

ಚಾಮರಾಜನಗರ: ಬೇಸಿಗೆ ರಜೆಯಲ್ಲಿ ಕಾಲಕಳೆಯುತ್ತಿದ್ದ ವಿದ್ಯಾರ್ಥಿಗಳು ಶಾಲೆಗಳಿಗೆ ಹೋಗುವ ಸಮಯ ಬಂದಿದ್ದು, ಶಿಕ್ಷಣ ಇಲಾಖೆ ಶಾಲೆಗಳ ಪ್ರಾರಂಭಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ.
ಜಿಲ್ಲೆಯಲ್ಲಿ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳನ್ನು ಒಳಗೊಂಡಂತೆ 343 ಕಿರಿಯ ಪ್ರಾಥಮಿಕ ಶಾಲೆ, 521 ಹಿರಿಯ ಪ್ರಾಥಮಿಕ ಶಾಲೆ ಹಾಗೂ 238 ಪ್ರೌಢಶಾಲೆಗಳಿವೆ. ಒಟ್ಟಾರೆಯಾಗಿ 1102 ಶಾಲೆಗಳು ಇದ್ದು, ಬೇಸಿಗೆ ರಜೆ ಪ್ರಾರಂಭವಾದ ದಿನಗಳಿಂದಲೂ ನಿರಂತರವಾಗಿ ದಾಖಲಾತಿ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ. ಅದರಂತೆ 2025-26 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳು ಮೇ 30 ರಿಂದ ಪ್ರಾರಂಭವಾಗಲಿದೆ. ಈಗಾಗಲೇ ಮೇ 28 ರಂದು ಕೆಲವು ಕಡೆಗಳಲ್ಲಿ ಶಾಲೆಗಳಿಗೆ ಶಿಕ್ಷಕರು ಭೇಟಿ ನೀಡಿ ಶಾಲೆಯ ಮೂಸೌಕರ್ಯದ ಕುರಿತು ಪರಿಶೀಲನೆ ನಡೆಸಿದ್ದಾರೆ. ಶಾಲೆಗಳಲ್ಲಿ ಅಗತ್ಯ ಕೊಠಡಿಗಳು, ಅಡುಗೆ ಮನೆ, ಶೌಚಾಲಯ, ಕುಡಿಯುವ ನೀರಿನ ಟ್ಯಾಂಕ್ ಹಾಗೂ ಇನ್ನಿತರೆ ಸಾಮಗ್ರಿಗಳನ್ನು ಪರಿಶೀಲಿಸಿದ್ದಾರೆ. ಸ್ವಚ್ಛತೆಗೆ ಯಾವ ರೀತಿಯ ಕ್ರಮ ಕೈಗೊಳ್ಳಬೇಕು. ಬಿಸಿಯೂಟದ ಅಡುಗೆಗೆ ಸಾಮಗ್ರಿಗಳ ವ್ಯವಸ್ಥೆ ಮಾಡಬೇಕು. ಒಟ್ಟಾರೆ ಎಲ್ಲ ಸಿದ್ಧತೆಗಳನ್ನು ಮಾಡಬೇಕು ಎಂಬ ಅಧಿಕಾರಿಗಳ ಸೂಚನೆಯಂತೆ ಶಿಕ್ಷಕರು ಶಾಲೆಗಳಿಗೆ ತೆರಳಿ ಪಟ್ಟಿ ಮಾಡಿಕೊಂಡಿದ್ದಾರೆ. ಕೆಲವು ಶಾಲೆಗಳಲ್ಲಿ ಮೇ 29 ರಂದು ಶಾಲೆಗಳಿಗೆ ಶಿಕ್ಷಕರು ಭೇಟಿ ನೀಡಲು ಸಿದ್ಧತೆ ಮಾಡಿಕೊಂಡಿದ್ದು, ಒಟ್ಟಾರೆಯಾಗಿ ಮೇ 30 ರಂದು ಶಾಲೆಗಳು ಪ್ರಾರಂಭವಾಗಲಿದೆ. ಈ ಸಂಬಂಧ ಈಗಾಗಲೇ ಎಲ್ಲಾ ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಶಾಲಾ ಮುಖ್ಯಶಿಕ್ಷಕರೊಂದಿಗೆ ಸಭೆ ನಡೆಸಿದ್ದು, ಪ್ರತಿವರ್ಷದಂತೆಯೇ ಈ ವರ್ಷವೂ ಮಕ್ಕಳನ್ನು ಶಾಲೆಗಳಿಗೆ ಸ್ವಾಗತಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಮಚಂದ್ರರಾಜೇ ಅರಸ್ ವಿಜಯವಾಣಿಗೆ ಮಾಹಿತಿ ನೀಡಿದರು.
