

ಕೊಟ್ಟೂರು: ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಸ್ಥಿರವಾಗಿದ್ದು, ಯಾವುದೇ ಭಿನ್ನಾಭಿಪ್ರಾಯವಿಲ್ಲ. ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಡೆಸಿರುವ ಜನಾಕ್ರೋಶ ಹೋರಾಟದಲ್ಲಿ ಜೆಡಿಎಸ್ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ಶಾಸಕ ನೇಮಿರಾಜ್ ನಾಯ್ಕ ತಿಳಿಸಿದರು.
ಪಟ್ಟಣದಲ್ಲಿ ಕೆ.ಕೆ.ಆರ್.ಡಿ.ಬಿ. ಮತ್ತು ಇತರ ಅನುದಾನದಲ್ಲಿ 8, 10, 12, 16ನೇ ವಾರ್ಡ್‌ನಲ್ಲಿ ಸುಮಾರು 132.52 ಕೋಟಿ ರೂ. ವೆಚ್ಚದಲ್ಲಿ ಸಿ.ಸಿ.ರಸ್ತೆ, ಚರಂಡಿ ನಿರ್ಮಾಣ ಹಾಗೂ ಇತರ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಂಗಳವಾರ ಮಾತನಾಡಿದರು. ಪಟ್ಟಣದಲ್ಲಿ ಕುಡಿಯುವ ನೀರು, ರಸ್ತೆ, ಚರಂಡಿ ಸೇರಿದಂತೆ ಇತರ ಮೂಲ ಸೌಲಭ್ಯ ಕಲ್ಪಿಸಲಾಗುವುದು ಎಂದು ತಿಳಿಸಿದರು.
ತೇರು ಬೀದಿಯಲ್ಲಿ ಸಿ.ಸಿ. ರಸ್ತೆ ನಿರ್ಮಾಣಕ್ಕೆ ಸಾರ್ವಜನಿಕರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಕಾಮಗಾರಿ ಕೈಬಿಡಲಾಗಿದೆ. ಸರ್ಕಾರಿ ಬಸ್ ನಿಲ್ದಾಣವನ್ನು ತೆರವುಗೊಳಿಸಿ ಅದೇ ಸ್ಥಳದಲ್ಲಿ ಹೈಟೆಕ್ ಬಸ್ ನಿಲ್ದಾಣ ನಿರ್ಮಿಸಲಾಗುವುದು. ಬಸ್ ಡಿಪೋ ಮತ್ತು ಸುಸಜ್ಜಿತ ಬಸ್ ನಿಲ್ದಾಣ ನಿರ್ಮಿಸಲು ಮೂರು ಎಕರೆ ಜಮೀನು ಬೇಕಾಗಿದ್ದು, ಪರಿಶೀಲನೆ ಮಾಡಲಾಗುತ್ತಿದೆ ಎಂದು ಶಾಸಕ ತಿಳಿಸಿದರು.
ಜಿಪಂ ಮಾಜಿ ಸದಸ್ಯ ಎಂ.ಎಂ.ಜೆ. ಹರ್ಷವರ್ಧನ, ಜೆಡಿಎಸ್ ಕ್ಷೇತ್ರ ಅಧ್ಯಕ್ಷ ಮಲ್ಲಿಕಾರ್ಜುನ, ಪಪಂ ಮಾಜಿ ಸದಸ್ಯ ಸುಧಾಕರ ಪಾಟೀಲ್, ಡಿಶ್ ಮಂಜುನಾಥ್, ಪಪಂ ಸದಸ್ಯ ಬಾವಿಕಟ್ಟಿ ಶಿವಾನಂದ, ಜೆಡಿಎಸ್ ಮುಖಂಡ. ಎಂ.ಎಂ.ಜೆ. ಶೋಭಿತ್, ಹರಾಳು ಬಸವನಗೌಡ, ವಕೀಲ ಎ.ಮರುಳಸಿದ್ದಪ್ಪ, ವಾಲ್ಮೀಕಿ ಸಮುದಾಯದ ಪ್ರಮುಖ ಪಕ್ಕೀರಪ್ಪ ಇತರರಿದ್ದರು.