ಚಾಮರಾಜನಗರ: ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ, ಯುವನಿಧಿ ಪಂಚ ಗ್ಯಾರಂಟಿಗಳು ಜನಪರವಾಗಿವೆ ಎಂದು ಎಂಎಸ್‌ಐಎಲ್ ಅಧ್ಯಕ್ಷ ಸಿ.ಪುಟ್ಟರಂಗಶೆಟ್ಟಿ ಹೇಳಿದರು.
ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಗುರುವಾರದಿಂದ ಜು.12ರವರೆಗೆ ಮೂರು ದಿನಗಳ ಕಾಲ ಆಯೋಜಿಸಿರುವ ರಾಜ್ಯಸರ್ಕಾರದ ಜನಪರ ಯೋಜನೆ, ಸಾಧನೆಗಳು, ಪಂಚ ಗ್ಯಾರಂಟಿ ಯೋಜನೆಗಳ ಪ್ರಯೋಜನ ಕುರಿತು ಮಾಹಿತಿ ಪ್ರಸ್ತುತಪಡಿಸುವ ವಸ್ತು ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯ ಸರ್ಕಾರದ ಎರಡು ವರ್ಷಗಳ ಅಭಿವೃದ್ದಿ ಕಾರ್ಯಕ್ರಮಗಳ ಸಾಧನೆ ಹಾಗೂ ಪಂಚ ಗ್ಯಾರಂಟಿ ಯೋಜನೆಗಳನ್ನು ಬಿಂಬಿಸುವ ವಸ್ತು ಪ್ರದರ್ಶನವನ್ನು ಹಮ್ಮಿಕೊಂಡು ಸಾರ್ವಜನಿಕರಿಗೆ ಅರಿವು ಮೂಡಿಸುತ್ತಿರುವುದು ಒಳ್ಳೆಯ ವಿಚಾರ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಜನರಿಗೆ ಮಾತು ಕೊಟ್ಟಂತೆ ಯೋಜನೆಗಳಾದ ಶಕ್ತಿ, ಗೃಹಲಕ್ಷ್ಮೀ, ಅನ್ನಭಾಗ್ಯ, ಗೃಹಜ್ಯೋತಿ ಹಾಗೂ ಯುವನಿಧಿ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ಯಶಸ್ವಿಯಾಗಿ ಅನುಷ್ಠಾನಗೊಳಿಸಿದ್ದಾರೆ. ಪಂಚಗ್ಯಾರಂಟಿ ಯೋಜನೆಗಳು ಜನರ ಪರವಾಗಿವೆ ಎಂದರು.
ರಾಜ್ಯಸರ್ಕಾರ ಅಧಿಕಾರಕ್ಕೆ ಬಂದು ಯಶಸ್ವಿಯಾಗಿ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸರ್ಕಾರದ ಎರಡು ವರ್ಷಗಳ ಅಭಿವೃದ್ದಿ ಕಾರ್ಯಕ್ರಮಗಳ ಸಾಧನೆ ಹಾಗೂ ಪಂಚ ಗ್ಯಾರಂಟಿ ಯೋಜನೆಗಳನ್ನು ಬಿಂಬಿಸುವ ವಸ್ತು ಪ್ರದರ್ಶನವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಬಹಳ ಅಚ್ಚುಕಟ್ಟಾಗಿ ಆಯೋಜಿಸಲಾಗಿದೆ. ಸರ್ಕಾರದ ಯೋಜನೆ, ಸಾಧನೆಗಳು ಪ್ರತಿಯೊಬ್ಬರಿಗೂ ಅರಿವಾಗಬೇಕು ಎಂದು ತಿಳಿಸಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಎಚ್.ವಿ. ಚಂದ್ರು ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದೆ. ಶಕ್ತಿ ಯೋಜನೆಯಡಿ ರಾಜ್ಯದಲ್ಲಿ ಇದುವರೆಗೆ 500 ಕೋಟಿ ಮಹಿಳಾ ಪ್ರಯಾಣಿಕರು ಬಸ್‌ಗಳಲ್ಲಿ ಪ್ರಯಾಣಿಸಿದ್ದಾರೆ. ವಿಶೇಷವಾಗಿ ಗೃಹಲಕ್ಷ್ಮೀ ಯೋಜನೆಯಲ್ಲಿ ಇಡೀ ರಾಜ್ಯದಲ್ಲಿಯೇ ಜಿಲ್ಲೆ ಮೊದಲ ಸ್ಥಾನ ಪಡೆದುಕೊಂಡಿದೆ. ಸರ್ಕಾರದ ಎಲ್ಲಾ ಅಭಿವೃದ್ಧಿ ಯೋಜನೆಗಳ ಪ್ರಗತಿ ಬಗ್ಗೆ ಜನಸಾಮಾನ್ಯರಿಗೆ ಮನವರಿಕೆ ಮಾಡುವ ನಿಟ್ಟಿನಲ್ಲಿ ವಸ್ತುಪ್ರದರ್ಶನ ಏರ್ಪಡಿಸಲಾಗಿದೆ ಎಂದ ಅವರು ಹೆಚ್ಚಿನ ಜನರು ವಸ್ತುಪ್ರದರ್ಶನವನ್ನು ವೀಕ್ಷಿಸುವಂತೆ ಮನವಿ ಮಾಡಿದರು.