ಸಿಹಿಯೊಂದಿಗೆ ಸ್ವಾಗತ:
ಜಿಲ್ಲೆಯ ಎಲ್ಲಾ ಸರ್ಕಾರಿ ಶಾಲೆಗಳಿಗೆ ಮೊದಲ ದಿನದಿಂದಲೇ ಅಕ್ಷರ ದಾಸೋಹ ಪ್ರಾರಂಭವಾಗಲಿದ್ದು, ವಿದ್ಯಾರ್ಥಿಗಳನ್ನು ಸಿಹಿಯೊಂದಿಗೆ ಸ್ವಾಗತಿಸಲು ಶಿಕ್ಷಣ ಇಲಾಖೆಯಿಂದ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈಗಾಗಲೇ ಶಿಕ್ಷಣ ಇಲಾಖೆಯಿಂದ ಆಯಾ ಶಾಲೆಯ ಮುಖ್ಯ ಶಿಕ್ಷಕರ ಸಭೆ ಕರೆದು ಮಾಹಿತಿ ನೀಡಿಲಾಗಿದೆ. ಜಿಲ್ಲೆಯ ಕೆಲವು ಶಾಲೆಗಳಿಗೆ ಮೇ 28 ರಂದು ಶಿಕ್ಷಕರು ಮತ್ತು ಮಕ್ಕಳು ಬಂದು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದ ದೃಶ್ಯಗಳು ಕಂಡುಬಂದವು. ಕೆಲವು ಶಾಲೆಗಳಲ್ಲಿ ಮೇ 29 ರಂದು ಸಿದ್ಧತೆ ಮಾಡಿಕೊಳ್ಳಲಿದ್ದು, ಒಟ್ಟಾರೆಯಾಗಿ ಮೇ 30 ರಂದು ಶಾಲೆಗಳು ಅಧಿಕೃತವಾಗಿ ಆರಂಭವಾಗಲಿದೆ. ಮೊದಲ ದಿನ ಮಕ್ಕಳಿಗೆ ಏನಾದರೂ ಸಿಹಿಯೂಟದ ವ್ಯವಸ್ಥೆ, ಶಾಲೆಗಳನ್ನು ತಳಿರು, ತೋರಣಗಳಿಂದ ಅಲಂಕರಿಸುವುದು, ಶಾಲಾ ಅಂಗಳದಲ್ಲಿ ಹಬ್ಬದ ವಾತಾವರಣ ನಿರ್ಮಾಣ ಮಾಡುವಂತೆ ಸೂಚಿಸಲಾಗಿದೆ. ಶಾಲಾ ಶಿಕ್ಷಕರು, ಎಸ್‌ಡಿಎಂಸಿ ಸದಸ್ಯರು ಹಾಗೂ ಇನ್ನಿತರೆ ಸ್ಥಳೀಯ ಜನಪ್ರತಿನಿಧಿಗಳನ್ನು ಒಳಗೊಂಡಂತೆ ಶಾಲೆಗಳನ್ನು ಪ್ರಾರಂಭಿಸಲು ಹಲವು ಶಾಲೆಗಳಲ್ಲಿ ಭರದ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
ಶೇ.80 ರಷ್ಟು ಪುಸ್ತಕ ವಿತರಣೆ:
ಜಿಲ್ಲೆಯ ಕಿರಿಯ ಪ್ರಾಥಮಿಕ ಶಾಲೆ, ಹಿರಿಯ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ಶಾಲೆ ಪ್ರಾರಂಭದ ದಿನವೇ ಶೇ.80 ರಷ್ಟು ಪಠ್ಯ ಪುಸ್ತಕಗಳನ್ನು ವಿತರಣೆ ಮಾಡಲಾಗುತ್ತದೆ. ಪ್ರತಿಯೊಂದು ಶಾಲೆಗಳಲ್ಲೂ ಅಂದೇ ಶೇ.100 ರಷ್ಟು ಸಮವಸವನ್ನು ವಿತರಣೆ ಮಾಡಲು ಕೂಡ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅದರ ಜತೆಗೆ ಕೆಲವು ಶಾಲೆಗಳಲ್ಲಿ ಮಕ್ಕಳನ್ನು ಸ್ವಾಗತಿಸಲು ವಿಭಿನ್ನವಾದ ಕಾರ್ಯಕ್ರಮಗಳನ್ನು ಆಯೋಜಿಸಲು ತಯಾರಿ ಮಾಡಿಕೊಳ್ಳಲಾಗಿದೆ. ಕೆಲವು ಶಾಲೆಗಳಲ್ಲಿ ಮಕ್ಕಳನ್ನು ಎತ್ತಿನ ಗಾಡಿಗಳಲ್ಲಿ ಮಕ್ಕಳನ್ನು ಶಾಲೆಗೆ ಕರೆತರುವ ತಯಾರಿ ಮಾಡಿಕೊಳ್ಳಲಾಗಿದೆ. ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸುವ ಮೂಲಕ ಮಕ್ಕಳನ್ನು ಶಾಲೆಗೆ ಬರಮಾಡಿಕೊಳ್ಳಲು ಕೆಲವು ಶಾಲೆಗಳಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಜಿಲ್ಲೆಯಲ್ಲಿ ಮೇ 29 ರಿಂದ ಶಿಕ್ಷಕರು ಶಾಲೆಗಳಿಗೆ ತೆರಳಿ ಸಿದ್ಧತೆ ಮಾಡಿಕೊಳ್ಳಲಿದ್ದಾರೆ. ಮೇ 30 ರಿಂದ ಅಧಿಕೃತವಾಗಿ ಶಾಲೆಗಳು ಪ್ರಾರಂಭವಾಗಲಿದೆ. ಈ ಬಾರಿ ವಿಶೇಷವಾಗಿ ಮಕ್ಕಳನ್ನು ಬರಮಾಡಿಕೊಳ್ಳವಂತೆ ಸೂಚನೆ ನೀಡಲಾಗಿದೆ. ಈಗಾಗಲೇ ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರು ಹಾಗೂ ಬಿಇಓಗಳ ಸಭೆ ಕರೆದು ಸೂಚನೆಯನ್ನು ನೀಡಲಾಗಿದೆ. ಈ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
-ರಾಮಚಂದ್ರರಾಜೇ ಅರಸ್, ಉಪನಿರ್ದೇಶಕ, ಶಾಲಾ ಶಿಕ್ಷಣ ಇಲಾಖೆ, ಚಾಮರಾಜನಗರ