಕ್ಷದ ಕಾರ್ಯಕರ್ತರು ತಲುಪುತ್ತಾರೆ. ಜಿಲ್ಲೆಯ ೧೨ ಮಂಡಳಗಳಲ್ಲಿ ಕಾರ್ಯಕರ್ತರು ಬಿಜೆಪಿಯ ಸಾಧನೆಯನ್ನು ಮನೆ ಮನೆಗೆ ತಲುಪಿಸಲಿದ್ದಾರೆ ಎಂದರು.
ಜಿಲ್ಲೆಯಲ್ಲಿ ಜ.೨೧ ರಿಂದ ಅಭಿಯಾನದ ಆರಂಭ ಆಗಲಿದ್ದು, ಈಗಾಗಲೇ ವ್ಯವಸ್ಥಿತ ಪೂರ್ವಭಾವಿ ಸಿದ್ಧತೆ ನಡೆದಿದೆ. ಮುಂಬರುವ ಚುನಾವಣೆಯಲ್ಲಿ ಬಾಗಲಕೋಟೆ ಜಿಲ್ಲೆಯ ೭ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವ ಗುರಿಯನ್ನು ಹಾಕಿಕೊಳ್ಳಲಾಗಿದೆ. ಡಬಲ್ ಇಂಜಿನ್ ಸರ್ಕಾರದ ಯೋಜನೆ ಫಲಾನುಭವಿಗಳ ಸಂಖ್ಯೆ ರಾಜ್ಯದಲ್ಲಿ ಒಂದು ಕೋಟಿಗೂ ಅಧಿಕ ಇದ್ದು, ಆ ಪಟ್ಟಿ ಕೂಡ ತಯಾರಿಸಲಾಗಿದೆ. ಫಲಾನುಭವಿಗಳನ್ನು ಸಂಪರ್ಕಿಸುವ ಕಾರ್ಯವನ್ನು ಪಕ್ಷದ ಕಾರ್ಯಕರ್ತರು ತಳಮಟ್ಟದಿಂದ ಮಾಡಲಿದ್ದಾರೆ ಎಂದರು.
ಜಿಲ್ಲಾ ವಕ್ತಾರ ಸತ್ಯನಾರಾಯಣ ಹೇಮಾದ್ರಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ, ಗ್ರಾಮೀಣ ಮಂಡಲ ಅಧ್ಯಕ್ಷ ಸುರೇಶ ಕೊಣ್ಣೂರ, ಜಿಲ್ಲಾ ಮಾಧ್ಯಮ ಸಂಚಾಲಕ ನರೇಂದ್ರ ಕುಪ್ಪಸ್ತ, ಸಹ ಸಂಚಾಲಕ ವಿಠ್ಠಲ ಜಮಖಂಡಿ, ನಗರ ಮಾಧ್ಯಮ ಸಂಚಾಲಕ ರಾಜು ಗಾಣಿಗೇರ ಸುದ್ದಿಗೋಷ್ಠಿಯಲ್ಲಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net