

ಹಾಸನ: ಮೂಡಿಗೆರೆ, ಬೇಲೂರು ಮತ್ತು ಚಿಕ್ಕಮಗಳೂರು ತಾಲೂಕಿನಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿದ್ದು, ಮೇ 25ರಂದು ಬೆಳಿಗ್ಗೆ 6 ಗಂಟೆಗೆ 500 ಕ್ಯುಸೆಕ್ ನೀರು ಜಲಾಶಯಕ್ಕೆ ಹರಿದು ಬರುತ್ತಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟವು 964,60 ಮೀ. (3164.85 ಆಡಿ) ಗಳಾಗಿದ್ದು, ಈ ದಿನಾಂಕದಂದು ಬೆಳಗ್ಗೆ 6 ಗಂಟೆಗೆ ನೀರಿನ ಮಟ್ಟವು 964.23 ಮೀ. ಗಳಾಗಿರುತ್ತದೆ. ಪ್ರಸ್ತುತ ಯಗಚಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಹೆಚ್ಚು ಮಳೆಯಾಗುತ್ತಿದ್ದು, ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಜಲಾಶಯಕ್ಕೆ ನೀರು ಹರಿದುಬರುವ ಸಾಧ್ಯತೆ ಇದೆ. ಹೀಗಾಗಿ ಜಲಾಶಯದಿಂದ ಯಾವುದೇ ಸಮಯದಲ್ಲಾದರೂ ಯಗಚಿ ನದಿಗೆ ಹೆಚ್ಚಿನ ಪ್ರಮಾಣದ ನೀರನ್ನು ಹೊರಬಿಡುವ ಸಾಧ್ಯತೆ ಇದೆ.
ಈ ಹಿನ್ನೆಲೆಯಲ್ಲಿ ಯಗಚಿ ನದಿ ಪಾತ್ರ, ನದಿ ದಂಡೆ ಮತ್ತು ನದಿಯ ಆಸುಪಾಸಿನಲ್ಲಿ ವಾಸಿಸುವ ಎಲ್ಲ ಗ್ರಾಮಸ್ಥರು, ಸ್ಥಳೀಯ ವಾಸಿಗಳು ಮುನ್ನೆಚ್ಚರಿಕೆ ಕ್ರಮವಾಗಿ ಜನ, ಜಾನುವಾರು ಹಾಗೂ ಆಸ್ತಿ ಪಾಸ್ತಿ ವಗೈರೆಗಳನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಿಕೊಳ್ಳುವ ಬಗ್ಗೆ ಮಾಹಿತಿ ಮತ್ತು ಜಾಗೃತಿ ಮೂಡಿಸಲು ಸೂಕ್ತ ಕ್ರಮ ತೆಗೆದುಕೊಳ್ಳಲು ಈ ಮೂಲಕ ಸಂಬಂಧಿಸಿದವರಲ್ಲಿ ಕೋರಲಾಗಿದೆ.
ಮುಂದುವರೆದು ಸಾರ್ವಜನಿಕರಿಗೆ ಮಾಹಿತಿ ಮತ್ತು ಜಾಗೃತಿ ಮೂಡಿಸಲು ಸೂಕ್ತ ಕ್ರಮ ತೆಗೆದುಕೊಳ್ಳಲು ಸಂಬಂಧಿಸಿದ ಸರ್ಕಾರದ ಸ್ಥಳೀಯ ಇಲಾಖಾ ಅಧಿಕಾರಿಗಳಿಗೆ ಈ ಮೂಲಕ ಬೇಲೂರಿನ ಯಗಚಿ ಯೋಜನಾ ವಿಭಾಗದ ಕಾರ್ಯಪಾಲಕ ಅಭಿಯಂತರರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.