

ಚಿತ್ರದುರ್ಗ: ನಗರದ ಜಿಲ್ಲಾಸ್ಪತ್ರೆಯ ಹಲವು ವಿಭಾಗಗಳಲ್ಲಿ ಸಾಕಷ್ಟು ಸುಧಾರಣೆ ಆಗಬೇಕಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರೋಣ್ ವಾಸುದೇವ ಹೇಳಿದರು.
ಜಿಲ್ಲಾಸ್ಪತ್ರೆಗೆ ಶನಿವಾರ ದಿಢೀರ್ ಭೇಟಿ ನೀಡಿ, ಆಸ್ಪತ್ರೆಯ ವಿವಿಧ ವಿಭಾಗಳನ್ನು ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಎಲ್ಲ ವಿಭಾಗಗಳನ್ನೂ ಪರಿಶೀಲಿಸಿದ್ದೇನೆ. ಕೆಲವೆಡೆ ಇನ್ನೂ ಸುಧಾರಣೆ ಆಗಬೇಕಿದೆ. ಇನ್ನು ಕೆಲವು ವಿಭಾಗಗಳು ಉತ್ತಮವಾಗಿವೆ. ಸುಧಾರಣೆ ಕುರಿತಂತೆ ಜಿಲ್ಲಾ ಶಸ್ತ್ರಚಿಕಿತ್ಸಕರಿಗೆ ಸಲಹೆ, ಸೂಚನೆಗಳನ್ನು ನೀಡಿದ್ದೇನೆ ಎಂದು ತಿಳಿಸಿದರು.
ಆಸ್ಪತ್ರೆಗೆ ಆಗಾಗ್ಗೆ ಭೇಟಿ ನೀಡಿ ಅಲ್ಲಿನ ಕಾರ್ಯವೈಖರಿ ಕುರಿತು ನಾಗರಿಕರಿಂದ ಮಾಹಿತಿ ಸಂಗ್ರಹಿಸುತ್ತೇನೆ. ಚಿಕಿತ್ಸಾ ಸೌಲಭ್ಯಗಳು ಉಚಿತವಾಗಿ ದೊರೆಯುತ್ತಿವೆಯೊ, ಇಲ್ಲವೋ ಎಂಬುದನ್ನೂ ಪರಿಶೀಲಿಸುತ್ತೇನೆ ಎಂದರು.
ವಿವಿಧ ವಾರ್ಡ್‌ಗಳಿಗೂ ಭೇಟಿ ನೀಡಿದ ನ್ಯಾಯಾಧೀಶರು, ರೋಗಿಗಳ ಆರೋಗ್ಯ ವಿಚಾರಿಸಿದರು. ವೈದ್ಯರು ಹಾಗೂ ರೋಗಿಗಳಿಂದ ಮಾಹಿತಿ ಪಡೆದರು. ಅರ್ಥೋಪೆಡಿಕ್, ಸರ್ಜಿಕಲ್, ಯುರಾಲಜಿ ಮತ್ತಿತರ ಹೊರರೋಗಿಗಳ ವಿಭಾಗ, ತುರ್ತು ಚಿಕಿತ್ಸೆ ವಾರ್ಡ್‌ಗಳು, ಶಸ್ತ್ರಚಿಕಿತ್ಸೆ ವಿಭಾಗ, ಹೈಟೆಕ್‌ಲ್ಯಾಬ್, ಕ್ಷ-ಕಿರಣ, ರಕ್ತನಿಧಿ ಕೇಂದ್ರ ಹಾಗೂ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಹಾಗೂ ಅಡುಗೆ ಮನೆಗೆ ಭೇಟಿ ನೀಡಿ ವೀಕ್ಷಿಸಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಹಿರಿಯ ಸಿವಿಲ್ ನ್ಯಾಯಾಧೀಶ ಎಂ. ವಿಜಯ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಎಸ್.ಪಿ. ರವೀಂದ್ರ, ಆರ್‌ಎಂಒ ಡಾ. ಆನಂದಪ್ರಕಾಶ್ ಮತ್ತಿತರರು ಇದ್ದರು.