ಜಿಲ್ಲಾ ಯುವ ಉತ್ಸವ 19ರಂದು

CTD 15 ADC MEETING-03
Published on

ಚಿತ್ರದುರ್ಗ: ನೆಹರು ಯುವ ಕೇಂದ್ರ ನಗರದ ಸರ್ಕಾರಿ ವಿಜ್ಞಾನ ಕಾಲೇಜು ಹೊಸ ಕಟ್ಟಡ ಆವರಣದಲ್ಲಿ ಜೂ.19ರ ಬೆಳಗ್ಗೆ 10ಕ್ಕೆ ಜಿಲ್ಲಾ ಯುವ ಉತ್ಸವ ಆಯೋಜಿಸಲಾಗಿದೆ ಎಂದು ಎಡಿಸಿ ಟಿ.ಜವರೇಗೌಡ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಏರ್ಪಡಿಸಿದ್ದ ಉತ್ಸವದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಮಾರೋಪ ಸಮಾರಂಭದ ಅಂಗವಾಗಿ, ಯುವ ಜನರ ಪ್ರತಿಭೆಗಳನ್ನು ಪ್ರದರ್ಶಿಸಲು ಹಾಗೂ ಕೇಂದ್ರ, ರಾಜ್ಯ ಸರ್ಕಾರದ ವಿವಿಧ ಯೋಜನೆಗಳು ಹಾಗೂ ಸಾಧನೆಗಳೆಡೆ ಜಾಗೃತಿ ಮೂಡಿಸಲು ಉತ್ಸವ ಹಮ್ಮಿಕೊಳ್ಳಲಾಗಿದೆ ಎಂದರು.

ಈ ಕಾರ‌್ಯಕ್ರಮವನ್ನು ಅರ್ಥಪೂರ್ಣಗೊಳಿಸ ಬೇಕು. ವಿವಿಧ ಪ್ರದರ್ಶನ ಮಳಿಗೆಗಳನ್ನು ತೆರೆಯಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಸಿದ್ಧತೆ ಕೈಗೊಳ್ಳಬೇಕು ಎಂದು ಸೂಚಿಸಿದರು.

ನೆಹರು ಯುವ ಕೇಂದ್ರದ ಜಿಲ್ಲಾ ಯುವಜನ ಸಮನ್ವಯಾಧಿಕಾರಿ ಎನ್.ಸುಹಾಸ್ ಮಾತನಾಡಿ, ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ನಡೆಯುವ ಈ ಉತ್ಸವದ ಅಂಗವಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗುವುದು ಎಂದರು.

ಬರಹ, ಚಿತ್ರಕಲೆ, ಮೊಬೈಲ್ ಛಾಯಾಚಿತ್ರ, ಭಾಷಣ, ಜಾನಪದ ನೃತ್ಯ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ಇರಲಿವೆ. ವಿಜೇತರಿಗೆ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ವಿತರಿಸಲಾಗುವುದು. 15-29 ವರ್ಷ ವಯಸ್ಸಿನ ಯುವ ಜನರು ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ ಎಂದು ಹೇಳಿದರು.

ಜಿಪಂ ಸಿಎಒ ಡಿ.ಆರ್.ಮಧು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ್, ಪಪೂ ಶಿಕ್ಷಣ ಇಲಾಖೆ ಉಪನಿರ್ದೇಶಕ ಎನ್.ರಾಜು, ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿ ಕೆ.ಗೋಪಾಲರೆಡ್ಡಿ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹರೀಶ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net