ಜನತಂತ್ರ ವ್ಯವಸ್ಥೆ ಉಳಿವಿಗಾಗಿ ಬಿಜೆಪಿ ಸೋಲಿಸಿ

5kglphto-1
Published on

ಕೊಳ್ಳೇಗಾಲ: ಜನತಂತ್ರ ವ್ಯವಸ್ಥೆಯ ಉಳಿವಿಗಾಗಿ ಬಿಜೆಪಿ ಸೋಲಿಸುವ ಸಾಮರ್ಥ್ಯವಿರುವ ಅಭ್ಯರ್ಥಿಗಳಿಗೆ ಮತ ನೀಡಬೇಕೆಂದು ಮೈಸೂರಿನ ದಲಿತ ಸಂಘರ್ಷ ಸಮಿತಿ ಸಂಚಾಲಕ ಚೋರನಹಳ್ಳಿ ಶಿವಣ್ಣ ಹೇಳಿದರು.

ಬಿಜೆಪಿ ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದಿದೆ. ಜಾತಿ, ದೇವರು, ಧರ್ಮದ ಹೆಸರಲ್ಲಿ ಅಶಾಂತಿ ಮೂಡಿಸುತ್ತಿದೆ. ರೈತ ವಿರೋಧಿ ಹಾಗೂ ಜನ ವಿರೋಧಿ ಕಾಯ್ದೆಗಳನ್ನು ಜಾರಿ ತಂದಿದೆ. ವಿದ್ಯಾರ್ಥಿ ವೇತನ ಕಡಿತಗೊಳಿಸಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಬಡವರು ಜೀವಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣ ಮಾಡಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಅಧಿಕಾರಕ್ಕೆ ಬರುವ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ವಿದೇಶದಲ್ಲಿರುವ ಕಪ್ಪು ಹಣವನ್ನು ತರುತ್ತೇನೆ. ಜನಧನ ಖಾತೆಗೆ ತಲಾ 15 ಲಕ್ಷ ರೂ. ಹಾಕುತ್ತೇನೆ ಎಂಬ ಭರವಸೆ ನೀಡಿದ್ದರು. ಅಧಿಕಾರಕ್ಕೆ ಬಂದರೂ ನೀಡಿದ ಭರವಸೆಗಳು ಈಡೇರಲಿಲ್ಲ. ಬದಲಾಗಿ ನೇಮಕಾತಿ ಹಗರಣ, ಬಿಟ್ ಕಾಯಿನ್ ಹಗರಣ, ಕಮಿಷನ್ ದಂಧೆ ಹೀಗೆ ಹಲವು ಹಗರಣ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಬಾರಿ ಬಿಜೆಪಿ ವಿರುದ್ಧ ಮತ ಚಲಾಯಿಸಬೇಕಿದೆ ಎಂದರು.

ಕೊಳ್ಳೇಗಾಲ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎನ್.ಮಹೇಶ್ ಪ್ರಚಾರಕ್ಕೆ ಹೋದ ಕಡೆಯಲ್ಲ ವಿರೋಧ ವ್ಯಕ್ತವಾಗುತ್ತಿದೆ. ಇದ್ದರಿಂದಲೇ ತಿಳಿಯುತ್ತಿದೆ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲುವುದಿಲ್ಲ ಎಂಬುದು. ಆದ್ದರಿಂದ ಕಾಂಗ್ರೆಸ್ ಅಭ್ಯರ್ಥಿ ಎ.ಆರ್.ಕೃಷ್ಣಮೂರ್ತಿ ಅವರಿಗೆ ಜನರು ಮತ ನೀಡಬೇಕೆಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ದಸಂಸ ಸಂಘಟನಾ ಸಂಚಾಲಕ ಕೆ.ವಿ. ದೇವೇಂದ್ರ, ಚಾಮರಾಜನಗರ ದಸಂಸ ಜಿಲ್ಲಾಧ್ಯಕ್ಷ ಕೆ.ಎಂ.ನಾಗರಾಜು, ರಾಜಶೇಖರ್ ಇತತರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net