ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿ ಸಾವು, ಕುಟುಂಬಸ್ಥರ ಆಕ್ರೋಶ

Death Case
Published on

ಬೆಳಗಾವಿ: ಬಳ್ಳಾರಿ ಜಿಲ್ಲಾಸ್ಪತ್ರೆ ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬಾಣಂತಿಯರ ಸಾವಿನ ಪ್ರಕರಣ ಮರೆಮಾಚುವ ಮುನ್ನವೇ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಭಾನುವಾರ ಬಾಣಂತಿ ಹೃದಯಘಾತದಿಂದ ಮೃತಪಟ್ಟ ಘಟನೆ ನಡೆದಿದ್ದು, ಸಕಾಲಕ್ಕೆ ವೈದ್ಯರು ತುರ್ತು ಚಿಕಿತ್ಸೆ ನೀಡದಿರುವುದಕ್ಕೆ ಬಾಣಂತಿ ಮೃತಪಟ್ಟಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಹುಕ್ಕೇರಿ ತಾಲೂಕಿನ ಗೌಡವಾಡ ಗ್ರಾಮದ ವೈಶಾಲಿ ಕೊಟಬಾಗಿ (20) ಮೃತ ಬಾಣಂತಿ. ಅಧಿಕ ರಕ್ತದೊತ್ತಡ ತೊಂದರೆಯಿಂದ ಬಳಲುತ್ತಿದ್ದ ಗರ್ಭಿಣಿನ್ನು ಹುಕ್ಕೇರಿ ತಾಲೂಕು ಆಸ್ಪತ್ರೆಯಿಂದ ಜಿಲ್ಲಾಸ್ಪತ್ರೆಗೆ ಕಳುಹಿಸಿಕೊಟ್ಟಿದ್ದರು. ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬಾರದಿರುವ ಹಿನ್ನೆಲೆ ಶನಿವಾರ ಸಿಜೇರಿಯನ್ ಮೂಲಕ ಹೆರಿಗೆ ಮಾಡಿಸಲಾಗಿತ್ತು. ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು.

