

ಚಾಮರಾಜನಗರ: ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆತಿಥ್ಯವನ್ನು ಚಾಮರಾಜನಗರಕ್ಕೆ ನೀಡಬೇಕೆಂದು ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರಾದ ಮಹೇಶ್ ಜೋಶಿ ಅವರಿಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಮನವಿ ಸಲ್ಲಿಸಲಾಯಿತು.
ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆಯಲ್ಲಿ ಮನವಿ ಪತ್ರ ಸಲ್ಲಿಸಲಾಯಿತು. ಚಾಮರಾಜನಗರ ಗಡಿ ಜಿಲ್ಲೆಯಾಗಿದ್ದು ಇದುವರೆಗೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯದೇ ಇರುವ ಜಿಲ್ಲೆಯಾಗಿದೆ. ಜಿಲ್ಲಾ ಕೇಂದ್ರವಾಗಿದ್ದು ಅಗತ್ಯ ಮೂಲ ಸೌಕರ್ಯ ಹಾಗೂ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿರುವ ಚಾಮರಾಜನಗರಕ್ಕೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನೀಡಿ ಸಾಹಿತ್ಯ, ಸಂಸ್ಕೃತಿ, ಪರಂಪರೆಗೆ ಹಾಗೂ ಚಾಮರಾಜನಗರಕ್ಕೆ ವಿಶೇಷ ಗೌರವ ತರಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕಸಾಪ ರಾಜ್ಯಾಧ್ಯಕ್ಷ ಮಹೇಶ್ ಜೋಶಿ ಪ್ರತಿಕ್ರಿಯಿಸಿ, ಖಂಡಿತವಾಗಿಯೂ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಗಡಿ ಜಿಲ್ಲೆ ಚಾಮರಾಜನಗರದಲ್ಲಿ 2026 ಅಥವಾ 2027 ನೇ ಸಾಲಿನಲ್ಲಿ ಆಯೋಜಿಸಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಶೈಲಕುಮಾರ್, ತಾಲೂಕು ಅಧ್ಯಕ್ಷ ಸುರೇಶ್ ಎನ್.ಋಗ್ವೇದಿ, ಕೊಳ್ಳೇಗಾಲ ತಾಲೂಕು ಅಧ್ಯಕ್ಷ ನಾಗರಾಜು ಕೊಂಗರಹಳ್ಳಿ, ಸಾಹಿತಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಜಿಲ್ಲಾಧ್ಯಕ್ಷ ಬಿಸಲವಾಡಿ ಸೋಮಶೇಖರ್ ಹಾಜರಿದ್ದರು.