

ಹುಕ್ಕೇರಿ: ಗ್ರಾಮೀಣ ಪ್ರದೇಶದ ರೈತರಿಗೆ ಹಾಗೂ ಜನರಿಗೆ ಬೇಸಿಗೆ ಸಮಯ ಬಿಡುವಾಗಿರುವುದರಿಂದ ವರ್ಷವಿಡಿ ದುಡಿಯುವ ಕೈಗಳಿಗೆ ಮುಂಬರುವ ಮಳೆ-ಬೆಳೆ ಚೆನ್ನಾಗಿ ಬರಲಿ ಎಂದು ದೇವರಲ್ಲಿ ಪ್ರಾರ್ಥಿಸಲು ಜಾತ್ರಾ ಮಹೋತ್ಸವ ಹಮ್ಮಿಕೊಳ್ಳಲಾಗುತ್ತದೆ ಎಂದು ಮಾಜಿ ಸಂಸದ ರಮೇಶ ಕತ್ತಿ ಹೇಳಿದರು.
ತಾಲೂಕಿನ ಯಾದಗೂಡ ಗ್ರಾಮದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಗ್ರಾಮದೇವತೆ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವದಲ್ಲಿ ಮಾತನಾಡಿ, ಜಾತ್ರೆಯಲ್ಲಿ ಪಾಲ್ಗೊಳ್ಳುವುದರಿಂದ ಜಾತ್ಯತೀತ ಮನೋಭಾವ ಬೆಳೆಯುತ್ತದೆ ಎಂದರು. ದೇವಿ ಹೊನ್ನಾಟ ಸಹಿತ ಸೀಮೆಗೆ ತೆರಳುವ ಮೂಲಕ ಜಾತ್ರೆ ಸಂಪನ್ನಗೊಂಡಿತು.
ಮಾಜಿ ಸಚಿವ ಎ.ಬಿ.ಪಾಟೀಲ, ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಹುಲ ಜಾರಕಿಹೊಳಿ, ಮಹೋತ್ಸವ ಸಮಿತಿ ಅಧ್ಯಕ್ಷ ಶಿವಾನಂದ ಜನಮಟ್ಟಿ, ಉಪಾಧ್ಯಕ್ಷ ರಮೇಶ ಜನಮಟ್ಟಿ, ಗ್ರಾಪಂ ಅಧ್ಯಕ್ಷೆ ಶ್ರೀದೇವಿ ಲೈನದಾರ ಇತರರಿದ್ದರು.