

ಬಾಗಲಕೋಟೆ: ಬಾಲ್ಯವಿವಾಹ ನಿಷೇಧ ಕಾಯ್ದೆ, ಮಾದಕ ವಸ್ತುಗಳ ನಿರ್ಮೂಲನೆ ಯೋಜನೆ ಹಾಗೂ ಮಾನವ ಕಳ್ಳ ಸಾಗಾಣಿಕೆ ತಡೆ ಕುರಿತ ಜಾಗೃತಿ ಜಾಥಾಕ್ಕೆ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ವಿಜಯ ನೇರಳೆ ಚಾಲನೆ ನೀಡಿದರು.
ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಪೊಲೀಸ್ ಇಲಾಖೆ, ವಕೀಲರ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡ ಜಾಗೃತಿ ಜಾಥಾ ವಿದ್ಯಾಗಿರಿಯ ಇಂಡಿಪೆಂಡೆಂಟ್ ಪಿಯು ಕಾಲೇಜಿನಿಂದ ಪ್ರಾರಂಭಗೊಂಡು ಕಾಳಿದಾಸ ಸರ್ಕಲ್, ಕೇಂದ್ರೀಯ ವಿದ್ಯಾಲಯದ ಮಾರ್ಗವಾಗಿ ಮರಳಿ ಇಂಡಿಪೆಂಡೆಂಟ್ ಕಾಲೇಜಿಗೆ ಮುಕ್ತಾಯಗೊಂಡಿತು.
ಜಾಥಾದಲ್ಲಿ 600ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದು, ಜಾಥಾದೂದ್ದಕ್ಕೂ ಘೋಷಣೆಗಳನ್ನು ಕೂಗಿದರು. ಜಾಥಾದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದ್ಯಾವಪ್ಪ ಎಸ್.ಬಿ, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಸನ್ನ ದೇಸಾಯಿ, ಬಿವಿವಿಎಸ್ ಪಿಯು ಕಾಲೇಜಿನ ಪ್ರಾಚಾರ್ಯ ಎಸ್.ಎಚ್.ವಟವಟಿ, ಬಸವೇಶ್ವರ ಪದವಿ ಕಾಲೇಜಿನ ಪ್ರಾಚಾರ್ಯ ಕೋರಿಶೇಟ್ಟರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದಸ್ತಗಿರಿಸಾಬ ಮುಲ್ಲಾ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ರಾಮು ಅಗ್ನಿ ಸೇರಿದಂತೆ ಇತರರು ಪಾಲ್ಗೊಂಡಿದ್ದರು.