ಜಮೀನಿನಲ್ಲಿ ಕಸ ವಿಲೇವಾರಿ ಘಟಕ ಸ್ಥಾಪನೆ ಬೇಡ

05-GPT-3
Published on

ಗುಂಡ್ಲುಪೇಟೆ: ಜಮೀನಿನಲ್ಲಿ ಕಸ ವಿಲೇವಾರಿ ಘಟಕ ಸ್ಥಾಪನೆ ಮಾಡುವುದನ್ನು ವಿರೋಧಿಸಿ ರೈತ ಸಂಘದ ಕಾರ್ಯಕರ್ತರು ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.


ಪಟ್ಟಣದ ಪ್ರವಾಸಿ ಮಂದಿರದಿಂದ ಹೊರಟ ಪ್ರತಿಭಟನಾಕಾರರು, ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗಿ ಸಾರಿಗೆ ಬಸ್ ನಿಲ್ದಾಣದ ಎದುರು ರಸ್ತೆಯಲ್ಲಿ ಕುಳಿತು ವಾಹನಗಳ ಸಂಚಾರಕ್ಕೆ ತಡೆಯೊಡ್ಡುವ ಮೂಲಕ ಜಿಲ್ಲಾಡಳಿತ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಂತರ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿ ನ್ಯಾಯದೊರಕಿಸುವಂತೆ ಒತ್ತಾಯಿಸಿ ಘೋಷಣೆ ಕೂಗಿದರು.


ರೈತ ಸಂಘದ ತಾಲೂಕು ಅಧ್ಯಕ್ಷ ಹಂಗಳ ದಿಲೀಪ್ ಮಾತನಾಡಿ, ನಿಟ್ರೆ ಗ್ರಾಮದ ಮಹದೇವೇಗೌಡ ಎಂಬುವರು 30 ವರ್ಷದಿಂದ ಸರ್ಕಾರಿ ಜಮೀನು ಉಳುಮೆ ಮಾಡುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ಸಾಗುವಳಿ ಪತ್ರ ನೀಡುವಂತೆ ಅರ್ಜಿ ಸಲ್ಲಿಸಿದ್ದಾರೆ. ಇವರ ಜಮೀನಿನ ಸರ್ವೇ ಮಾಡಿ ಹೋದ ಅಧಿಕಾರಿಗಳು ಸಾಗುವಳಿ ಪತ್ರ ನೀಡುವ ಬದಲು 2019ರಲ್ಲಿ 20 ಗುಂಟೆ ಪ್ರದೇಶದಲ್ಲಿ ಕಸವಿಲೇವಾರಿ ಘಟಕ ಮಾಡಲು ಮುಂದಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.


ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ್ ಶ್ರೀಶೈಲ ಯಮನಪ್ಪ ತಳವಾರ್, ಈ ಸಂಬಂಧ ಜಿಲ್ಲಾಧಿಕಾರಿ ಗಮನಕ್ಕೆ ತರುವುದಾಗಿ ಭರವಸೆ ನೀಡಿದರು. ಇದಕ್ಕೆ ಒಪ್ಪದ ರೈತ ಸಂಘದ ಕಾರ್ಯಕರ್ತರು ರೈತನಿಗೆ ಸೂಕ್ತ ಪ್ರಾಯ ದೊರಕುವರೆಗೂ ಅಹೋ ರಾತ್ರಿ ಧರಣಿ ನಡೆಸುವುದಾಗಿ ಪಟ್ಟು ಹಿಡಿದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net