ಜನವಸತಿ ಪ್ರದೇಶದಲ್ಲಿ ಗಣಿಗಾರಿಕೆಗೆ ಅವಕಾಶ ನೀಡದಂತೆ ಒತ್ತಾಯ

IMG-20251014-WA0230
Published on

ಆಲೂರು: ಜನವಸತಿ ಪ್ರದೇಶದಲ್ಲಿ ಕಲ್ಲು ಗಣಿಗಾರಿಕೆಗೆ ನಡೆಸುತ್ತಿರುವುದನ್ನು ನಿಲ್ಲಿಸಿ ಸಾರ್ವಜನಿಕರಿಗೆ ಹಾಗೂ ಕಾಡುಪ್ರಾಣಿಗಳಿಗೆ ತೊಂದರೆಯಾಗುವುದನ್ನು ತಪ್ಪಿಸುವಂತೆ ಅರಣ್ಯ ಹಾಗೂ ಕಂದಾಯ ಸಚಿವರನ್ನು ಭೇಟಿ ಮಾಡಿ ಒತ್ತಾಯಿಸಲಾಗುವುದು ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದರು.

ತಾಲೂಕಿನ ಕೆಂಚಮ್ಮ ಹೊಸಕೋಟೆ ಹೋಬಳಿ ಹೊಸಮಠ ಗ್ರಾಮದಲ್ಲಿರುವ ಶಿಲುಬೆ ಬೆಟ್ಟದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ನಡೆಸುತ್ತಿರುವುದನ್ನು ವಿರೋಧಿಸಿ ಅಕ್ಕ ಅಕ್ಕಪಕ್ಕದ ಗ್ರಾಮಸ್ಥರು ಕಳೆದ ಹಲವು ತಿಂಗಳುಗಳಿಂದ ಪ್ರತಿಭಟನೆ ನಡೆಸುತ್ತಿದ್ದು, ಈ ಸಂಬಂಧ ಮಂಗಳವಾರ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ನಂತರ ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಕಾಡಾನೆಗಳು ವಾಸಿಸುತ್ತಿರುವ ಅತ್ಯಂತ ಸೂಕ್ಷ್ಮ ಪ್ರದೇಶದಲ್ಲಿ ಡೈನಾಮೇಟ್ ಬಳಸಿ ಕಲ್ಲುಗಣಿ ಗಾರಿಕೆ ಮಾಡಲು ಅಧಿಕಾರಿಗಳು ಅವಕಾಶ ನೀಡಿದ್ದಾರೆ. ಈ ಕಲ್ಲು ಕ್ವಾರೆ ಪಕ್ಕದಲ್ಲಿ ಹಲವಾರು ಮನೆಗಳಿದ್ದು, ಡೈನಾಮೇಟ್ ಸ್ಫೋಟದಿಂದ ಬಿರುಕು ಬಿಟ್ಟಿವೆ. ಈ ಸಂಬಂಧವಾಗಿ ಗ್ರಾಮಸ್ಥರು ಹಲವಾರು ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗದ ಕಾರಣ ಪ್ರತಿಭಟನೆಯ ಹಾದಿ ಹಿಡಿದಿದ್ದಾರೆ.

ಅಷ್ಟಾದರೂ ಸಹ ಸಂಬಂಧಪಟ್ಟ ಅಧಿಕಾರಿಗಳಾಗಲಿ, ಪೊಲೀಸರಾಗಲಿ, ಯಾವುದೇ ಕ್ರಮ ಕೈಗೊಳ್ಳದೆ ಇರುವುದು ಹಲವು ಅನುಮಾನಗಳಿಗೆ ಕಾರಣವಾಗಿವೆ. ಇಲ್ಲಿರುವವರೆಲ್ಲರೂ ರೈತಾಪಿ ವರ್ಗದವರಾಗಿದ್ದು ಈಗಾಗಲೇ ಕಾಡಾನೆ ಸಮಸ್ಯೆಗೆ ಸಿಲುಕಿ ನಲುಗಿ ಹೋಗಿದ್ದಾರೆ. ಈಗ ಇವರ ಜಮೀನಿನಲ್ಲಿ ಗಣಿಗಾರಿಕೆಯ ಪರಿಣಾಮ ಧೂಳು ಹಾಗೂ ತ್ಯಾಜ್ಯ ತುಂಬಿಕೊಂಡು ಬೆಳೆ ಬೆಳೆಯಲಾಗದೆ ಜಮೀನನ್ನು ಹಾಗೆ ಬಿಡಬೇಕಾಗಿದೆ. ನಾವು ರೈತರ ಹಿತ ಕಾಯಲು ಸದಾ ಸನ್ನದ್ಧರಾಗಿದ್ದು ಯಾವುದೇ ಕಾರಣಕ್ಕೂ ಅವರಿಗೆ ತೊಂದರೆ ಆಗಲು ಬಿಡುವುದಿಲ್ಲ.

