ಜಿಲ್ಲೆಯಲ್ಲಿ 21 ನಮ್ಮ ಕ್ಲಿನಿಕ್ ಆರಂಭಕ್ಕೆ ಕ್ರಮ

02-22
ಬೆಳಗಾವಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ಜರುಗಿದ ರಾಜ್ಯೋತ್ಸವದಲ್ಲಿ ಸಚಿವ ಗೋವಿಂದ ಕಾರಜೋಳ, ಮಂಗಲ ಅಂಗಡಿ, ಈರಣ್ಣ ಕಡಾಡಿ, ಅಭಯ ಪಾಟೀಲ ಭುವನೇಶ್ವರಿದೇವಿಗೆ ಪೂಜೆ ಸಲ್ಲಿಸಿದರು. ನಿತೇಶ ಪಾಟೀಲ, ಡಾ.ಎಂ.ಬಿ.ಬೋರಲಿಂಗಯ್ಯ ಇತರರಿದ್ದರು.
Published on

ಬೆಳಗಾವಿ: ನಮ್ಮ ಕ್ಲಿನಿಕ್ ಯೋಜನೆ ಅಡಿಯಲ್ಲಿ ಜಿಲ್ಲೆಯ ತಾಲೂಕು ಕೇಂದ್ರಗಳಲ್ಲಿ 21 ಕ್ಲಿನಿಕ್‌ಗಳನ್ನು ಮತ್ತು ಬೆಳಗಾವಿ ನಗರದಲ್ಲಿ ಕಿದ್ವಾಯಿ ಸ್ಮಾರಕ ಗ್ರಂಥಿಗಳ ಸಂಸ್ಥೆಯ ಕ್ಯಾನ್ಸರ್ ಆಸ್ಪತ್ರೆಯನ್ನು ಶೀಘ್ರವಾಗಿ ಪ್ರಾರಂಭಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ತಿಳಿಸಿದರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ಜರುಗಿದ 67ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಭುವನೇಶ್ವರಿದೇವಿಗೆ ಪೂಜೆ ಸಲ್ಲಿಸಿ, ಕವಾಯತು ತಂಡಗಳಿಂದ ಗೌರವ ವಂದನೆ ಸ್ವೀಕರಿಸಿದ ಬಳಿಕ ಸಂದೇಶ ನೀಡಿದ ಅವರು, ಈಗಾಗಲೇ ಸರ್ಕಾರವು ಕಿದ್ವಾಯಿ ಸ್ಮಾರಕ ಗ್ರಂಥಿಗಳ ಸಂಸ್ಥೆಯ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣಕ್ಕೆ ಮಂಜೂರಾತಿ ನೀಡಿದ್ದು, ಕೂಡಲೇ ಆಸ್ಪತ್ರೆ ಆರಂಭಿಸಲು ಕ್ರಮ ವಹಿಸಲಾಗುವುದು ಎಂದರು.

ನೇಕಾರರ ಸಮ್ಮಾನ್ ಯೋಜನೆಯಡಿ ಕೈಮಗ್ಗ ನೇಕಾರರಿಗೆ ಪ್ರತಿ ವರ್ಷ ನೀಡಲಾಗುವ 2000 ರೂ.ಗಳನ್ನು 2022-23ನೇ ಸಾಲಿನಿಂದ ತಲಾ 5,000 ರೂ.ಗಳಿಗೆ ಹೆಚ್ಚಿಸಲಾಗಿದ್ದು, ಜಿಲ್ಲೆಯಲ್ಲಿ ಒಟ್ಟು 5,079 ಕೈಮಗ್ಗ ನೇಕಾರರು ಸದರಿ ಯೋಜನೆಯ ಪ್ರಯೋಜನ ಪಡೆಯಲಿದ್ದಾರೆ. ಮಾತೃವಂದನಾ ಯೋಜನೆಯಡಿ ಗರ್ಭಿಣಿ ಹಾಗೂ ಬಾಣಂತಿಯರಿಗೆ 5,000 ರೂ. ಗಳನ್ನು ಒಟ್ಟು 3 ಕಂತುಗಳಲ್ಲಿ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುತ್ತದೆ. ಒಟ್ಟು 1,64,995 ಫಲಾನುಭವಿಗಳಿಗೆ 66.34 ಕೋಟಿ ರೂ.ಮೊತ್ತವನ್ನು ಸಂದಾಯ ಮಾಡಲಾಗಿದೆ ಎಂದು ವಿವರಿಸಿದರು.

