ಜಯ ಕರ್ನಾಟಕ ಸಂಘಟನೆಯಿಂದ ಪ್ರತಿಭಟನೆ

19blrp3
Published on

ಬೇಲೂರು: ಸಮೀಪದ ಕಳಸಿನಕೆರೆ ಏರಿ ರಸ್ತೆಯಲ್ಲಿನ ಗುಂಡಿಗಳನ್ನು ಮುಚ್ಚುವಂತೆ ಆಗ್ರಹಿಸಿ ಜಯ ಕರ್ನಾಟಕ ಸಂಘಟನೆ ಪದಾಧಿಕಾರಿಗಳು ಸೋಮವಾರ ಗುಂಡಿಯಲ್ಲಿ ಗಿಡಗಳನ್ನು ನೆಟ್ಟು ಪ್ರತಿಭಟನೆ ನಡೆಸಿದರು.


ಸಂಘಟನೆಯ ಜಿಲ್ಲಾಧ್ಯಕ್ಷ ಎಂ.ಕೆ.ಆರ್.ಸೋಮೇಶ್ ಮಾತನಾಡಿ, ಕಳೆದ 3 ತಿಂಗಳಿಂದ ಸುರಿದ ಭಾರಿ ಮಳೆಯಿಂದ ತಾಲೂಕಿನ ಸಾಕಷ್ಟು ರಸ್ತೆಗಳು ಗುಂಡಿಮಯವಾಗಿವೆ. ಮುಖ್ಯವಾಗಿ ಬೇಲೂರಿನಿಂದ ಗೆಂಡೇಹಳ್ಳಿಗೆ ತೆರಳುವ ಕಳಸಿನ ಕೆರೆ ಏರಿ ರಸ್ತೆಯಂತೂ ಹೆಜ್ಜೆ ಹೆಜ್ಜೆಗೂ ಗುಂಡಿ ಬಿದ್ದಿದ್ದು, ದ್ವಿಚಕ್ರ ವಾಹನಗಳ ಸವಾರರು ಆಯ ತಪ್ಪಿ ಬಿದ್ದು ಗಾಯಗೊಂಡಿದ್ದಾರೆ. ಹೀಗಾಗಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ತಕ್ಷಣವೇ ಗುಂಡಿಗಳನ್ನು ಮುಚ್ಚಿ ದುರಸ್ತಿಪಡಿಸಬೇಕು ಎಂದು ಒತ್ತಾಯಿಸಿದರು.


ತಾಲೂಕು ಯುವ ಘಟಕದ ಉಪಾಧ್ಯಕ್ಷ ಹೇಮಂತ್ ಕುಮಾರ್ ಮಾತನಾಡಿ, ತಾಲೂಕಿನ ಬಹುತೇಕ ರಸ್ತೆಗಳು ಗುಂಡಿ ಬಿದ್ದು ಸಂಪೂರ್ಣ ಹಾಳಾಗಿವೆ. ಆದ್ದರಿಂದ ತಾತ್ಕಾಲಿಕವಾಗಿ ಗುಂಡಿಗಳನ್ನು ಮುಚ್ಚಿಸಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮವಹಿಸಬೇಕು. ಶಾಸಕರು ಹೆಚ್ಚಿನ ಅನುದಾನ ತಂದು ರಸ್ತೆ ಡಾಂಬರೀಕರಣಕ್ಕೆ ಕ್ರಮವಹಿಸಬೇಕು ಎಂದು ಆಗ್ರಹಿಸಿದರು.


ಪ್ರತಿಭಟನೆಯಲ್ಲಿ ತಾಲೂಕು ಉಪಾಧ್ಯಕ್ಷ ಗುರುರಾಜ್, ಮುಖಂಡರಾದ ಚರಣ್, ಗಿರೀಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net