ಹಾಗೆಂದು ಇಲ್ಲಿ ಗಣಿಗಾರಿಕೆ ನಡೆಸುತ್ತಿರುವ ಮಾಲೀಕರನ್ನಾಗಲಿ ಕೆಲಸಗಾರರಾಗಲಿ ತೊಂದರೆಗೆ ಸಿಲುಕಿಸಬೇಕು ಎಂಬುದು ನಮ್ಮ ಉದ್ದೇಶವಲ್ಲ. ಗ್ರಾಮಸ್ಥರು ಹಾಗೂ ಕಾಡುಪ್ರಾಣಿಗಳಿಗೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ಪರ್ಯಾಯ ಜಾಗದಲ್ಲಿ ಅವರಿಗೆ ಗಣಿಗಾರಿಕೆ ನೀಡಿದರೆ ನಮ್ಮದೇನೋ ತಕರಾರಿಲ್ಲ. ಆದರೆ ಇಲ್ಲಿ ಗಣಿಗಾರಿಕೆಗೆ ಅವಕಾಶ ನೀಡಬಾರದು. ಈಗ ನಾವು ಎಚ್ಚರಿಕೆ ನೀಡುತ್ತಿದ್ದೇವೆ ಇಲ್ಲಿನ ಸಮಸ್ಯೆಗೆ ಪರಿಹಾರ ಕಲ್ಪಿಸದಿದ್ದರೆ ಉಗ್ರ ಹೋರಾಟ ನಡೆಸಲಾಗುವುದೆಂದು ಎಚ್ಚರಿಸಿದ್ದರು.

ರೈತ ಸಂಘದ ಜಿಲ್ಲಾಧ್ಯಕ್ಷ ಬಾಬು ಮಾತನಾಡಿ ಈ ಭಾಗದಲ್ಲಿ ಅಕ್ರಮ ಗಣಿಗಾರಿಕೆಯಿಂದಾಗಿ ಹಲವಾರು ಮನೆಗಳಿಗೆ ಹಾನಿ ಉಂಟಾಗಿದೆ. ಕಾಡು ಪ್ರಾಣಿಗಳು ಸ್ಫೋಟಕಗಳ ಶಬ್ದಕ್ಕೆ ಹೆದರಿ ಗ್ರಾಮಗಳಿಗೆ ನುಗ್ಗುತ್ತಿವೆ. ಇಲ್ಲಿಯ ಗಣಿಗಾರಿಕೆಯನ್ನು ನಿಲ್ಲಿಸಬೇಕೆಂದು ಒತಾಯಿಸಿ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಹಾಗಾಗಿ ನಾವು ಹೋರಾಟದ ಹಾದಿ ಹಿಡಿಯಬೇಕಾಗಿದೆ. ರೈತ ಸಂಘದ ಅಧ್ಯಕ್ಷರು ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಶೀಘ್ರ ಸಂಬಂಧಪಟ್ಟ ಸಚಿವರನ್ನು ಭೇಟಿ ಮಾಡಿ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ಸೂಚಿಸುವುದಾಗಿ ತಿಳಿಸಿದ್ದಾರೆ. ಸಂಬಂಧಪಟ್ಟ ಸಚಿವರುಗಳು ಏನು ಕ್ರಮ ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡುತ್ತೇವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ರೈತ ಸಂಘದ ರಾಜ್ಯ ಸಂಚಾಲಕ ಮಹಮ್ಮದ್ ಸಾಧಿಕ್, ಕರವೇ ಜಿಲ್ಲಾ ಉಪಾಧ್ಯಕ್ಷ ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಅರುಣ ಭಾಸ್ಕರ್, ಆಲೂರು ತಾಲೂಕು ಅಧ್ಯಕ್ಷ ರಾಘವೇಂದ್ರ, ಸಕಲೇಶಪುರ ತಾಲೂಕು ಅಧ್ಯಕ್ಷ ರಮೇಶ್ ಪೂಜಾರಿ, ದುದ್ದ ರೇವಣ್ಣ, ಸತೀಶ್ ದುದ್ದ, ಮಂಜೇಗೌಡ,ಸಂಜು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net