

ಚಿಕ್ಕಮಗಳೂರು: ನ. ೧ರಂದು ಜಿಲ್ಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ಆಕರ್ಷಕÀವಾಗಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸುವ ಸಂಬAಧ ಕರೆಯಲಾಗಿದ್ದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ನ. ೧ರಂದು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಗರದ ಸುಭಾಶ್ಚಂದ್ರ ಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ನಡೆಯಲಿದೆ. ಅಂದು ಬೆಳಗ್ಗೆ ೯ ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ರಾಷ್ಟç ಧ್ವಜಾರೋಹಣ ನೆರವೇರಿಸಿ ರಾಜ್ಯೋತ್ಸವ ಸಂದೇಶ ನೀಡಲಿದ್ದಾರೆ. ಸಮಾರಂಭದಲ್ಲಿ ಪೊಲೀಸ್, ಅಬಕಾರಿ, ಅರಣ್ಯ, ಗೃಹರಕ್ಷಕದಳ, ಎನ್‌ಸಿಸಿ, ಸ್ಕೌಟ್ ಮತ್ತು ಗೈಡ್ಸ್, ಸೇವಾದಳ ಹಾಗೂ ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಪಥ ಸಂಚಲನ ನಡೆಯಲಿದೆ. ಜೊತೆಗೆ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದರು.
ಅAದು ಬೆಳಗ್ಗೆ ೭.೩೦ಕ್ಕೆ ನಗರದ ತಹಸೀಲ್ದಾರ್ ಕಚೇರಿ ಆವರಣದಿಂದ ಎಂ.ಜಿ. ರಸ್ತೆ ಮೂಲಕ ಸುಭಾಶ್ಚಂದ್ರ ಬೋಸ್ ಜಿಲ್ಲಾ ಆಟದ ಮೈದಾನದವರೆಗೆ ಸ್ತಬ್ಧ ಚಿತ್ರಗಳ ಮೆರವಣಿಗೆ ನಡೆಯಲಿದೆ. ಮೆರವಣಿಗೆಯಲ್ಲಿ ನಾಡಿನ ಸಾಂಸ್ಕೃತಿಕ ಹಾಗೂ ಚಾರಿತ್ರಿಕ ಹಿನ್ನೆಲೆಯುಳ್ಳ ಸ್ತಬ್ಧ ಚಿತ್ರಗಳನ್ನು ವಿದ್ಯಾರ್ಥಿಗಳಿಂದ ತಯಾರಿಸಿ ಮೆರವಣಿಗೆಯಲ್ಲಿ ಭಾಗವಹಿಸುವಂತೆ ಹಾಗೂ ವಿವಿಧ ಇಲಾಖೆಗಳಿಂದ ಆಯಾ ಇಲಾಖೆಗಳ ಯೋಜನೆಗಳನ್ನು ಬಿಂಬಿಸುವ ಸ್ತಬ್ಧ ಚಿತ್ರಗಳನ್ನು ಇಲಾಖಾ ವತಿಯಿಂದ ತಯಾರಿಸಿ ಮೆರವಣಿಗೆಯಲ್ಲಿ ಭಾಗವಹಿಸುವಂತೆ ಸಂಬAಧಿಸಿದ ಇಲಾಖಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಅಂದು ಸಂಜೆ ೬ ಗಂಟೆಗೆ ನಗರದ ಕುವೆಂಪು ಕಲಾಮಂದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ರಾಜ್ಯೋತ್ಸವ ದಿನದಂದು ನಗರದಾದ್ಯಂತ ಹಬ್ಬದ ವಾತಾವರಣವನ್ನು ಸೃಜಿಸುವ ನಿಟ್ಟಿನಲ್ಲಿ ಎಲ್ಲ ಸರ್ಕಾರಿ ಕಟ್ಟಡಗಳ ಮೇಲೆ ದೀಪಾಲಂಕಾರವನ್ನು ಆಯಾ ಇಲಾಖಾಧಿಕಾರಿಗಳು ಸ್ವಯಂಪ್ರೇರಿತವಾಗಿ ಕಚೇರಿಯಿಂದಲೇ ಮಾಡಬೇಕು. ಖಾಸಗಿ ಕಟ್ಟಡಗಳು, ಅಂಗಡಿ ಮುಂಗಟ್ಟುಗಳಲ್ಲಿಯೂ ಸಹ ಅಭಿಮಾನಪೂರ್ವಕವಾಗಿ ಸ್ವಪ್ರೇರಣೆಯಿಂದ ದೀಪಾಲಂಕಾರವನ್ನು ಮಾಡಿ ಹಬ್ಬದ ವಾತಾವರಣ ಮೂಡಿಸಬೇಕು. ಜೊತೆಗೆ ಎಲ್ಲ ಇಲಾಖೆಗಳ ಅಧಿಕಾರಿ, ಸಿಬ್ಬಂದಿ ಕಡ್ಡಾಯವಾಗಿ ಕನ್ನಡ ರಾಜ್ಯೋತ್ಸವದಲ್ಲಿ ಭಾಗವಹಿಸುವಂತೆ ಸೂಚಿಸಿದರು.
ಸಭೆಯಲ್ಲಿ ಜಿಪಂ ಸಿಇಒ ಎಚ್.ಎಸ್.ಕೀರ್ತನಾ, ಎಸ್‌ಪಿ ವಿಕ್ರಮ ಅಮಟೆ, ಅಪರ ಜಿಲ್ಲಾಧಿಕಾರಿ ನಾರಾಯಣ ರಡ್ಡಿ ಕನಕರಡ್ಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿ.ರಮೇಶ್, ಕನ್ನಡಪರ ಸಂಘಟನೆಗಳ ಮುಖಂಡರು ಹಾಗೂ ಪದಾಧಿಕಾರಿಗಳು ಭಾಗವಹಿಸಿದ್ದರು.