ಶಾಸಕರು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷರು, ಸದಸ್ಯರು, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ಸರ್ಕಾರದ ಯೋಜನೆ, ಅಭಿವೃದ್ಧಿ ಕಾರ್ಯಕ್ರಮಗಳ ಕುರಿತ ವಸ್ತುಪ್ರದರ್ಶನ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರಾದ ಎಂ. ರಾಚಯ್ಯ, ಆರ್. ರಾಜೇಂದ್ರ, ಭಾಗ್ಯ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಬಿ.ಕೆ. ರವಿಕುಮಾರ್, ಕೆ.ಎಸ್.ಆರ್.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿ ಅಶೋಕ್‌ಕುಮಾರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಎ. ರಮೇಶ, ವಾರ್ತಾ ಸಹಾಯಕ ಸುರೇಶ್‌ಕುಮಾರ್ ಇತರರು ಇದ್ದರು.
ಪ್ರಗತಿಯಲ್ಲಿ ಗಡಿಜಿಲ್ಲೆ ಮುಂಚೂಣಿ:
ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಗಡಿಜಿಲ್ಲೆ ಚಾಮರಾಜನಗರ ರಾಜ್ಯದಲ್ಲೇ ಮುಂಚೂಣಿಯಲ್ಲಿದೆ. ಗೃಹಲಕ್ಷ್ಮಿ ಯೋಜನೆಯ ನೊಂದಣಿ ಗುರಿ 277547 ಇದ್ದರೆ, 277781 ಲಾನುಭವಿಗಳು ನೊಂದಣಿಯಾಗಿದ್ದಾರೆ. ಶೇ.100ರಷ್ಟು ಪ್ರಗತಿಯಾಗಿದೆ. ಅನ್ನಭಾಗ್ಯ ಯೋಜನೆಯ ಲಾನುಭವಿಗಳು 858080 ಜನರು ಇದ್ದಾರೆ. ಶಕ್ತಿ ಯೋಜನೆಯಡಿ ಪ್ರಯಾಣ ಮಾಡಿರುವ ಮಹಿಳೆಯರ ಸಂಖ್ಯೆಯೂ ಅಧಿಕವಿದೆ. ಯುವನಿಧಿ ಯೋಜನೆಯಡಿ ಚಾಮರಾಜನಗರ ತಾಲೂಕಿನಲ್ಲಿ 1418, ಗುಂಡ್ಲುಪೇಟೆ ತಾಲೂಕಿನಲ್ಲಿ 856, ಹನೂರು ತಾಲೂಕಿನಲ್ಲಿ 472, ಕೊಳ್ಳೇಗಾಲ ತಾಲೂಕಿನಲ್ಲಿ 688, ಯಳಂದೂರು ತಾಲೂಕಿನಲ್ಲಿ 316 ಸೇರಿ ಒಟ್ಟು 3750 ಲಾನುಭವಿಗಳು ನೊಂದಣಿ ಮಾಡಿಕೊಂಡಿದ್ದಾರೆ. ಗೃಹಜ್ಯೋತಿ ಯೋಜನೆಯಡಿ 271815 ಗ್ರಾಹಕರು ನೊಂದಣಿ ಮಾಡಿದ್ದಾರೆ. ಕೇವಲ 605 ಗ್ರಾಹಕರ ನೊಂದಣಿಯಷ್ಟೇ ಬಾಕಿ ಇದೆ.
ಸಭೆಯಲ್ಲಿ ವಿಷಯ ಪ್ರಸ್ತಾಪ:
ರೇಷ್ಮೆ, ಪಶು ಸಂಗೋಪನೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾ ಪಂಚಾಯಿತಿ ಕೆಡಿಪಿ ಸಭಾಂಗಣದಲ್ಲಿ ಜು.7ರಂದು ನಡೆದಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಗ್ಯಾರಂಟಿ ಯೋಜನೆಗ ಪ್ರಗತಿಯ ಕುರಿತು ಸಮಿತಿಯ ಜಿಲ್ಲಾಧ್ಯಕ್ಷ ಎಚ್.ವಿ.ಚಂದ್ರು ವಿಷಯ ಪ್ರಸ್ತಾಪಿಸಿದ್ದರು. ಯೋಜನೆಯ ಅನುಷ್ಠಾನದಲ್ಲಿ ಬೇರೆ ಜಿಲ್ಲೆಗಳಿಗಿಂತಲೂ ಚಾಮರಾಜನಗರ ಮುಂಚೂಣಿಯಲ್ಲಿದೆ ಎಂದು ಹೇಳಿದ್ದರು.
ಸಾರ್ವಜನಿಕರಿಂದ ವೀಕ್ಷಣೆ:
ನಗರದ ಬಸ್ ನಿಲ್ದಾಣಕ್ಕೆ ಬಂದಿದ್ದ ಸಾರ್ವಜನಿಕರು ವಸ್ತು ಪ್ರದರ್ಶನವನ್ನು ವೀಕ್ಷಣೆ ಮಾಡಿದರು. ಗುರುವಾರ ಶ್ರೀಚಾಮರಾಜೇಶ್ವರ ರಥೋತ್ಸವ ಇದ್ದ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗಗಳಿಂದ ಭಕ್ತರು ಆಗಮಿಸಿದ್ದರು. ಇವರು ರಥೋತ್ವದಲ್ಲಿ ಪಾಲ್ಗೊಂಡು ಹಿಂದಿರುಗುವ ವೇಳೆ ವಸ್ತು ಪ್ರದರ್ಶನವನ್ನು ವೀಕ್ಷಿಸಿದರು.