ಜಿಲ್ಲಾ ಮಟ್ಟದ ದೂರದೃಷ್ಟಿ ಮತ್ತು ಕ್ರೀಯಾ ಯೋಜನೆ ಕಾರ್ಯಾಗಾರ

bkt-22-1
Published on

ಬಾಗಲಕೋಟೆ:  ಜಿಲ್ಲೆಯ ಗ್ರಾಮೀಣ ಭಾಗದ ಜನರಿಗೆ ದಿನ 24 ಗಂಟೆಗಳ ಕುಡಿಯುವ ನೀರು ಸರಬರಾಜು ಕುರಿತು ಇಂಜಿನೀಯರ್ ಮತ್ತು ಪಂಚಾಯತ ರಾಜ್ ಅಭಿವೃದ್ದಿ ಅಧಿಕಾರಿಗಳಿಗೆ ಹಮ್ಮಿಕೊಂಡ ಒಂದು ದಿನದ ತರಬೇತಿ ಕಾರ್ಯಾಗಾರಕ್ಕೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಚಾಲನೆ ನೀಡಿದರು.

ಜಿಲ್ಲಾ ಪಂಚಾಯತ ನೂತನ ಸಭಾಭವನದಲ್ಲಿ ಮಂಗಳವಾರ ಜಿಲ್ಲಾ ಪಂಚಾಯತ ಮತ್ತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಸಹಯೋಗದಲ್ಲಿ ಹಮ್ಮಿಕೊಂಡ ಒಂದು ದಿನದ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು ಗ್ರಾಮೀಣ ಭಾಗದಲ್ಲಿ ದಿನ 24 ಗಂಟೆಗಳ ನೀರು ಸರಬರಾಜು ಯೋಜನೆ ಸಮರ್ಪಕ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಾಗಾರದ ಸದುಪಯೋಗವನ್ನು ಪಡೆದುಕೊಂಡು ತಮ್ಮ ವ್ಯಾಪ್ತಿಯಲ್ಲಿ ಯೋಜನೆ ಅನುಷ್ಠಾನಕ್ಕೆ ಶ್ರಮಿಸಬೇಕು ಎಂದರು.

ಜಿಲ್ಲೆಯಲ್ಲಿ 195 ಗ್ರಾಮ ಪಂಚಾಯತಿಗಳು ಇದ್ದು, ಈಗಾಗಲೇ ಮುಧೋಳ ತಾಲೂಕಿನ ಹಲಗಲಿ ಗ್ರಾಮದಲ್ಲಿ ಜಲಜೀವನ ಮಿಷನ್ ಯೋಜನೆಯಡಿ ಸಮರ್ಪಕ ನೀರು ಪೂರೈಕೆ ನಿರ್ವಹಣೆಯಲ್ಲಿ ಯಶಸ್ವಿಯಾಗಿದೆ. ಇದೇ ರೀತಿ ಉಳಿದ ಎಲ್ಲ ಪಂಚಾಯತಿ ವ್ಯಾಪ್ತಿಯಲ್ಲಿ ನೀರು ಪೂರೈಕೆಯ ನಿರ್ವಹಿಣೆಯಲ್ಲಿ ಯಶಸ್ವಿಯಾಗುವ ನಿಟ್ಟಿನಲ್ಲಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದ್ದು, ಕಡಿಮೆ, ಮಿತ, ಸುಸ್ಥಿತ ಬಳಕೆ ಆಗಬೇಕಿದೆ. ಗುಣಮಟ್ಟದ ನೀರು ಪೂರೈಕೆಯಾಗಬೇಕು. ನಿಗದಿತ ಪ್ರಮಾಣದಲ್ಲಿ ತಂಡದ ರೂಪದಲ್ಲಿ ಸ್ಥಳೀಯ ಜನಪ್ರತಿನಿಧಿಗಳ ಸಲಹೆ ಪಡೆದುಕೊಂಡು ಯೋಜನೆ ಯಶಸ್ವಿಗೊಳಿಸಲು ಮುಂದಾಗಬೇಕು ಎಂದರು.

ಬೆಂಗಳೂರಿನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಉಪ ಕಾರ್ಯದರ್ಶಿ ಜಾಫರ ಸುತಾರ ಮಾತನಾಡಿ ಸರಕಾರ ಕುಡಿಯುವ ನೀರಿನ ಯೋಜನೆಗೆ ಸಾಕಷ್ಟು ಹಣ ಖರ್ಚು ಮಾಡುತ್ತಿದೆ. ಗ್ರಾಮೀಣ ಭಾಗದಲ್ಲಿಯೂ ಸಹ ದಿನ 24 ಗಂಟೆಗಳ ಕಾಲ ನೀರು ಪೂರೈಸುವ ಯೋಜನೆ ಸರಕಾರ ಯೋಜನೆ ರೂಪಿಸಿದೆ. ಈ ಯೋಜನೆ ಯಶಸ್ವಿಗೊಳಿಸಲು ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಗ್ರಾಮೀಣ ಭಾಗದಲ್ಲಿ ದಿನದ 24 ಗಂಟೆಗಳ ನೀರು ಸರಬರಾಜು ಮಾಡುವದರಿಂದ ನೀರು ಪೋಲಾಗುವದನ್ನು ತಡೆಯಬಹುದಾಗಿದೆ. ಕರ್ನಾಟಕ ಸುಸ್ಥಿರ ಗ್ರಾಮೀಣ ನೀರು ಸರಬರಾಜು ಕಾರ್ಯಕ್ರಮವು ರಾಜ್ಯದಲ್ಲಿ ಸುರಕ್ಷಿತ ಸುಸ್ಥಿರ ಕುಡಿಯುವ ನೀರಿನ ಲಭ್ಯತೆ ಹಾಗೂ ಗ್ರಾಮೀಣ ಕುಡಿಯುವ ನೀರು ಸರಬರಾಜು ಮಾಡುವ ವಿವಿಧ ಹಂತದ ಸಂಸ್ಥೆಗಳನ್ನು ಬಲಪಡಿಸುವ ಉದ್ದೇಶ ಹೊಂದಿದೆ. ಈ ಕಾರ್ಯಕ್ರಮ ರಾಜ್ಯದ ಎಲ್ಲ ಜಿಲ್ಲೆಗಳ ಗ್ರಾಮೀಣ ಪ್ರದೇಶಗಳಲ್ಲಿ ಐದು ವರ್ಷದ ಅವಧಿಯಲ್ಲಿ ಅನುಷ್ಠಾನ ಮಾಡಲು ಉದ್ದೇಶ ಹೊಂದಲಾಗಿದೆ ಎಂದು ತಿಳಿಸಿದರು.

ಸಂಪನ್ಮೂಲ ವ್ಯಕ್ತಿಗಳಾದ ಅಜಯ ಸಿನ್ಹಾ ಅವರು ಕರ್ನಾಟಕ ಸುಸ್ಥಿರ ಗ್ರಾಮೀಣ ನೀರು ಸರಬರಾಜು ಕಾರ್ಯಕ್ರಮ ಕುರಿತು ವಿವರವಾಗಿ ತರಬೇತಿಯಲ್ಲಿ ತಿಳಿಸಿಕೊಟ್ಟರು. ಪ್ರಾರಂಭದಲ್ಲಿ ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರ ಆಕಾಶ ಎಲ್ಲರನ್ನು ಸ್ವಾಗತಿಸಿದರು. ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ರವಿಕಿರಣ ಡಂಬಳ ವಂದಿಸಿದರು. ಕಾರ್ಯಾಗಾರದಲ್ಲಿ ಗ್ರಾಮ ಪಂಚಾಯತ ಅಭಿವೃದ್ದಿ ಅಧಿಕಾರಿಗಳು, ಕಾರ್ಯನಿರ್ವಾಹಕ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net