ಜೀವನ ಪರೀಕ್ಷೆಯಲ್ಲಿನ ಯಶ ಮುಖ್ಯ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅಭಿಪ್ರಾಯ

parikshe
Published on

ಹುಬ್ಬಳ್ಳಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಕ್ಕಳಲ್ಲಿ ಪರೀಕ್ಷಾ ಭಯ ಹೋಗಲಾಡಿಸುವ ಉದ್ದೇಶದಿಂದ ನಡೆಸುತ್ತಿರುವ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದ ನೇರ ಪ್ರಸಾರವನ್ನು ಇಲ್ಲಿಯ ಸವಾಯಿ ಗಂಧರ್ವ ಹಾಲ್​ನಲ್ಲಿ ಶುಕ್ರವಾರ ಏರ್ಪಡಿಸಲಾಗಿತ್ತು.

ವಿವಿಧ ಶಾಲೆ, ಕಾಲೇಜುಗಳ ಸಾವಿರಕ್ಕೂ ಹೆಚ್ಚು ಮಕ್ಕಳು ಪಾಲ್ಗೊಂಡಿದ್ದರು. ವಿದ್ಯಾರ್ಥಿಗಳೊಂದಿಗೆ ಕಾರ್ಯಕ್ರಮ ವೀಕ್ಷಿಸಿದ ನಂತರ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು, ವಿದ್ಯಾರ್ಥಿಗಳು ಪರೀಕ್ಷೆ ಸಂದರ್ಭದಲ್ಲಿ ಒತ್ತಡಕ್ಕೆ ಒಳಗಾಗದೇ ಜೀವನದ ಪರೀಕ್ಷೆಯಲ್ಲಿ ಯಶ ಸಾಧಿಸಬೇಕು ಎಂದು ಹೇಳಿದರು.

ವಿದ್ಯಾರ್ಥಿಗಳು ಒಳ್ಳೆಯ ಪ್ರಯತ್ನ ಮಾಡಿ, ಸಾಧಕರಿಂದ ಪ್ರೇರಣೆ ಪಡೆದು ಜೀವನ ರೂಪಿಸಿಕೊಳ್ಳಬೇಕು. ಪ್ರಧಾನ ಮಂತ್ರಿಗಳ ಮಾತುಗಳಿಂದ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ದೊರೆಯಲಿದೆ. ಇಂಗ್ಲಿಷ್ ಹಾಗೂ ಹಿಂದಿ ಭಾಷೆಯಲ್ಲಿದ್ದ ಪ್ರಧಾನಿಯವರ ಎಕ್ಸಾಂ ವಾರಿಯರ್ಸ್ ಪುಸ್ತಕವನ್ನು ಕನ್ನಡಕ್ಕೆ ಭಾಷಾಂತರಿಸಿ ವಿತರಿಸಲಾಗುತ್ತಿದೆ. ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಸುರೇಶ ಇಟ್ನಾಳ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಗಂಗಾಧರ ಕಂದಕೂರ, ಪಾಲಿಕೆ ಸದಸ್ಯರಾದ ಸಂತೋಷ ಚವ್ಹಾಣ, ರೂಪಾ ಶೆಟ್ಟಿ, ವೀರಣ್ಣ ಸವಡಿ, ವಿವಿಧ ಇಲಾಖೆಗಳ ಅಧಿಕಾರಿಗಳು, ಪ್ರಾಧ್ಯಾಪಕರು, ವಿದ್ಯಾರ್ಥಿಗಳು, ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net