

ಹಾಸನ: ಮಕ್ಕಳಿಗೆ ಶಿಕ್ಷಣ ನೀಡಿ ಅವರನ್ನ ಉತ್ತಮ ಪ್ರಜೆಗಳನ್ನಾಗಿ ಮಾಡಬೇಕು, ಅದನ್ನು ಬಿಟ್ಟು ಅವರನ್ನು ಕೆಲಸಕ್ಕೆ ಸೇರಿಸಿಕೊಳ್ಳುವುದು ಕಾನೂನಿನ ಮೂಲಕ ಅಪರಾಧ ಎಂದು ಅಪರ ಜಿಲ್ಲಾಧಿಕಾರಿ ಕೆ.ಟಿ.ಶಾಂತಲಾ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಗೆ ಆಭರಣದಲ್ಲಿ ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನೆ ಸೊಸೈಟಿ ಇವರ ಸಂಯುಕ್ತ ಆಶಯದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಬಾಲ್ಯವ್ಯವಸ್ಥೆ ಹಾಗೂ ಕಿಶೋರಾವ್ಯಸ್ಥೆ ಕಾರ್ಮಿಕ ಪದ್ಧತಿ ನಿಷೇಧದ ಬಗ್ಗೆ ಅರಿವು ಮೂಡಿಸುವ ಜನಜಾಗೃತಿ ಬೀದಿ ನಾಟಕ ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಲು ಎಲ್ಲರೂ ಸಹಕಾರ ನೀಡಬೇಕು ಎಂದು ಹೇಳಿದರು.
ಈ ಪದ್ಧತಿಯನ್ನು ನಿರ್ಮೂಲನೆ ಮಾಡುವ ಉದ್ದೇಶದಿಂದ ಸರ್ಕಾರದ ವತಿಯಿಂದ ಹಲವು ಯೋಜನೆಗಳನ್ನ ಜಾರಿಗೊಳಿಸಲಾಗಿದೆ. ಒಂದು ವೇಳೆ ಮಕ್ಕಳ ಕೈಯಲ್ಲಿ ಕೆಲಸ ಮಾಡಿಸಿಕೊಳ್ಳುತ್ತಿದ್ದವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಮಕ್ಕಳನ್ನು ಕೆಲಸಕ್ಕೆ ಕಳುಹಿಸುವ ಬದಲು ಅವರಿಗೆ ಗುಣಮಟ್ಟದ ಶಿಕ್ಷಣವನ್ನ ನೀಡುವ ಮೂಲಕ ಅವರ ಜೀವನವನ್ನು ರೂಪಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಸಹಕಾರಿಯಾಗಬೇಕು. ಪೋಷಕರು ಈ ನಿಟ್ಟಿನಲ್ಲಿ ಹೆಚ್ಚು ಗಮನಹರಿಸಬೇಕು. ಬಡತನ ಎಂಬ ಕಾರಣಕ್ಕಾಗಿ ಮಕ್ಕಳನ್ನು ಶಾಲೆ ಬಿಡಿಸಿ ಕೆಲಸಕ್ಕೆ ಕಳಿಸುವುದು ಕಾನೂನಿನ ಅಡಿಯಲ್ಲಿ ಅಪರಾಧವಾಗಿದೆ ಎಂದರು.
ನ್ಯಾಯಾಧೀಶ ಬಿ.ಕೆ. ರವಿಕಾಂತ್ ಮಾತನಾಡಿ, 18 ವರ್ಷದಕ್ಕಿಂತ ಕಡಿಮೆ ಇರುವ ಮಕ್ಕಳನ್ನು ಕೆಲಸಕ್ಕೆ ಸೇರಿಸಿಕೊಂಡರೆ ಮಾಲೀಕರ ವಿರುದ್ಧ ಆರು ತಿಂಗಳಿನಿಂದ ಎರಡು ವರ್ಷದವರೆಗೆ ಜೈಲು ಶಿಕ್ಷೆ ಅಥವಾ 20 ಸಾವಿರದಿಂದ 50 ಸಾವಿರದವರೆಗೆ ದಂಡ ವಿಧಿಸಬಹುದಾಗಿದೆ ಎಂದು ಮಾಹಿತಿ ನೀಡಿದರು
ಪ್ರತಿಯೊಬ್ಬ ಮಗುವಿಗೂ ಶಿಕ್ಷಣ ಅವರ ಹಕ್ಕಾಗಿದೆ. ಅದನ್ನು ಕಸಿದುಕೊಳ್ಳಲು ಯಾರಿಗೂ ಕೂಡ ಅವಕಾಶವಿಲ್ಲ, ಪೋಷಕರು ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ಅವರ ಬದುಕಿಗೆ ದಾರಿದೀಪವಾಗಬೇಕು ಅದನ್ನು ಬಿಟ್ಟು ಅವರನ್ನು ಕತ್ತಲ ಕೋಣೆಗೆ ತಳ್ಳುವುದು ಸರಿಯಲ್ಲ ಎಂದು ಕಿವಿಮಾತು ಹೇಳಿದರು.
ಈ ಸಂದರ್ಭದಲ್ಲಿ ಕಾರ್ಮಿಕ ಇಲಾಖೆಯ ಅಧಿಕಾರಿಗಳಾದ ರವಿಕುಮಾರ್, ಅನಂತರ, ಕನಕಲಕ್ಷ್ಮೀ, ಹಿರಿಯ ಕಲಾವಿದ ಬಿ.ಟಿ. ಮಾನವ, ನೀಲಮ್ಮ ಸೇರಿದಂತೆ ಇತರರು ಇದ್ದರು.