

ಮದ್ದೂರು: ನನ್ನ ನಿರಂತರ ಸಮಾಜಮುಖಿ ಸೇವೆಯನ್ನು ಗುರುತಿಸಿ ಹಾಗೂ ಕಾಂಗ್ರೆಸ್ ಪಕ್ಷದ ಆಡಳಿತವನ್ನು ಮೆಚ್ಚಿ ಕ್ಷೇತ್ರದ ಮತದಾರರು ಅಧಿಕ ಮತಗಳ ಅಂತರದಿಂದ ಗೆಲ್ಲಿಸಿದ್ದಾರೆ. ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ನೂತನ ಶಾಸಕ ಕೆ.ಎಂ. ಉದಯ್ ತಿಳಿಸಿದರು.
ಪಟ್ಟಣದ ಹೊರ ವಲಯದ ಖಾಸಗಿ ಹೋಟೆಲ್‌ನಲ್ಲಿ ಕಾಂಗ್ರೆಸ್ ಮುಖಂಡರಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಕ್ಷೇತ್ರದ ಜನರು ನನ್ನ ಮೇಲಿಟ್ಟಿರುವ ವಿಶ್ವಾಸಕ್ಕೆ ಸದಾ ಚಿರಋಣಿಯಾಗಿದ್ದು, ಜನರ ಆಶೋತ್ತರಗಳಿಗೆ ಸ್ಪಂದಿಸಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಿರೀಕ್ಷೆಗೂ ಮೀರಿ ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡಬೇಕು ಎಂಬ ಕನಸು ನನ್ನದು ಹಾಗೂ ಸರ್ಕಾರಿ ಕಚೇರಿಗಳಲ್ಲಿ ನಡೆಯುತ್ತಿರುವ ಲಂಚಗುಳಿತನ ಮತ್ತು ಭ್ರಷ್ಟಾಚಾರ ನಿರ್ಮೂಲನೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ನನ್ನ ಅಧಿಕಾರವಧಿಯಲ್ಲಿ ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ಕೈಗಾರಿಕೆ ಸೇರಿದಂತೆ ಮೂಲ ಸೌಕರ್ಯಗಳಿಗೆ ಆದ್ಯತೆ ನೀಡುತ್ತೇನೆ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದ ಗದ್ದುಗೆ ಏರುತ್ತಿದ್ದು, ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ತಂದು ಮಾದರಿ ಕ್ಷೇತ್ರವನ್ನಾಗಿ ಮಾಡುತ್ತೇನೆ. ಕಾಂಗ್ರೆಸ್ ಕೊಟ್ಟ ಭರವಸೆಗಳನ್ನು ಈಡೇರಿಸುತ್ತದೆ. ನೆಮ್ಮದಿಯ ಕರುನಾಡು ಕಟ್ಟಲು ನಾವೆಲ್ಲ ಕಾಂಗ್ರೆಸ್ ಜತೆ ಹೆಜ್ಜೆ ಹಾಕುತ್ತೇವೆ ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕದಲೂರು ರಾಮಕೃಷ್ಣ, ತಾಪಂ ಮಾಜಿ ಸದಸ್ಯ ತೈಲೂರು ಚೆಲುವರಾಜು, ಕೆಪಿಸಿಸಿ ವಕ್ತಾರ ಸತ್ಯಾನಂದ, ಮುಖಂಡರಾದ ಸಿ.ಟಿ.ಶಂಕರ್, ಗೊರವನಹಳ್ಳಿ ಮಧು, ಯರಗನಹಳ್ಳಿ ಹರೀಶ್, ಯತೀಶ್, ತೈಲೂರು ರಘು ಮತ್ತಿತರರಿದ್ದರು.