

ಚಾಮರಾಜನಗರ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಲಿರುವ 2025-26ನೇ ಸಾಲಿನ ಬಜೆಟ್‌ನಲ್ಲಿ ಜಿಲ್ಲೆಯ ಕಲ್ಯಾಣಕ್ಕೆ ಒತ್ತು ನೀಡಬೇಕು ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಮಹೇಶ್ ಆಗ್ರಹಿಸಿದರು.
ಜಿಲ್ಲೆಯ ಆಕ್ಸಿಜನ್ ದುರಂತದ ಸಂತ್ರಸ್ತ ಕುಟುಂಬಸ್ಥರಿಗೆ ಈ ಬಜೆಟ್‌ನಲ್ಲಾದರೂ ಖಾಯಂ ನೌಕರಿ ನೀಡುವ ೋಷಣೆ ಮಾಡಬೇಕು. ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ ನಿರ್ಮಾಣಕ್ಕೆ ಅಗತ್ಯ ಅನುದಾನ ನೀಡಬೇಕು. ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಹೈಟೆಕ್ ಸ್ಪರ್ಶ ನೀಡಿ, ಕಲಿಕಾ ವಾತಾವರಣ ಸೃಷ್ಟಿಸಲು ಹೆಚ್ಚಿನ ಅನುದಾನ ನೀಡಬೇಕು. ಶಾಶ್ವತ ಕುಡಿಯುವ ನೀರು ಯೋಜನೆಗೆ ವಿಶೇಷ ಅನುದಾನ ನೀಡಬೇಕು. ಜಿಲ್ಲೆಯ ತೆಗೆ ತಾಲೂಕು ಕೇಂದ್ರಗಳ ಸಮಗ್ರ ಅಭಿವೃದ್ಧಿಗೆ ವಿಶೇಷ ಅನುದಾನವನ್ನು ಬಿಡುಗಡೆ ಮಾಡಬೇಕು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.
ಜಿಲ್ಲೆಯಲ್ಲಿ ಹೆಚ್ಚಾಗಿ ವಾಸಮಾಡುತ್ತಿರುವ ಆದಿವಾಸಿ, ಅಲೆಮಾರಿ, ಬುಡಕಟ್ಟು ಜನಾಂಗದವರ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು. ಜಿಲ್ಲೆಯ ಪ್ರವಾಸೋದ್ಯಮ ಇಲಾಖೆಗೆ ಹೆಚ್ಚಿನ ಅನುದಾನ ನೀಡಬೇಕು. ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿ, ಜಿಲ್ಲಾ ಕೇಂದ್ರದಲ್ಲಿ ಜಯದೇವ ಹೃದ್ರೋಗ ಘಟಕವನ್ನು ಮತ್ತು ಕಿದ್ವಾಯಿ ಉಪ ಘಟಕವನ್ನು ಸ್ಥಾಪನೆ ಮಾಡಲು ಕ್ರಮವಹಿಸಬೇಕು. ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ಜಿಲ್ಲಾಸ್ಪತ್ರೆಯನ್ನು ಮುಂದುವರಿಸುವ ನಿಟ್ಟಿನಲ್ಲಿ ಕ್ರಮವಹಿಸಬೇಕು ಎಂದು ಮನವಿ ಮಾಡಿದರು.
ಗೋಷ್ಠಿಯಲ್ಲಿ ಎಸ್ಡಿಪಿಐ ರಾಜ್ಯ ಸಮಿತಿ ಸದಸ್ಯ ಅಬ್ರಾರ್ ಅಹಮ್ಮದ್, ಜಿಲ್ಲಾಧ್ಯಕ್ಷ ಎನ್.ಖಲೀಲ್ ಉಲ್ಲಾ, ಉಪಾಧ್ಯಕ್ಷ ಸಿ.ಕೆ.ನಯಾಜ್ ಉಲ್ಲಾ, ಟೌನ್ ಅಧ್ಯಕ್ಷ ಮಜ್ಹರ್ ಖಾನ್ ಹಾಜರಿದ್ದರು.