ಈ ವೇಳೆ ಮಗು ಮತ್ತು ತಾಯಿ ಆರೋಗ್ಯವಾಗಿದ್ದರು. ಭಾನುವಾರ ಬೆಳಗ್ಗೆ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದ್ದರಿಂದ ತಕ್ಷಣ ಹೆರಿಗೆ ವಿಭಾಗದ ವೈದ್ಯರು, ತಜ್ಞ ವೈದ್ಯರು ತುರ್ತು ಚಿಕಿತ್ಸೆ ನೀಡಿದ್ದಾರೆ. ಆದರೆ, ಹೈ ಬಿಪಿ ನಿಯಂತ್ರಣಕ್ಕೆ ಬಾರದಿರುವ ಹಿನ್ನೆಲೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ (ಬಿಮ್ಸ್) ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲಾಸ್ಪತ್ರೆಯ ವೈದ್ಯರು, ನರ್ಸ್‌ಗಳು ಸಿಜೇರಿಯನ್ ಮೂಲಕ ಹೆರಿಗೆ ಮಾಡಿದ ಬಳಿಕ ಬಾಣಂತಿ ಮತ್ತು ಮಗವಿನ ಆರೋಗ್ಯ ಬಗ್ಗೆ ನಿರ್ಲಕ್ಷೃ ವಹಿಸಿದ್ದರು. ಬಾಣಂತಿ ಆರೋಗ್ಯದಲ್ಲಿ ಏರುಪೇರು ಉಂಟಾಗುತ್ತಿದ್ದರೂ ವೈದ್ಯರು ನಿರ್ಲಕ್ಷ್ಯ ವಹಿಸಿದ್ದರು. ಎದೆನೋವು ಕಾಣಿಸಿಕೊಂಡ ಬಳಿಕ ತಕ್ಷಣವೇ ಚಿಕಿತ್ಸೆ ನೀಡಲಿಲ್ಲ. ಬದಲಾಗಿ ಬಿಪಿ ಚೆಕ್ ಮಾಡಿ ಸುಮ್ಮನಾದರು. ಎದೆಯಲ್ಲಿ ತೀವ್ರ ನೋವು ಕಾಣಸಿಕೊಂಡ ಬಳಿಕ ತುರ್ತು ಚಿಕಿತ್ಸೆ ನೀಡಲು ವಿಳಂಬ ಮಾಡಿದ್ದರಿಂದ ಬಾಣಂತಿ ಮೃತಪಟ್ಟಿದ್ದಾಳೆ ಎಂದು ಕುಟುಂಬಸ್ಥರು ದೂರಿದ್ದಾರೆ. ಈ ಕುರಿತು ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸರ್ಕಾರಿ ಆಸ್ಪತ್ರೆಗಳ ವಿರುದ್ಧ ಕುತಂತ್ರ!: ಪ್ರತಿವರ್ಷ ರಾಜ್ಯದಲ್ಲಿ ಹೆರಿಗೆ ಅಂಕಿ ಸಂಖ್ಯೆ ಗಮನಿಸಿದರೆ ಖಾಸಗಿ ಆಸ್ಪತ್ರೆಗಳಿಗಿಂತ ಸರ್ಕಾರಿ ತಾಲೂಕು ಮತ್ತು ಜಿಲ್ಲಾಸ್ಪತ್ರೆಗಳಲ್ಲಿ ಹೆಚ್ಚು ಸಹಜ ಹೆರಿಗೆ ಆಗಿವೆ. ಕೆಲವರು ಸರ್ಕಾರಿ ಆಸ್ಪತ್ರೆಗಳಲ್ಲಿನ ಹೆರಿಗೆ ವಿಭಾಗಕ್ಕೆ ಕೆಟ್ಟು ಹೆಸರು ತರುವ ಮತ್ತು ಜನರನ್ನು ಸರ್ಕಾರಿ ಆಸ್ಪತ್ರೆಗಳಿಂದ ದೂರು ಮಾಡುವ ಉದ್ದೇಶದಿಂದ ಬಾಣಂತಿ ಸಾವು ಪ್ರಕರಣಗಳ ಕುರಿತು ಸುಳ್ಳು ಪ್ರಚಾರ ನಡೆಸುತ್ತಿದ್ದಾರೆ. ಖಾಸಗಿ ಆಸ್ಪತ್ರೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಾಣಂತಿಯರು ಮೃತಪಟ್ಟಿದ್ದಾರೆ. ಆ ವಿಷಯ ಕುರಿತು ಯಾರು ದನಿ ಎತ್ತುತ್ತಿಲ್ಲ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ದೂರಿದ್ದಾರೆ.

ಹೈ ಬಿಪಿಯಿಂದ ಬಳಲುತ್ತಿದ್ದ ಗರ್ಭಿಣಿ ಜಿಲ್ಲಾಸ್ಪತ್ರೆಯ ಹೆರಿಗೆ ವಿಭಾಗಕ್ಕೆ ಬಂದ ತಕ್ಷಣವೇ ಸಿಜೇರಿಯನ್ ಮೂಲಕ ಹೆರಿಗೆ ಮಾಡಿಸಲಾಗಿತ್ತು. ತದನಂತರ ತಾಯಿ ಮತ್ತು ಮಗು ಆರೋಗ್ಯವಾಗಿದ್ದರು. ಭಾನುವಾರ ಬೆಳಗ್ಗೆ ಎದೆಯಲ್ಲಿ ನೋವು ಕಂಡಿದ್ದರಿಂದ ತಕ್ಷಣವೇ ವೈದ್ಯರು ತುರ್ತು ಚಿಕಿತ್ಸೆ ನೀಡಿ ಹೈಬಿಪಿ ನಿಯಂತ್ರಣಕ್ಕೆ ತಂದಿದ್ದಾರೆ. ಬಳಿಕ ಬಾಣಂತಿ ಹೃದಯಾಘಾತದಿಂದ ಮೃತಪಟ್ಟಿದ್ದಾಳೆ. ಇದರಲ್ಲಿ ವೈದ್ಯರ ನಿರ್ಲಕ್ಷೃ ಇಲ್ಲ. ಕುಟುಂಬಸ್ಥರ ಆರೋಪ ಸತ್ಯಕ್ಕೆ ದೂರವಾಗಿದೆ.

| ಡಾ.ಅಶೋಕ ಶೆಟ್ಟಿ ಬಿಮ್ಸ್ ನಿರ್ದೇಶಕ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net