

ಚಿಕ್ಕಬಳ್ಳಾಪುರ: ಜಿಲ್ಲಾದ್ಯಂತ ಏ.18ರಿಂದ ಏ.22 ರವರೆಗೆ ನುರಿತ ವೈದ್ಯರನ್ನೊಳಗೊಂಡಂತೆ ತಾಲೂಕು ಮಟ್ಟದ ಉಚಿತ ಆರೋಗ್ಯ ತಪಾಸಣೆ, ಚಿಕಿತ್ಸೆ ಮತ್ತು ಔಷಧ ವಿತರಣೆಯ ಬೃಹತ್ ಮೇಳವನ್ನು ಜಿಲ್ಲಾಡಳಿತ ಹಮ್ಮಿಕೊಂಡಿದೆ. ಜಿಲ್ಲಾಡಳಿತ ಭವನದಲ್ಲಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಆರ್.ಲತಾ ನೇತೃತ್ವದಲ್ಲಿ ಸೋಮವಾರ ಆಯೋಜಿಸಿದ್ದ ಅಂತರ್ ಇಲಾಖಾ ಸಮನ್ವಯ ಸಮಿತಿ ಸಭೆಯಲ್ಲಿ ಆರೋಗ್ಯ ಸೇವಾ ಕಾರ್ಯಕ್ರಮಗಳ ಪೂರ್ವ ಸಿದ್ಧತೆಯ ಬಗ್ಗೆ ಚರ್ಚಿಸಲಾಯಿತು.
ಈ ಮೇಳದಲ್ಲಿ ಆರೋಗ್ಯ ಇಲಾಖೆಯಿಂದ ಡಿಜಿಟಲ್ ಹೆಲ್ತ್ ಕಾರ್ಡ್, ಆಯುಷ್ಮಾನ್ ಭಾರತ್ ಕಾರ್ಡ್, ಪಿಎಂ-ಜೆಎವೈ ಕಾರ್ಡ್‌ಗಳ ನೋಂದಣಿ, ಮಧುಮೇಹ, ಅಧಿಕ ರಕ್ತದೊತ್ತಡ ಮತ್ತು ಬಾಯಿ ಕ್ಯಾನ್ಸರ್ ತಪಾಸಣೆ, ಆರೋಗ್ಯ ಶಿಕ್ಷಣ ಮತ್ತು ಆರೋಗ್ಯ ಪ್ರಚಾರ, ಜೀವನಶೈಲಿ ಸಮಾಲೋಚನೆ, ಕ್ಷೇಮ, ಯೋಗಾ ಮತ್ತು ಧ್ಯಾನ, ಆಯುರ್ ಔಷಧ ಕೌಂಟರ್, ಆಹಾರ ಇಲಾಖೆಯ ಮಳಿಗೆ ಹಾಗೂ ಅರಿವು ಮೂಡಿಸುವಿಕೆ ಸೇರಿ 25 ಕೇಂದ್ರಗಳನ್ನು ಸ್ಥಾಪಿಸಲಾಗುತ್ತದೆ. ಉಚಿತ ಆರೋಗ್ಯ ಸೇವೆ ಒದಗಿಸಲಾಗುತ್ತದೆ. ಹೃದಯಕ್ಕೆ ಸಂಬಂಧಿಸಿದ ಕಾಯಿಲೆ, ಮಧುಮೇಹ, ದಂತ, ಕಿವಿ ಗಂಟಲು, ಮೂಳೆ, ತಾಯಿ ಮತ್ತು ಮಕ್ಕಳ ಆರೋಗ್ಯ ತಪಾಸಣೆ ಸೇರಿ 67 ರೀತಿಯ ರಕ್ತದ ಪರೀಕ್ಷೆಗಳು ಹಾಗೂ ಆರೋಗ್ಯ ತಪಾಸಣೆ ಕೈಗೊಳ್ಳಲಾಗುತ್ತದೆ. ತಪಾಸಣೆಗೊಳಪಟ್ಟವರಿಗೆ ವೈದ್ಯರ ಸಲಹೆ ಮೇರೆಗೆ 145 ವಿವಿಧ ರೀತಿ ಔಷಧಗಳನ್ನು ಉಚಿತವಾಗಿ ವಿತರಿಸಲಾಗುತ್ತದೆ. ಇದನ್ನು ಸದ್ವಿನಿಯೋಗಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದರು.
ಸಭೆಯಲ್ಲಿ ಜಿಪಂ ಸಿಇಒ ಪಿ.ಶಿವಶಂಕರ್, ಎಸ್ಪಿ ಜಿ.ಕೆ.ಮಿಥುನ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಇಂದಿರಾ ಆರ್.ಕಬಾಡೆ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಮತ್ತಿತರರು ಇದ್ದರು.
17 ಕ್ಕೆ ಯೋಗಾಭ್ಯಾಸ: ಆರೋಗ್ಯ ಇಲಾಖೆಯಿಂದ ಏ.17ರಂದು ಜಿಲ್ಲೆಯ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳು, 57 ಪ್ರಾಥಮಿಕ ಆರೋಗ್ಯ ಕೇಂದ್ರಗಳು (ಪಿಎಚ್‌ಸಿ) ಹಾಗೂ 161 ಉಪಕೇಂದ್ರಗಳಲ್ಲಿ ಸಾರ್ವಜನಿಕರಿಗೆ ಯೋಗಾಸನ ತರಬೇತಿ ಕಾರ್ಯಕ್ರಮ ಕೈಗೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಏ.16ರಂದು ಜಿಲ್ಲೆಯ ಎಲ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿನ ಆರೋಗ್ಯಾಧಿಕಾರಿಗಳು ಹಾಗೂ ಕಾರ್ಯಕರ್ತರು ಸಮಾಲೋಚನೆ ನಡೆಸಲಿದ್ದು, ಅಗತ್ಯ ಸಿದ್ಧತೆ ಕೈಗೊಳ್ಳಲಿದ್ದಾರೆ.