

ಬಳ್ಳಾರಿ : ಜನರ ಸಮಸ್ಯೆಗಳ ಶೀಘ್ರ ಪರಿಹಾರ ಒದಗಿಸಲು ಜನಸ್ಪಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು, ನಮ್ಮದು ಜನಪರ ಸರ್ಕಾರ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಜಮೀರ್ ಅಹ್ಮದ್ ಖಾನ್ ಹೇಳಿದರು.
ನಗರದ ನೂತನ ಜಿಲ್ಲಾಡಳಿತ ಭವನದ ಆವರಣದಲ್ಲಿ ಶನಿವಾರ ನಡೆದ ಜನಸ್ಪಂದನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಾರ್ವಜನಿಕರ ದೂರು, ಅಹವಾಲುಗಳನ್ನು ಆಲಿಸಿ, ಸಾಧ್ಯವಾದಷ್ಟು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಮತ್ತು ಉಳಿದವುಗಳನ್ನು ಕಡಿಮೆ ಕಾಲಮಿತಿಯಲ್ಲಿ ಪರಿಹರಿಸಲಾಗುವುದು. ಉತ್ತಮ ಆಡಳಿತ ನೀಡಲು ಮತ್ತು ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ ಫಲಾನುಭವಿಗಳಿಗೆ ಸಕಾಲದಲ್ಲಿ ತಲುಪಿಸಲು ಅಧಿಕಾರಿಗಳು ಕ್ರಿಯಾಶೀಲವಾಗಿ ಕಾರ್ಯಪ್ರವೃತ್ತರಾಗಬೇಕಿದೆ ಎಂದು ಅಧಿಕಾರಿಗಳಿಗೆ ಸೂಚಿಸಿದರು. ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಯಶಸ್ವಿಯಾಗಿ ಈ ಕಾರ್ಯಕ್ರಮವನ್ನು ನಡೆಸಲಾಗಿದೆ. ಈ ಹಿಂದೆ ನಡೆದ ಜಿಲ್ಲಾಮಟ್ಟದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಒಟ್ಟು 380 ಅರ್ಜಿ ಸಲ್ಲಿಕೆಯಾಗಿದ್ದವು. ಅದರಲ್ಲಿ ಬಹಳಷ್ಟು ವಸತಿ ಮತ್ತು ಮನೆ ನಿರ್ಮಾಣಕ್ಕೆ ಸಂಬಅಧಿಸಿದಂತೆ ಜಾಸ್ತಿ ಅಹವಾಲು ಸಲ್ಲಿಕೆಯಾಗಿದ್ದವು. ಇನ್ನುಳಿದಂತೆ ಕಾಲಕ್ರಮೇಣವಾಗಿ ಇತ್ಯರ್ಥಗೊಳಿಸಲಾಗಿದೆ ಜನವರಿ ತಿಂಗಳಲ್ಲಿ ಕ್ಯಾಬಿನೆಟ್‌ನಲ್ಲಿ ವಸತಿ ಇಲಾಖೆಗೆ 500 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದರು. ಅದರಂತೆ ಫೆಬ್ರವರಿಯಲ್ಲಿ 36,789 ಮನೆಗಳನ್ನು ನೀಡಿದ್ದೇವೆ. ಮುಂದಿನ ತಿಂಗಳಲ್ಲಿ 38,200 ಮನೆಗಳನ್ನು ನೀಡಲಾಗುವುದು ಎಂದು ಸಿಎಂ ಸೂಚಿಸಿದ್ದಾರೆ ಎಂದರು. ತುಂಗಭದ್ರಾ ಜಲಾಯಶದ 19ನೇ ಕ್ರಸ್ಟ್ ಗೇಟ್ ಮೊದಲ ಹಂತದ ಸ್ಟಾಪ್ ಗೇಟ್ ಅಳವಡಿಕೆ ಕಾರ್ಯ ಯಶಸ್ವಿಯಾಗಿದೆ. ಉಳಿದ ನಾಲ್ಕು ಹಂತದ ಸ್ಟಾಪ್ ಗೇಟ್ ಅಳವಡಿಕೆ ಕಾರ್ಯ ನಡೆಯುತ್ತಿದ್ದು ರೈತರು ಆತಂಕ ಪಡಬಾರದು ಎಂದರು.
232 ಅರ್ಜಿ ಸಲ್ಲಿಕೆ : ಅತಿಥಿ ಉಪನ್ಯಾಸಕರ ನೇಮಕ, ಕಟ್ಟಡ ದುರಸ್ತಿ, ವಸತಿ ನಿರ್ಮಾಣ, ಕುಡಿಯುವ ನೀರು, ರಸ್ತೆ ನಿರ್ಮಾಣ, ವಿದ್ಯುತ್ ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಒಟ್ಟು 232 ಅರ್ಜಿಗಳು ಜನಸ್ಪಂದನಾ ಕಾರ್ಯಕ್ರಮದಲ್ಲಿ ಸಲ್ಲಿಕೆಯಾದವು. ಕೆಲವು ಅರ್ಜಿಗಳನ್ನು ಸಚಿವರು, ಜಿಲ್ಲಾಧಿಕಾರಿಗಳು ಸ್ಥಳದಲ್ಲಿಯೇ ಪರಿಹರಿಸಿದರು. ಉಳಿದ ಅರ್ಜಿಗಳನ್ನು ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಕೂಡಲೇ ಬಗೆಹರಿಸುವಂತೆ ಆಯಾ ಇಲಾಖೆಗಳ ಅಧಿಕಾರಿಗಳಿಗೆ ನಿರ್ದೇಶಿಸಿದರು.
ಸ್ವ ಸಹಾಯ ಸಂಘದ ಮಹಿಳೆಯರಿಗೆ ಸ್ವಯಂ ಉದ್ಯೋಗಕ್ಕಾಗಿ ಚೆಕ್ ವಿತರಿಸಿಲಾಯಿತು. ಬಳಿಕ ಸ್ವಾವಲಂಬಿ ಸಾರಥಿ ಯೋಜನೆಯಡಿ ನಾಲ್ಕು ಚಕ್ರದ ವಾಹನಗಳನ್ನು ಫಲಾನುಭವಿಗಳಿಗೆ ವಿತರಿಸಿದರು.