ಜಿಲ್ಲಾ ಕೈಗಾರಿಕಾ ಕೇಂದ್ರದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಒಟ್ಟು 44 ಕೈಗಾರಿಕೆ ಯೋಜನೆಗಳಿಗೆ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆಯಲ್ಲಿ ಅನುಮೋದನೆ ನೀಡಿದ್ದು, ಇದರಿಂದ ಸುಮಾರು 120.14 ಕೋಟಿ ರೂ.ಬಂಡವಾಳ ಹೂಡಿಕೆಯಾಗುತ್ತಿದ್ದು, 1,286 ಜನರಿಗೆ ಉದ್ಯೋಗಾವಕಾಶ ಸೃಷ್ಟಿಯಾಗಲಿದೆ. ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಯೋಜನೆಯಡಿ 2018 ಅಕ್ಟೋಬರ್ ರಿಂದ 2022 ಸಪ್ಟೆಂಬರ್‌ವರೆಗೆ ಒಟ್ಟು 1,75,636 ಫಲಾನುಭವಿಗಳಿಗೆ 176.51 ಕೋಟಿ ರೂ.ವಿನಿಯೋಗಿಸಲಾಗಿದೆ. ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ (ಬಿಮ್ಸ್) ಆವರಣದಲ್ಲಿ 140 ಕೋಟಿ ರೂ. ವೆಚ್ಚದ 1 ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಯನ್ನು ಶೀಘ್ರ ಲೋಕಾರ್ಪಣೆ ಮಾಡಲಾಗುವುದು ಎಂದು ತಿಳಿಸಿದರು.

ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಯಡಿ ರೈತರ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಲು ಪ್ರೌಢಶಿಕ್ಷಣ ವಿದ್ಯಾರ್ಥಿನಿಯರಿಗೆ ಹಾಗೂ ಎಸ್‌ಎಸ್‌ಎಲ್‌ಸಿ ನಂತರ ಉನ್ನತ ಶಿಕ್ಷಣಕ್ಕಾಗಿ ಪ್ರವೇಶ ಪಡೆದಿರುವ ರೈತರ 96,536 ಮಕ್ಕಳಿಗೆ ಒಟ್ಟು 36.11 ಕೋಟಿ ರೂ. ಶಿಷ್ಯವೇತನವನ್ನು ವಿದ್ಯಾರ್ಥಿಗಳಿಗೆ ನೀಡಲಾಗಿದೆ. ಸೆಪ್ಟಂಬರ್‌ನಲ್ಲಿ ಹೆಚ್ಚು ಮಳೆಯಿಂದಾಗಿ ಬೆಳೆಗಳಲ್ಲಿ ನೀರು ನಿಂತು 43,284 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿಗೊಳಗಾದ ಜಿಲ್ಲೆಯ 61,535 ರೈತ ಫಲಾನುಭವಿಗಳಿಗೆ 68.54 ಕೋಟಿ ರೂ. ಪರಿಹಾರ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.

ಸಂಸದೆ ಮಂಗಲ ಅಂಗಡಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕರಾದ ಅನಿಲ್ ಬೆನಕೆ, ಅಭಯ್ ಪಾಟೀಲ, ವಿಧಾನಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ ಪಾಟೀಲ, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಪಾಲಿಕೆ ಆಯುಕ್ತ ಡಾ.ರುದ್ರೇಶ ಘಾಳಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net