ಜಿಲ್ಲಾ ಯುವಜನೋತ್ಸವಕ್ಕೆ ಸಕಲ ಸಿದ್ಧತೆ ಕೈಗೊಳ್ಳಿ

oplus_136314880
oplus_136314880
Published on

ಚಾಮರಾಜನಗರ: ಜಿಲ್ಲೆಯ ಕಲೆ, ಸಂಸ್ಕೃತಿ, ಕ್ರೀಡಾ ಕೌಶಲ್ಯ, ಕಥೆ, ಕವನ, ಚಿತ್ರಕಲೆ ಚಟುವಟಿಕೆಗಳನ್ನು ಯುವಜನರಲ್ಲಿ ಉತ್ತೇಜಿಸುವ ಸಲುವಾಗಿ ಅ.16ರಂದು ನಗರದಲ್ಲಿ ಜಿಲ್ಲಾ ಯುವಜನೋತ್ಸವವನ್ನು ಆಯೋಜಿಸಲಾಗಿದ್ದು, ಇದಕ್ಕಾಗಿ ಸಕಲ ಸಿದ್ದತೆಗಳನ್ನು ಕೈಗೊಳ್ಳುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಾಷ್ಟ್ರೀಯ ಯುವನೀತಿಯಡಿ ಯುವಜನರಲ್ಲಿರುವ ಕಲೆ, ಕ್ರೀಡಾ ಕೌಶಲ್ಯವನ್ನು ಪ್ರೋತ್ಸಾಹಿಸುವ ಸಲುವಾಗಿ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗುತ್ತಿದ್ದು, ಇದೇ ಉದ್ದೇಶದಿಂದ ಜಿಲ್ಲಾ ಮಟ್ಟದಲ್ಲಿಯೂ ನಿಗದಿಯಾಗಿರುವ ಯುವಜನೋತ್ಸವಕ್ಕೆ ಎಲ್ಲ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ಮಾಡುವಂತೆ ತಿಳಿಸಿದರು.

ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಯುವಜನೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ವಿವಿಧ ಸ್ಪರ್ಧೆಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಲು ಸೂಕ್ತ ಪ್ರಚಾರ ವ್ಯವಸ್ಥೆ ಕೈಗೊಳ್ಳಬೇಕು. ಯುವಜನೋತ್ಸವ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ನಗದು ಬಹುಮಾನ, ಪ್ರಶಸ್ತಿ ಪತ್ರ, ವಿಜಯ ಫಲಕಗಳನ್ನು ನೀಡಲಾಗುತ್ತದೆ. ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಸ್ಪರ್ಧಿಗಳಿಗೆ ಯಾದಗಿರಿ ಜಿಲ್ಲೆಯಲ್ಲಿ ನಡೆಯುವ ರಾಜ್ಯಮಟ್ಟದ ಯುವಜನೋತ್ಸವ ಸ್ಪರ್ಧೆಗೆ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಕಳುಹಿಸಿಕೊಡಲಾಗುತ್ತದೆ. ರಾಜ್ಯಮಟ್ಟದಲ್ಲಿ ವಿಜೇತರಾದವರು ರಾಷ್ಟ್ರಮಟ್ಟಕ್ಕೆ ಅರ್ಹತೆ ಹೊಂದಲಿದ್ದಾರೆ ಎಂದರು.

ಯುವಜನೋತ್ಸವ ಸ್ಪರ್ಧೆಗಳಲ್ಲಿ 15 ರಿಂದ 29ರವರೆಗೆ ವಯೋಮಿತಿಯಲ್ಲಿರುವ ಜಿಲ್ಲೆಯ ಎಲ್ಲಾ ಯುವಕ ಯುವತಿಯರು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ಶಾಲಾ-ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಭಾಗವಹಿಸಲು ಅವಕಾಶವಿರುತ್ತದೆ. ಈ ಯುವಜನೋತ್ಸವವನ್ನು ಸದುಪಯೋಗಪಡಿಸಿಕೊಳ್ಳಲು ವ್ಯಾಪಕವಾಗಿ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.

ಜಿಲ್ಲಾಮಟ್ಟದ ಯುವಜನೋತ್ಸವದಲ್ಲಿ ಭಾಗವಹಿಸುವವರಿಗೆ ಉಪಹಾರ, ಕುಡಿಯುವ ನೀರು, ಇನ್ನಿತರ ಸೌಲಭ್ಯಗಳನ್ನು ಸಮರ್ಪಕವಾಗಿ ಕಲ್ಪಿಸಬೇಕು. ಸ್ವಚ್ಚತಾ ವ್ಯವಸ್ಥೆ, ಇನ್ನಿತರ ಸಹಕಾರವನ್ನು ಇತರೆ ಇಲಾಖೆಗಳು ನೀಡಬೇಕು ಎಂದು ನಿರ್ದೇಶನ ನೀಡಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೆಶಕ ಕೆ. ಸುರೇಶ್ ಮಾತನಾಡಿ, ಮೇರಾ ಯುವ ಭಾರತ್, ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದೊಂದಿಗೆ ಜಿಲ್ಲಾ ಮಟ್ಟದ ಯುವಜನೋತ್ಸವಕ್ಕೆ ಈಗಾಗಲೇ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ. ಯುವಜನೋತ್ಸವ ಯಶಸ್ವಿಗೆ ವಿವಿಧ ಇಲಾಖೆಗಳ ಸಹಕಾರ ಅಗತ್ಯವಿದೆ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಹಾಯಕ ಯೋಜನಾಧಿಕಾರಿ ಶ್ರೀಕಂಠರಾಜೇ ಅರಸ್, ಮೇರಾ ಯುವಭಾರತ್ ಜಿಲ್ಲಾ ಯುವಜನ ಅಧಿಕಾರಿ ಪಿ.ಅಖಿಲ್, ಸಾಹಿತಿ ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆಯ ನಿವೃತ್ತ ಉಪನಿರ್ದೇಶಕ ಮಂಜುನಾಥ ಪ್ರಸನ್ನ, ಕಲಾವಿದರಾದ ಮಧುಸೂದನ್, ಯುವ ಪ್ರಶಸ್ತಿ ಪುರಸ್ಕೃತ ಜಿ. ಬಂಗಾರು ಹಾಗೂ ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net